Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

ಮಾರ್ಕ


1 : ಅನಂತರ ಯೇಸುಸ್ವಾಮಿ ಅವರೊಡನೆ ಸಾಮತಿಗಳ ರೂಪದಲ್ಲಿ ಮಾತನಾಡತೊಡಗಿದರು: “ಒಬ್ಬನು ದ್ರಾಕ್ಷಿಯ ತೋಟ ಒಂದನ್ನು ಮಾಡಿ, ಅದರ ಸುತ್ತ ಬೇಲಿ ಹಾಕಿಸಿದ; ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಬಳಿಕ ತೋಟವನ್ನು ಗೇಣಿದಾರರಿಗೆ ವಹಿಸಿ, ಹೊರನಾಡಿಗೆ ಹೊರಟು ಹೋದ.
2 : ಫಲಕಾಲವು ಬಂದಾಗ ತನಗೆ ಬರತಕ್ಕ ಪಾಲನ್ನು ತರುವುದಕ್ಕಾಗಿ ಒಬ್ಬ ಸೇವಕನನ್ನು ಗೇಣಿದಾರರ ಬಳಿಗೆ ಕಳುಹಿಸಿದ.
3 : ಆದರೆ ಅವರು ಆ ಸೇವಕನನ್ನು ಹಿಡಿದು, ಹೊಡೆದು, ಬರಿಗೈಯಲ್ಲಿ ಹಿಂದಕ್ಕೆ ಅಟ್ಟಿದರು.
4 : ತೋಟದ ಯಜಮಾನ ಪುನಃ ಇನ್ನೊಬ್ಬ ಸೇವಕನನ್ನು ಕಳುಹಿಸಿದ. ಅವರು ಅವನ ತಲೆಯ ಮೇಲೆ ಹೊಡೆದು, ಅವಮಾನ ಮಾಡಿ ಕಳುಹಿಸಿದರು.
5 : ಯಜಮಾನ ಆಮೇಲೆ ಮತ್ತೊಬ್ಬ ಸೇವಕನನ್ನು ಕಳುಹಿಸಿದ. ಇವನನ್ನು ಅವರು ಕೊಂದುಹಾಕಿದರು. ಇನ್ನೂ ಅನೇಕರನ್ನು ಕಳುಹಿಸಲು, ಅವರಲ್ಲಿ ಕೆಲವರನ್ನು ಹೊಡೆದರು, ಕೆಲವರನ್ನು ಕಡಿದು ಹಾಕಿದರು.
6 : ಯಜಮಾನನಿಗೆ ಇನ್ನು ಉಳಿದಿದ್ದವನೆಂದರೆ ಅವನ ಮುದ್ದು ಮಗನೊಬ್ಬನೇ. “ನನ್ನ ಮಗನಿಗಾದರೂ ಅವರು ಮರ್ಯಾದೆಕೊಟ್ಟಾರು,” ಎಂದು ಭಾವಿಸಿ, ಕಟ್ಟಕಡೆಗೆ ಆ ಯಜಮಾನ ತನ್ನ ಮಗನನ್ನೇ ಅವರ ಬಳಿಗೆ ಕಳುಹಿಸಿದ.
7 : ಆದರೆ ಆ ಗೇಣಿದಾರರು, ‘ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ, ಇವನನ್ನು ಮುಗಿಸಿಬಿಡೋಣ. ಆಗ ಈ ಆಸ್ತಿ ನಮ್ಮದಾಗುವುದು,’ ಎಂದು ಒಳಸಂಚು ಹೂಡಿ,
8 : ಅವನನ್ನು ಹಿಡಿದು, ಕೊಂದುಹಾಕಿ ತೋಟದ ಆಚೆಗೆ ಎಸೆದುಬಿಟ್ಟರು.
9 : ಇಂತಹ ಪರಿಸ್ಥಿತಿಯಲ್ಲಿ ಆ ತೋಟದ ಯಜಮಾನ ಏನು ಮಾಡುವನು? ಅವನು ಬಂದು ಆ ಗೇಣಿದಾರರನ್ನು ಸಂಹರಿಸಿ ತೋಟವನ್ನು ಬೇರೆ ಗೇಣಿದಾರರಿಗೆ ಒಪ್ಪಿಸುವನು. ಪವಿತ್ರಗ್ರಂಥದಲ್ಲಿ:
10 : ‘ಮನೆಕಟ್ಟುವವರು ಬೇಡವೆಂದು ಬಿಸಾಡಿದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು;
11 : ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ವರ್ಯ!’ ಎಂಬ ವಾಕ್ಯವನ್ನು ನೀವು ಓದಲಿಲ್ಲವೇ?” ಎಂದರು.
12 : ತಮ್ಮನ್ನು ಕುರಿತೇ ಈ ಸಾಮತಿಯನ್ನು ಹೇಳುತ್ತಿದ್ದಾರೆಂದು ಅರ್ಥಮಾಡಿಕೊಂಡ ಆ ಯೆಹೂದ್ಯ ಮುಖಂಡರು ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟು ಅವರನ್ನು ಬಿಟ್ಟು ಹೋದರು. ಸರಕಾರಕ್ಕೆ ಸಲ್ಲತಕ್ಕದ್ದನ್ನು ಸರಕಾರಕ್ಕೇ ಸಲ್ಲಿಸು (ಮತ್ತಾ. 22.15-22; ಲೂಕ 20.20-26)
13 : ಆಮೇಲೆ ಅವರು ಯೇಸುಸ್ವಾಮಿಯನ್ನು ಮಾತಿನಲ್ಲೇ ಸಿಕ್ಕಿಸುವ ಉದ್ದೇಶದಿಂದ ಕೆಲವು ಫರಿಸಾಯರನ್ನೂ ಹೆರೋದನ ಪಕ್ಷದ ಕೆಲವರನ್ನೂ ಅವರ ಬಳಿಗೆ ಕಳುಹಿಸಿದರು.
