1 : “ಸ್ವರ್ಗ ಸಾಮ್ರಾಜ್ಯವು ಹೀಗಿದೆ: ಒಬ್ಬ ಯಜಮಾನನಿಗೆ ಒಂದು ದ್ರಾಕ್ಷಿ ತೋಟವಿತ್ತು. ಅದರಲ್ಲಿ ಕೆಲಸ ಮಾಡುವುದಕ್ಕೆ ಕೂಲಿಗಾರರನ್ನು ಗೊತ್ತುಮಾಡಲು ಅವನು ಬೆಳಗಿನ ಜಾವದಲ್ಲೇ ಹೊರಟ.
2 : ಆಳಿಗೆ ಒಂದು ಬೆಳ್ಳಿ ನಾಣ್ಯದಂತೆ ದಿನಕೂಲಿಯನ್ನು ಮಾತಾಡಿ ತೋಟಕ್ಕೆ ಕಳುಹಿಸಿದ.
3 : ಸುಮಾರು ಬೆಳಿಗ್ಗೆ ಒಂಭತ್ತು ಗಂಟೆಗೆ ಅವನು ಪುನಃ ಸಂತೆಬೀದಿಯ ಕಡೆ ಹೋದ. ಕೆಲಸವಿಲ್ಲದೆ ಸುಮ್ಮನೆ ನಿಂತುಕೊಂಡಿದ್ದ ಕೆಲವು ಕೂಲಿಗಾರರನ್ನು ಅಲ್ಲಿ ಕಂಡ.
4 : ’ನೀವೂ ನನ್ನ ದ್ರಾಕ್ಷಿತೋಟಕ್ಕೆ ಹೋಗಿರಿ; ನ್ಯಾಯವಾದ ಕೂಲಿಯನ್ನು ನಿಮಗೆ ಕೊಡುತ್ತೇನೆ,’ ಎಂದ. ಅವರೂ ಹೋದರು.
5 : ಬಳಿಕ ಸುಮಾರು ಹನ್ನೆರಡು ಗಂಟೆಗೊಮ್ಮೆ ಮತ್ತೆ ಮೂರು ಗಂಟೆಗೊಮ್ಮೆ ಹೋಗಿ ಇನ್ನೂ ಕೆಲವರನ್ನು ಕೆಲಸಕ್ಕೆ ಕಳುಹಿಸಿದ.
6 : ಐದು ಗಂಟೆಗೆ ಹೋದಾಗಲೂ ಬೇರೆ ಕೆಲವರು ಅಲ್ಲಿ ನಿಂತಿರುವುದನ್ನು ಕಂಡು, ‘ದಿನವಿಡೀ ಕೆಲಸ ಮಾಡದೆ ಸುಮ್ಮನೆ ಇಲ್ಲಿ ನಿಂತಿದ್ದೀರಲ್ಲಾ, ಏಕೆ?’ ಎಂದು ಕೇಳಿದ.
7 : ಅದಕ್ಕೆ ಅವರು, ‘ನಮ್ಮನ್ನು ಯಾರೂ ಕೂಲಿಗೆ ಕರೆಯಲಿಲ್ಲ,’ ಎಂದರು. ‘ಹಾಗಾದರೆ ನೀವೂ ಕೂಡ ನನ್ನ ದ್ರಾಕ್ಷಿ ತೋಟಕ್ಕೆ ಹೋಗಿ ಕೆಲಸಮಾಡಿ,’ ಎಂದು ಹೇಳಿ ಅವರನ್ನೂ ಕಳುಹಿಸಿದ.
8 : “ಸಂಜೆಯಾಯಿತು. ತೋಟದ ಯಜಮಾನ ತನ್ನ ಮೇಸ್ತ್ರಿಗೆ, ‘ಕೂಲಿಯಾಳುಗಳನ್ನು ಕರೆದು, ಕೊನೆಗೆ ಬಂದವರಿಂದ ಆರಂಭಿಸಿ ಮೊದಲು ಬಂದವರ ತನಕ ಕೂಲಿಕೊಡು,’ ಎಂದ.
9 : ಅದರಂತೆ ಐದು ಗಂಟೆಗೆ ಗೊತ್ತುಮಾಡಿದವರು ಬಂದಾಗ ಒಬ್ಬೊಬ್ಬನಿಗೆ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು.
10 : ಮೊತ್ತಮೊದಲು ಗೊತ್ತುಮಾಡಿದವರು ತಮ್ಮ ಸರದಿ ಬಂದಾಗ, ತಮಗೆ ಹೆಚ್ಚು ಸಿಗುವುದೆಂದು ಭಾವಿಸಿದರು. ಆದರೆ ಅವರಿಗೂ ಒಂದೊಂದೇ ಬೆಳ್ಳಿನಾಣ್ಯ ದೊರಕಿತು.
