1 : ಯೇಸುಸ್ವಾಮಿ ಮತ್ತು ಅವರ ಜೊತೆಯಲ್ಲಿದ್ದವರು ಜೆರುಸಲೇಮನ್ನು ಸಮೀಪಿಸಿದರು. ಓಲಿವ್ ಗುಡ್ಡದ ಬಳಿಯಿರುವ ಬೆತ್ಫಗೆ ಮತ್ತು ಬೆಥಾನಿಯ ಕಡೆಗೆ ಬಂದಾಗ ಯೇಸು ತಮ್ಮ ಶಿಷ್ಯರಲ್ಲಿ ಇಬ್ಬರನ್ನು ಕರೆದು, ಹೀಗೆಂದು ಹೇಳಿಕಳುಹಿಸಿದರು:
2 : “ನಿಮ್ಮೆದುರಿಗಿರುವ ಆ ಹಳ್ಳಿಗೆ ಹೋಗಿರಿ; ಅದನ್ನು ಸೇರುತ್ತಲೇ, ಕಟ್ಟಿ ಹಾಕಿರುವ ಹೇಸರಗತ್ತೆಯ ಮರಿಯೊಂದನ್ನು ಕಾಣುವಿರಿ. ಈವರೆಗೆ ಅದರ ಮೇಲೆ ಯಾರೂ ಸವಾರಿ ಮಾಡಿಲ್ಲ. ಅದನ್ನು ಬಿಚ್ಚಿ ಇಲ್ಲಿಗೆ ತನ್ನಿ.
3 : ಯಾರಾದರೂ ನಿಮ್ಮನ್ನು ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ, ‘ಪ್ರಭುವಿಗೆ ಇದು ಬೇಕಾಗಿದೆ. ಅವರು ಇದನ್ನು ಬೇಗನೆ ಹಿಂದಕ್ಕೆ ಕಳುಹಿಸಿಕೊಡುವರು,’ ಎಂದು ಹೇಳಿ,” ಎಂದರು.
4 : ಶಿಷ್ಯರು ಹೋಗಿ ಬೀದಿಯಲ್ಲಿದ್ದ ಹೇಸರಗತ್ತೆಯ ಮರಿಯೊಂದನ್ನು ಕಂಡರು. ಬಾಗಿಲಿನ ಬಳಿ ಕಟ್ಟಿಹಾಕಿದ್ದ ಅದನ್ನು ಶಿಷ್ಯರು ಬಿಚ್ಚಿದರು.
5 : ಅಲ್ಲಿ ನಿಂತಿದ್ದವರಲ್ಲಿ ಕೆಲವರು, ಇದನ್ನು ನೋಡಿ, “ಅದನ್ನೇಕೆ ಬಿಚ್ಚುತ್ತೀರಿ?” ಎಂದು ಕೇಳಿದರು.
6 : ಯೇಸು ಹೇಳಿದಂತೆಯೇ ಶಿಷ್ಯರು ಉತ್ತರ ಕೊಡಲು, ಆ ಮರಿಕತ್ತೆಯನ್ನು ತೆಗೆದುಕೊಂಡು ಹೋಗಲು ಬಿಟ್ಟುಕೊಟ್ಟರು.
7 : ಶಿಷ್ಯರು ಅದನ್ನು ಯೇಸುವಿನ ಬಳಿಗೆ ತಂದು, ತಮ್ಮ ಮೇಲಂಗಿಗಳನ್ನು ಅದರ ಮೇಲೆ ಹಾಕಿದರು. ಯೇಸು ಅದನ್ನು ಹತ್ತಿ ಕುಳಿತರು.
8 : ಅನೇಕರು ತಮ್ಮ ಹೊದಿಕೆಗಳನ್ನು ದಾರಿಯಲ್ಲಿ ಹಾಸಿದರು. ಇನ್ನೂ ಕೆಲವರು ತೋಟಗಳಿಂದ ಮರದ ರೆಂಬೆಗಳನ್ನು ಕಡಿದು, ಎಲೆಗಳನ್ನು ಹರಡಿದರು.
