1 : ಯೇಸುಸ್ವಾಮಿ ದೋಣಿ ಹತ್ತಿ ಮರಳಿ ಸರೋವರವನ್ನು ದಾಟಿ ತಮ್ಮ ಸ್ವಂತ ಊರಿಗೆ ಬಂದರು.
2 : ಆಗ ಜನರು ಒಬ್ಬ ಪಾಶ್ರ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, ಆ ಪಾಶ್ರ್ವವಾಯು ರೋಗಿಗೆ, "ಮಗು ಧೈರ್ಯದಿಂದಿರು. ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ," ಎಂದರು
3 : ಆಗ ಅಲ್ಲಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, "ಇವನು ದೇವದೂಷಣೆ ಮಾಡುತ್ತಿದ್ದಾನೆ," ಎಂದುಕೊಂಡರು.
4 : ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು, "ನೀವು ಮನಸ್ಸಿನಲ್ಲೇಕೆ ದುರಾಲೋಚನೆ ಮಾಡುತ್ತಿದ್ದೀರಿ?
5 : "ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ" ಎನ್ನುವುದು ಸುಲಭವೋ ಅಥವಾ ‘ಎದ್ದು ನಡೆ’ ಎನ್ನುವುದು ಸುಲಭವೋ?
6 : ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರ ಉಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು," ಎಂದು ಹೇಳಿ, ಆ ಪಾಶ್ರ್ವವಾಯು ರೋಗಿಯನ್ನು ನೋಡಿ, "ಎದ್ದೇಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು" ಎಂದರು.
7 : ಅದರಂತೆಯೇ, ಆ ರೋಗಿ ಎದ್ದು ಮನೆಗೆ ಹೊರಟುಹೋದನು.
8 : ಇದನ್ನು ಕಂಡ ಜನರು ತಲ್ಲಣಗೊಂಡರು. ಮಾನವನಿಗೆ ಇಂಥ ಅಧಿಕಾರ ಕೊಟ್ಟ ದೇವರನ್ನು ಕೊಂಡಾಡಿದರು.
ಸಮಾಜದಿಂದ ಬಹಿಷ್ಕøತ - ಯೇಸುವಿನಿಂದ ಸ್ವೀಕೃತ
(ಮಾರ್ಕ 2:13-17; ಲೂಕ 5:27-32)
9 : ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಮುಂದಕ್ಕೆ ಹೋಗುತ್ತಿದ್ದಾಗ ಮತ್ತಾಯ ಎಂಬುವನನ್ನು ಕಂಡರು. ಅವನು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿದ್ದನು. "ನನ್ನನ್ನು ಹಿಂಬಾಲಿಸು," ಎಂದು ಹೇಳಿ ಯೇಸು ಅವನನ್ನು ಕರೆದರು. ಮತ್ತಾಯನು ಎದ್ದು ಅವರನ್ನು ಹಿಂಬಾಲಿಸಿದನು.
10 : ಇದಾದ ಮೇಲೆ ಯೇಸುಸ್ವಾಮಿ ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತಿದ್ದರು. ಬಹುಮಂದಿ ‘ಸುಂಕದವರೂ’, ‘ಪಾಪಿಷ್ಠರೂ’ ಅಲ್ಲಿಗೆ ಬಂದರು. ಯೇಸು ಮತ್ತು ಅವರ ಶಿಷ್ಯರು ಕುಳಿತಿದ್ದ ಪಂಕ್ತಿಯಲ್ಲೇ ಇವರೂ ಊಟಕ್ಕೆ ಕುಳಿತರು.
11 : ಫರಿಸಾಯರು ಇದನ್ನು ಕಂಡದ್ದೇ ಯೇಸುವಿನ ಶಿಷ್ಯರನ್ನು ಉದ್ದೇಶಿಸಿ, "ನಿಮ್ಮ ಗುರು ಇಂತಹ ಬಹಿಷ್ಕøತ ಜನರ ಜೊತೆಯಲ್ಲಿ ಊಟ ಮಾಡುವುದೇ?" ಎಂದು ಆಕ್ಷೇಪಿಸಿದರು.
12 : ಇದನ್ನು ಕೇಳಿಸಿಕೊಂಡ ಯೇಸು, "ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ; ಆರೋಗ್ಯವಂತರಿಗಲ್ಲ.
13 : ನೀವು ಹೋಗಿ, "ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ" ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು" ಎಂದರು.
ಹಳೆ ಬಟ್ಟೆಗೆ ಹೊಸ ತೇಪೆಯೇ?
(ಮಾರ್ಕ 2:18-22, ಲೂಕ 5:33-39)
14 : ಬಳಿಕ ಯೊವಾನ್ನನ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದರು. “ನಾವೂ ಫರಿಸಾಯರೂ ಉಪವಾಸ ವ್ರತವನ್ನು ಕೈಗೊಳ್ಳುತ್ತೇವೆ. ಆದರೆ ನಿಮ್ಮ ಶಿಷ್ಯರು ಏಕೆ ಹಾಗೆ ಮಾಡುವುದಿಲ್ಲ?" ಎಂದು ಪ್ರಶ್ನೆ ಹಾಕಿದರು.