11 : ಅದನ್ನು ತೆಗೆದುಕೊಂಡಾಗ ಅವರು ದಣಿಯ ವಿರುದ್ಧ ಗೊಣಗಲಾರಂಭಿಸಿದರು.
12 : ‘ಕಡೇ ಹೊತ್ತಿನಲ್ಲಿ ಬಂದ ಇವರು ಒಂದೇ ಒಂದು ಗಂಟೆ ಕೆಲಸಮಾಡಿದ್ದಾರೆ; ಬಿಸಿಲಲ್ಲಿ ಬೆಂದು, ದಿನವೆಲ್ಲಾ ದುಡಿದ ನಮ್ಮನ್ನು ಇವರಿಗೆ ಸರಿಸಮ ಮಾಡಿದ್ದೀರಲ್ಲಾ!’ ಎಂದರು.
13 : ಅದಕ್ಕೆ ಯಜಮಾನ ಅವರಲ್ಲಿ ಒಬ್ಬನಿಗೆ, ‘ಅಯ್ಯಾ, ನಿನಗೆ ನಾನು ಅನ್ಯಾಯ ಮಾಡಿಲ್ಲ. ದಿನಕ್ಕೊಂದು ಬೆಳ್ಳಿನಾಣ್ಯದಂತೆ ನೀನು ನನ್ನೊಡನೆ ಒಪ್ಪಂದ ಮಾಡಿಕೊಳ್ಳಲಿಲ್ಲವೆ?
14 : ನಿನ್ನ ಕೂಲಿ ಏನೋ ಅದನ್ನು ತೆಗೆದುಕೊಂಡು ಹೋಗು. ನಿನಗೆ ಕೊಟ್ಟಷ್ಟನ್ನು ಈ ಕಟ್ಟಕಡೆಯವನಿಗೂ ಕೊಡುವುದು ನನ್ನ ಇಷ್ಟ.
15 : ನನ್ನದನ್ನು ನನ್ನಿಷ್ಟಾನುಸಾರ ಕೊಡುವ ಹಕ್ಕು ನನಗಿಲ್ಲವೆ? ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?’ ಎಂದ.
16 : ಹೀಗೆ, ಕಡೆಯವರು ಮೊದಲಿನವರಾಗುವರು; ಮೊದಲಿನವರು ಕಡೆಯವರಾಗುವರು,” ಎಂದು ಯೇಸು ಬೋಧಿಸಿದರು.
17 : ಯೇಸುಸ್ವಾಮಿ ಜೆರುಸಲೇಮಿನತ್ತ ಹೋಗುವಾಗ ದಾರಿಯಲ್ಲಿ, ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಪ್ರತ್ಯೇಕವಾಗಿ ಕರೆದು,
18 : “ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ನರಪುತ್ರನನ್ನು ಮುಖ್ಯಯಾಜಕರ ಮತ್ತು ಧರ್ಮಶಾಸ್ತ್ರಿಗಳ ವಶಕ್ಕೆ ಒಪ್ಪಿಸುವರು.
19 : ಆತನು ಮರಣದಂಡನೆಗೆ ಅರ್ಹನೆಂದು ಅವರು ತೀರ್ಮಾನಿಸಿ ಪರಕೀಯರ ಕೈಗೊಪ್ಪಿಸುವರು. ಇವರು ಆತನನ್ನು ಪರಿಹಾಸ್ಯ ಮಾಡುವರು, ಕೊರಡೆಗಳಿಂದ ಹೊಡೆಯುವರು, ಮತ್ತು ಶಿಲುಬೆಗೇರಿಸುವರು. ಆತನಾದರೋ ಮೂರನೇ ದಿನ ಪುನರುತ್ಥಾನ ಹೊಂದುವನು,” ಎಂದರು.
ಆಳಾಗಬಲ್ಲವ ಅರಸಾಗಬಲ್ಲ
(ಮಾರ್ಕ 10.35-35)
20 : ಆಗ ಜೆಬೆದಾಯನ ಮಕ್ಕಳ ತಾಯಿ ತನ್ನ ಪುತ್ರರ ಸಮೇತ ಯೇಸುಸ್ವಾಮಿಯ ಬಳಿಗೆ ಬಂದಳು. “ತಮ್ಮಿಂದ ನನಗೊಂದು ಉಪಕಾರ ಆಗಬೇಕು,” ಎಂದು ಸ್ವಾಮಿಯ ಪಾದಕ್ಕೆರಗಿದಳು.
21 : “ನಿನ್ನ ಕೋರಿಕೆ ಏನು?” ಎಂದರು ಯೇಸು. ಅದಕ್ಕೆ ಅವಳು, “ತಮ್ಮ ಸಾಮ್ರಾಜ್ಯದಲ್ಲಿ, ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ತಮ್ಮ ಎಡಗಡೆಯಲ್ಲೂ ಆಸೀನರಾಗುವಂತೆ ಅಪ್ಪಣೆಯಾಗಬೇಕು,” ಎಂದು ಕೋರಿದಳು.