9 : ಯೇಸುವಿನ ಹಿಂದೆಯೂ ಮುಂದೆಯೂ ಇದ್ದವರು -
“ಜಯವಾಗಲಿ!
ಸರ್ವೇಶ್ವರನ ನಾಮದಲ್ಲಿ ಬರುವವರಿಗೆ
ಮಂಗಳವಾಗಲಿ!
10 : ನಮ್ಮ ಪೂರ್ವಜ ದಾವೀದನ ಸಾಮ್ರಾಜ್ಯ
ಉದಯವಾಗಲಿದೆ;
ಅದಕ್ಕೆ ಶುಭವಾಗಲಿ!
ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ!”
ಎಂದು ಘೋಷಿಸುತ್ತಿದ್ದರು.
11 : ಯೇಸು ಜೆರುಸಲೇಮನ್ನು ಸೇರಿ ಮಹಾದೇವಾಲಯವನ್ನು ಪ್ರವೇಶಿಸಿದರು. ಅಲ್ಲಿ ನಡೆಯುತ್ತಿದ್ದ ಎಲ್ಲವನ್ನೂ ನೋಡುವಷ್ಟರಲ್ಲಿ ಕತ್ತಲಾಗುತ್ತಾ ಬಂದಿತು; ಆದುದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು, ಅವರು ಬೆಥಾನಿಯಕ್ಕೆ ಹೊರಟುಹೋದರು.
ಫಲರಹಿತ ಬಾಳಿಗೊಂದು ದೃಷ್ಟಾಂತ
(ಮತ್ತಾ. 21.18-19)
12 : ಮರುದಿನ ಅವರೆಲ್ಲರೂ ಬೆಥಾನಿಯದಿಂದ ಜೆರುಸಲೇಮಿಗೆ ಬರುತ್ತಿದ್ದಾಗ ಯೇಸುಸ್ವಾಮಿಗೆ ಹಸಿವಾಯಿತು.
13 : ದೂರದಲ್ಲಿ ಎಲೆ ತುಂಬಿದ ಅಂಜೂರದ ಮರವೊಂದು ಕಣ್ಣಿಗೆ ಬಿದ್ದಿತು. ಅದರಲ್ಲಿ ಹಣ್ಣೇನಾದರೂ ಸಿಕ್ಕೀತೆಂದು ಅಲ್ಲಿಗೆ ಹೋದರು. ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳೇ ಹೊರತು ಇನ್ನೇನೂ ಕಾಣಲಿಲ್ಲ. ಅದು ಅಂಜೂರದ ಹಣ್ಣಿನ ಕಾಲವಾಗಿರಲಿಲ್ಲ.
14 : ಯೇಸು ಆ ಮರಕ್ಕೆ, “ಇನ್ನು ಮುಂದೆ ನಿನ್ನ ಹಣ್ಣನ್ನು ಯಾರೂ ಎಂದಿಗೂ ತಿನ್ನದಂತಾಗಲಿ,” ಎಂದರು. ಶಿಷ್ಯರು ಈ ಮಾತುಗಳನ್ನು ಕೇಳಿಸಿಕೊಂಡರು.
ಕರ್ತರ ಗುಡಿ ವರ್ತಕರ ಗುಹೆಯಾಗದಿರಲಿ
(ಮತ್ತಾ. 21.12-17; ಲೂಕ 19.45-48; ಯೊವಾ. 2.13-32)
15 : ತರುವಾಯ ಅವರು ಜೆರುಸಲೇಮಿಗೆ ಬಂದರು. ಯೇಸುಸ್ವಾಮಿ ಮಹಾದೇವಾಲಯಕ್ಕೆ ಹೋಗಿ, ಅಲ್ಲಿ ಮಾರುತ್ತಿದ್ದವರನ್ನೂ ಕೊಳ್ಳುತ್ತಿದ್ದವರನ್ನೂ ಹೊರಗಟ್ಟತೊಡಗಿದರು; ನಾಣ್ಯ ವಿನಿಮಯ ಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿದರು; ಪಾರಿವಾಳಗಳನ್ನು ಮಾರುತ್ತಿದ್ದವರ ಮಣೆಗಳನ್ನು ಉರುಳಿಸಿದರು.