15 : ಅದಕ್ಕೆ ಯೇಸು, "ಮದುವಣಿಗನು ಜೊತೆಯಲ್ಲಿ ಇರುವಷ್ಟು ಕಾಲ ಅವನ ಆಪ್ತರು ದುಃಖಪಡುವುದುಂಟೇ? ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು; ಆಗ ಅವರು ಉಪವಾಸ ಮಾಡುವರು.
16 : "ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ. ಏಕೆಂದರೆ ಹೊಸ ತೇಪೆಯು ಹಳೆಯ ಅಂಗಿಯನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.
17 : ಅಂತೆಯೇ ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ತುಂಬಿಡುವುದಿಲ್ಲ. ತುಂಬಿಟ್ಟರೆ ಬುದ್ದಲಿಗಳು ಬಿರಿಯುತ್ತವೆ, ಮದ್ಯವು ಚೆಲ್ಲಿ ಹೋಗುತ್ತದೆ; ಬುದ್ದಲಿಗಳೂ ಹಾಳಾಗುತ್ತವೆ. ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡುತ್ತಾರೆ. ಆಗ ಎರಡೂ ಉಳಿಯುತ್ತವೆ," ಎಂದರು.
ಸಾವು ನೋವುಗಳ ನಿವಾರಕ
(ಮಾರ್ಕ 5:21-43; ಲೂಕ 8:40-56)
18 : ಯೇಸುಸ್ವಾಮಿ ಹೀಗೆ ಬೋಧಿಸುತ್ತಿರುವಾಗಲೇ ಯೆಹೂದ್ಯ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನು ಯೇಸುವಿನ ಮುಂದೆ ಮೊಣಕಾಲೂರಿ, "ನನ್ನ ಮಗಳು ಈಗ ತಾನೆ ಸತ್ತುಹೋದಳು. ಆದರೂ ತಾವು ದಯಮಾಡಿಸಿ ತಮ್ಮ ಹಸ್ತವನ್ನು ಆಕೆಯ ಮೇಲಿಡಬೇಕು. ಅವಳು ಮರಳಿ ಬದುಕುವಳು," ಎಂದು ಬೇಡಿಕೊಂಡನು.
19 : ಯೇಸು ಎದ್ದು ಅವನ ಹಿಂದೆ ಹೊರಟರು. ಶಿಷ್ಯರೂ ಹಿಂಬಾಲಿಸಿ ಹೋದರು.
20 : ಹೋಗುತ್ತಿದ್ದಾಗ, ಹನ್ನೆರಡು ವರ್ಷಗಳಿಂದ ರಕ್ತಸ್ರಾವ ರೋಗದಿಂದ ಬಹಳವಾಗಿ ನರಳುತ್ತಿದ್ದ ಒಬ್ಬ ಮಹಿಳೆ ಹಿಂಬದಿಯಿಂದ ಬಂದು ಯೇಸುಸ್ವಾಮಿಯ ಉಡುಪಿನ ಅಂಚನ್ನು ಮುಟ್ಟಿದಳು.
21 : "ನಾನು ಅವರ ಉಡುಪನ್ನು ಮುಟ್ಟಿದರೂ ಸಾಕು, ಗುಣಹೊಂದುವೆನು" ಎಂದುಕೊಂಡಿದ್ದಳು ಆಕೆ.
22 : ಯೇಸು ಹಿಂದಿರುಗಿ ಆಕೆಯನ್ನು ನೋಡಿ, "ಮಗಳೇ, ಹೆದರಬೇಡ; ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ," ಎಂದರು. ಆ ಕ್ಷಣದಲ್ಲೇ ಆಕೆ ವ್ಯಾಧಿಯಿಂದ ಮುಕ್ತಳಾದಳು.
23 : ಯೇಸು ಆ ಅಧಿಕಾರಿಯ ಮನೆಯನ್ನು ತಲುಪಿದರು. ಅಲ್ಲಿ ವಾದ್ಯಗಾರರನ್ನೂ ಗದ್ದಲ ಮಾಡುತ್ತಿದ್ದ ಜನಜಂಗುಳಿಯನ್ನೂ ಕಂಡು,
24 : "ಎಲ್ಲರೂ ಇಲ್ಲಿಂದ ಹೊರಡಿರಿ, ಬಾಲಕಿ ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ" ಎಂದರು. ಜನರು ನಕ್ಕು ಅವರನ್ನು ಪರಿಹಾಸ್ಯ ಮಾಡಿದರು.