22 : ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯಬೇಕಾದ ಪಾತ್ರೆಯಿಂದ ಕುಡಿಯಲು ನಿಮ್ಮಿಂದ ಆದೀತೆ?” ಎಂದು ಪ್ರಶ್ನಿಸಿದರು. “ಹೌದು, ಆಗುತ್ತದೆ,” ಎಂದು ಅವರು ಮರುನುಡಿದರು.
23 : ಆಗ ಯೇಸು, “ನನ್ನ ಪಾತ್ರೆಯಿಂದ ನೀವೇನೋ ಕುಡಿಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ನನ್ನ ಪಿತನಿಂದ ಸಿದ್ಧಮಾಡಲಾಗಿದೆಯೋ ಅವರಿಗೇ ಸಿಗುವುದು,” ಎಂದು ನುಡಿದರು.
24 : ಉಳಿದ ಹತ್ತುಮಂದಿ ಶಿಷ್ಯರು ಇದನ್ನು ಕೇಳಿದಾಗ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು.
25 : ಯೇಸುವಾದರೋ, ಶಿಷ್ಯರೆಲ್ಲರನ್ನೂ ತಮ್ಮ ಬಳಿಗೆ ಕರೆದು, “ಲೋಕದ ಪ್ರಜಾಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದರ್ಪದಿಂದ ದೊರೆತನ ಮಾಡುತ್ತಾರೆ; ಜನನಾಯಕರು ಎನ್ನಿಸಿಕೊಳ್ಳುವವರು ಜನರ ಮೇಲೆ ಅಧಿಕಾರ ಪ್ರದರ್ಶನ ಮಾಡುತ್ತಾರೆ.
26 : ಇದು ನಿಮಗೆ ಗೊತ್ತು. ನೀವು ಹಾಗಿರಬಾರದು.
27 : ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಛಿಸುವವನು ನಿಮಗೆ ಸೇವಕನಾಗಿರಲಿ. ಪ್ರಥಮನಾಗಿರಲು ಆಶಿಸುವವನು ನಿಮ್ಮ ದಾಸನಾಗಿರಲಿ.
28 : ಹಾಗೆಯೇ ನರಪುತ್ರನು ಸೇವೆ ಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆ ಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.
29 : ಅವರೆಲ್ಲರೂ ಜೆರಿಕೊ ಪಟ್ಟಣವನ್ನು ಬಿಟ್ಟು ಹೊರಟರು. ಜನರ ದೊಡ್ಡ ಗುಂಪು ಯೇಸುಸ್ವಾಮಿಯನ್ನು ಹಿಂಬಾಲಿಸಿತು.
30 : ದಾರಿಯ ಪಕ್ಕದಲ್ಲಿ ಇಬ್ಬರು ಕುರುಡರು ಕುಳಿತಿದ್ದರು. ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾರೆಂದು ಕೇಳಿದೊಡನೆಯೇ, “ಸ್ವಾವಿೂ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ಆ ಕುರುಡರು ಕೂಗಿಕೊಂಡರು.
31 : ಸುಮ್ಮನಿರಬೇಕೆಂದು ಜನರು ಅವರನ್ನು ಗದರಿಸಿದರು. ಅವರಾದರೋ “ಸ್ವಾವಿೂ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ಇನ್ನೂ ಗಟ್ಟಿಯಾಗಿ ಕೂಗಿಕೊಂಡರು.
32 : ಯೇಸು ಅಲ್ಲೇ ನಿಂತು, ಅವರನ್ನು ಕರೆದರು. “ನನ್ನಿಂದ ನಿಮಗೇನಾಗಬೇಕು?” ಎಂದು ಕೇಳಿದರು.
33 : ಅದಕ್ಕೆ ಅವರು, “ಸ್ವಾವಿೂ, ನಮಗೆ ಕಣ್ಣು ಕಾಣುವಂತೆ ಮಾಡಿ” ಎಂದು ಪ್ರಾರ್ಥಿಸಿದರು.
34 : ಯೇಸುವಿಗೆ ಅವರ ಮೇಲೆ ಕನಿಕರವುಂಟಾಯಿತು. ಅವರ ಕಣ್ಣುಗಳನ್ನು ಮುಟ್ಟಿದರು. ಅದೇ ಕ್ಷಣದಲ್ಲಿ ಅವರಿಗೆ ದೃಷ್ಟಿ ಬಂದಿತು. ಅವರೂ ಯೇಸುವನ್ನು ಹಿಂಬಾಲಿಸಿದರು.