16 : ಹೊರೆಹೊತ್ತುಕೊಂಡು ದೇವಾಲಯದ ಮೂಲಕ ಹಾದು ಹೋಗುವವರನ್ನು ತಡೆದರು.
17 : “ ‘ಸರ್ವಜನಾಂಗಗಳಿಗೂ ಪ್ರಾರ್ಥನಾಲಯ ನನ್ನೀ ಆಲಯ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ ಅಲ್ಲವೇ? ನೀವು ಅದನ್ನು ಕಳ್ಳಕಾಕರ ಗುಹೆಯನ್ನಾಗಿ ಮಾಡಿದ್ದೀರಿ,” ಎಂದು ಯೇಸು ಅವರಿಗೆ ಬುದ್ಧಿಹೇಳಿದರು.
18 : ಮುಖ್ಯ ಯಾಜಕರೂ ಧರ್ಮಶಾಸ್ತ್ರಿಗಳೂ ನಡೆದ ಈ ಸಂಗತಿಯನ್ನು ಕೇಳಿ ಯೇಸುವನ್ನು ಕೊಲ್ಲಿಸುವ ಮಾರ್ಗವನ್ನು ಹುಡುಕ ತೊಡಗಿದರು. ಏಕೆಂದರೆ, ಯೇಸುವನ್ನು ಕಂಡರೆ ಅವರಿಗೆ ಭಯವಿತ್ತು. ಕಾರಣ - ಜನರೆಲ್ಲರೂ ಅವರ ಬೋಧನೆಗೆ ಮಾರುಹೋಗಿದ್ದರು.
19 : ಸೂರ್ಯಾಸ್ತಮದ ಬಳಿಕ ಯೇಸು ಮತ್ತು ಶಿಷ್ಯರು ಪಟ್ಟಣದಿಂದ ಹೊರಗೆ ಹೋದರು.
ವಿಶ್ವಾಸಭರಿತ ಪ್ರಾರ್ಥನೆ
(ಮತ್ತಾ. 21.20-22)
20 : ಬೆಳಿಗ್ಗೆ ಅವರೆಲ್ಲರೂ ಅದೇ ಮಾರ್ಗವಾಗಿ ಹಿಂದಿರುಗುವಾಗ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು.
21 : ಪೇತ್ರನು ಹಿಂದಿನ ದಿನ ನಡೆದುದನ್ನು ಸ್ಮರಿಸಿಕೊಂಡು, ಯೇಸುಸ್ವಾಮಿಗೆ, “ಗುರುವೇ, ತಾವು ಶಪಿಸಿದ ಆ ಅಂಜೂರದ ಮರ ಈಗ ಒಣಗಿ ಹೋಗಿದೆ,” ಎಂದನು.
22 : ಅದಕ್ಕೆ ಯೇಸು, “ನಿಮಗೆ ದೇವರಲ್ಲಿ ವಿಶ್ವಾಸವಿರಲಿ,
23 : ಆಗ ಯಾವನಾದರೂ ಈ ಬೆಟ್ಟಕ್ಕೆ, ‘ನೀನು ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ, ಮನಸ್ಸಿನಲ್ಲಿ ಸಂದೇಹಪಡದೆ, ಅದು ಸಂಭವಿಸುವುದೆಂದು ವಿಶ್ವಾಸಿಸಿದರೆ, ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ, ಅವನು ಹೇಳಿದಂತೆಯೇ ಆಗುವುದು.
24 : ಆದುದರಿಂದ ನೀವು ಪ್ರಾರ್ಥನೆಯಲ್ಲಿ ಏನೆಂದು ಬೇಡಿಕೊಳ್ಳುತ್ತೀರೋ, ಅದನ್ನೆಲ್ಲಾ ಪಡೆದಾಯಿತೆಂದು ವಿಶ್ವಾಸಿಸಿರಿ; ಅದು ಲಭಿಸುವುದು ನಿಶ್ಚಯವೆಂದು ನಿಮಗೆ ಹೇಳುತ್ತೇನೆ.