25 : ಆದರೂ ಜನರ ಗುಂಪನ್ನು ಹೊರಗೆ ಕಳುಹಿಸಿ, ಯೇಸು ಕೊಠಡಿಯೊಳಕ್ಕೆ ಹೋಗಿ, ಬಾಲಕಿಯ ಕೈಹಿಡಿದು ಎಬ್ಬಿಸಿದರು. ಆಕೆ ಎದ್ದಳು.
26 : ಈ ಸಮಾಚಾರ ಆ ನಾಡಿನಲ್ಲೆಲ್ಲಾ ಹಬ್ಬಿ ಹರಡಿತು.
ಅಂಧರಿಗೆ ದೃಷ್ಟಿದಾನ
27 : ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, "ಸ್ವಾವಿೂ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ," ಎಂದು ದನಿಯೆತ್ತಿ ಕೂಗಿಕೊಳ್ಳುತ್ತಾ ಅವರ ಹಿಂದೆ ಹೋದರು.
28 : ಯೇಸು ಮನೆ ಸೇರಿದಾಗ ಆ ಕುರುಡರು ಸಮೀಪಕ್ಕೆ ಬಂದರು. "ನಾನು ನಿಮ್ಮನ್ನು ಗುಣಪಡಿಸಬಲ್ಲೆನೆಂದು ನೀವು ವಿಶ್ವಾಸವಿಡುತ್ತೀರೋ?" ಎಂದು ಯೇಸು ಪ್ರಶ್ನಿಸಿದರು. "ಹೌದು ಸ್ವಾವಿೂ, ಹೌದು," ಎಂದು ಅವರು ಉತ್ತರವಿತ್ತರು.
29 : ಆಗ ಯೇಸು ಅವರ ಕಣ್ಣುಗಳನ್ನು ಮುಟ್ಟಿ, "ನೀವು ವಿಶ್ವಾಸವಿಟ್ಟ ಪ್ರಕಾರವೇ ನಿಮಗೆ ಗುಣವಾಗಲಿ," ಎಂದರು.
30 : ಅವರಿಗೆ ದೃಷ್ಟಿ ಬಂದಿತು. "ಈ ವಿಷಯ ಯಾರಿಗೂ ತಿಳಿಯಬಾರದು, ಎಚ್ಚರಿಕೆ!" ಎಂದು ಯೇಸು ಅವರಿಗೆ ಕಟ್ಟಪ್ಪಣೆ ಮಾಡಿದರು.
31 : ಆದರೂ ಅವರು ಹೋಗಿ ಆ ಪ್ರಾಂತ್ಯದಲ್ಲೆಲ್ಲಾ ಸ್ವಾಮಿಯ ಕೀರ್ತಿಯನ್ನು ಹರಡಿದರು.
ಮೂಕನಿಗೆ ವಾಕ್ಶಕ್ತಿಯ ದಾನ
32 : ಕುರುಡರು ಹೊರಟುಹೋಗುತ್ತಿದ್ದ ಹಾಗೆ, ದೆವ್ವ ಹಿಡಿದಿದ್ದ ಒಬ್ಬ ಮೂಕನನ್ನು ಕೆಲವರು ಯೇಸುಸ್ವಾಮಿಯ ಬಳಿಗೆ ಕರೆತಂದರು.
33 : ದೆವ್ವ ಬಿಡಿಸಿದ ಮೇಲೆ ಆ ಮೂಕನಿಗೆ ಮಾತು ಬಂದಿತು. ಜನರೆಲ್ಲರೂ ಆಶ್ಚರ್ಯಚಕಿತರಾದರು. "ಇಂತಹ ಕಾರ್ಯವನ್ನು ನಾವು ಇಸ್ರಯೇಲಿನಲ್ಲಿ ಕಂಡದ್ದೇ ಇಲ್ಲ!" ಎಂದುಕೊಂಡರು.
34 : ಆದರೆ ಫರಿಸಾಯರು, "ಇವನು ದೆವ್ವಗಳೊಡೆಯನ ಶಕ್ತಿಯಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ," ಎಂದರು.
35 : ಯೇಸುಸ್ವಾಮಿ, ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾಮಂದಿರಗಳಲ್ಲಿ ಬೋಧಿಸಿದರು. ಶ್ರೀ ಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾ ತರಹದ ರೋಗರುಜಿನಗಳನ್ನು ಗುಣಪಡಿಸಿದರು.
36 : ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು.
37 : ಏಕೆಂದರೆ, ಕುರುಬನಿಲ್ಲದ ಕುರಿಗಳಂತೆ ಅವರು ತೊಳಲಿದ್ದರು ಹಾಗೂ ಬಳಲಿದ್ದರು.
38 : ಆದುದರಿಂದ ಯೇಸು ತಮ್ಮ ಶಿಷ್ಯರಿಗೆ, "ಬೆಳೆಯೇನೋ ಹೇರಳ; ಕೊಯಿಲಿಗಾರರೋ ವಿರಳ; ಈ ಕಾರಣ ತನ್ನ ಕೊಯಿಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಪ್ರಾರ್ಥಿಸಿರಿ," ಎಂದರು.