25 : ಇದಲ್ಲದೆ, ನೀವು ಪ್ರಾರ್ಥನೆ ಮಾಡುವಾಗಲೆಲ್ಲ, ಯಾರಿಗಾದರೂ ವಿರೋಧವಾಗಿ ನಿಮ್ಮ ಮನಸ್ಸಿನಲ್ಲಿ ಏನಾದರೂ ಇದ್ದರೆ, ಅದನ್ನು ಕ್ಷಮಿಸಿಬಿಡಿ,
26 : ಆಗ ಸ್ವರ್ಗದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸಿ ಬಿಡುವರು.”
ಯೇಸುವಿಗೆ ಈ ಅಧಿಕಾರ ಎಲ್ಲಿಂದ?
(ಮತ್ತಾ. 21.23-27; ಲೂಕ 20.1-8)
27 : ಯೇಸು ಮತ್ತು ಶಿಷ್ಯರು ಪುನಃ ಜೆರುಸಲೇಮಿಗೆ ಬಂದರು. ಯೇಸು ದೇವಾಲಯದ ಆವರಣದಲ್ಲಿ ತಿರುಗಾಡುತ್ತಿದ್ದಾಗ ಮುಖ್ಯ ಯಾಜಕರು, ಧರ್ಮಶಾಸ್ತ್ರಿಗಳು ಮತ್ತು ಸಭಾಪ್ರಮುಖರು ಅವರ ಬಳಿಗೆ ಬಂದು
28 : “ಇದನ್ನೆಲ್ಲಾ ನೀನು ಯಾವ ಅಧಿಕಾರದಿಂದ ಮಾಡುತ್ತಿರುವೆ? ನಿನಗೆ ಈ ಅಧಿಕಾರವನ್ನು ಕೊಟ್ಟವರು ಯಾರು?” ಎಂದು ಕೇಳಿದರು.
29 : ಅದಕ್ಕೆ ಯೇಸು, “ನಾನೂ ನಿಮಗೆ ಒಂದು ಪ್ರಶ್ನೆ ಹಾಕುತ್ತೇನೆ; ಅದಕ್ಕೆ ಉತ್ತರ ಕೊಡಿ. ಆಗ ಯಾವ ಅಧಿಕಾರದಿಂದ ನಾನು ಇದೆಲ್ಲವನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ.
30 : ಸ್ನಾನದೀಕ್ಷೆ ಕೊಡುವ ಅಧಿಕಾರ ಯೊವಾನ್ನನಿಗೆ ಎಲ್ಲಿಂದ ಬಂದಿತು? ದೇವರಿಂದಲೋ? ಮನುಷ್ಯರಿಂದಲೋ? ಉತ್ತರಕೊಡಿ,” ಎಂದರು. ಇದನ್ನು ಕೇಳಿದ ಅವರು ತಮ್ಮ ತಮ್ಮೊಳಗೇ ತರ್ಕ ಮಾಡುತ್ತಾ,
31 : “ದೇವರಿಂದ ಬಂದಿತೆಂದು ಹೇಳಿದರೆ, ‘ಹಾಗಾದರೆ ನೀವೇಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವನು.
33 : ‘ಮನುಷ್ಯರಿಂದ ಬಂದಿತು’ ಎಂದು ಹೇಳೋಣ ಎಂದರೆ ಅದೂ ಆಗದು,” ಎಂದುಕೊಂಡರು. ಯೊವಾನ್ನನು ನಿಜವಾದ ಪ್ರವಾದಿಯೆಂದು ಸರ್ವರು ನಂಬಿದ್ದರಿಂದ ಅವರಿಗೆ ಜನರ ಭಯವಿತ್ತು.
33 : ಆದುದರಿಂದ ಅವರು, “ನಮಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟರು. ಅದಕ್ಕೆ ಯೇಸು, “ಹಾಗಾದರೆ ನಾನೂ ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.
ಕೃತಘ್ನ ಗೇಣಿದಾರರ ಸಾಮತಿ
(ಮತ್ತಾ. 21.33-46; ಲೂಕ 20.9-19)