14 : ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸ್ಥಾನಮಾನಕ್ಕೆ ಮಣಿಯದವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು ಎಂದು ನಾವು ಬಲ್ಲೆವು. ಹೀಗಿರುವಲ್ಲಿ ರೋಮ್ ಚಕ್ರಾಧಿಪತಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ, ಅಲ್ಲವೋ? ನಾವದನ್ನು ಕೊಡಬೇಕೋ, ಬೇಡವೋ?” ಎಂದು ಕೇಳಿದರು.
15 : ಅವರ ಕಪಟತನವನ್ನು ಯೇಸು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತನ್ನಿ, ಅದನ್ನು ನೋಡೋಣ,” ಎಂದರು.
16 : ಅವರೊಂದು ನಾಣ್ಯವನ್ನು ತಂದರು. “ಇದರ ಮೇಲಿರುವುದು ಯಾರ ಮುದ್ರೆ? ಯಾರ ಲಿಪಿ?” ಎಂದು ಯೇಸು ಕೇಳಿದರು. ಅದಕ್ಕೆ ಅವರು “ಅವು ರೋಮ್ ಚಕ್ರವರ್ತಿಯವು,” ಎಂದರು.
17 : ಆಗ ಯೇಸು, “ಹಾಗಾದರೆ ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದರು. ಇದನ್ನು ಕೇಳಿದ್ದೇ ಆ ಜನರು ಯೇಸುವಿನ ಬಗ್ಗೆ ಅತ್ಯಾಶ್ಚರ್ಯಪಟ್ಟರು. ಸತ್ತವರು ಪುನರುತ್ಥಾನ ಆಗುವುದುಂಟೇ? (ಮತ್ತಾ. 22.23-33; ಲೂಕ 20.27-40)
18 : ಅನಂತರ ಸದ್ದುಕಾಯರು ಯೇಸುಸ್ವಾಮಿಯ ಬಳಿಗೆ ಬಂದರು. ಸತ್ತಮೇಲೆ ಪುನರುತ್ಥಾನ ಇಲ್ಲವೆಂಬುದು ಇವರ ಅಭಿಮತ. ಇವರು ಯೇಸುವನ್ನು,
19 : “ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,’ ಎಂದು ಮೋಶೆ ನಮಗಾಗಿ ಬರೆದಿಟ್ಟಿದ್ದಾನಲ್ಲವೇ?
20 : ಒಮ್ಮೆ ಏಳುಮಂದಿ ಅಣ್ಣತಮ್ಮಂದಿರಿದ್ದರು. ಅವರಲ್ಲಿ ಮೊದಲನೆಯವನಿಗೆ ವಿವಾಹವಾಯಿತು.
21 : ಅವನು ಮಕ್ಕಳಿಲ್ಲದೆ ಮೃತನಾದುದರಿಂದ ಎರಡನೆಯವನು ಅವನ ಹೆಂಡತಿಯನ್ನು ಮದುವೆಮಾಡಿಕೊಂಡು, ಸಂತಾನವಿಲ್ಲದೆ ಸಾವನ್ನಪ್ಪಿದ. ಮೂರನೆಯವನಿಗೂ ಇದೇ ಗತಿಯಾಯಿತು.
22 : ಅನಂತರ, ಉಳಿದವರೂ ಒಬ್ಬರ ಬಳಿಕ ಇನ್ನೊಬ್ಬರು ಆಕೆಯನ್ನು ಮದುವೆ ಮಾಡಿಕೊಂಡು, ಸಂತಾನವಿಲ್ಲದೆ ಸತ್ತುಹೋದರು. ಕಡೆಗೆ ಆ ಸ್ತ್ರೀಯೂ ಮರಣ ಹೊಂದಿದಳು.
23 : ಆಗ ಹೇಳಿ, ಪುನರುತ್ಥಾನದ ದಿನದಲ್ಲಿ, ಆಕೆ ಯಾರ ಹೆಂಡತಿ ಎನಿಸಿಕೊಳ್ಳುವಳು? ಏಳು ಮಂದಿ ಸಹೋದರರೂ ಆಕೆಯನ್ನು ವಿವಾಹವಾಗಿದ್ದರಲ್ಲವೇ?” ಎಂದು ಪ್ರಶ್ನಿಸಿದರು.
24 : ಅದಕ್ಕೆ ಯೇಸು, “ನಿಮ್ಮದು ಎಂಥಾ ತಪ್ಪು ಅಭಿಪ್ರಾಯ! ಪವಿತ್ರಗ್ರಂಥವನ್ನು ಆಗಲಿ, ದೇವರ ಶಕ್ತಿಯನ್ನಾಗಲೀ ನೀವು ಅರ್ಥಮಾಡಿಕೊಂಡಿಲ್ಲ.
25 : ಸತ್ತವರು ಪುನರುತ್ಥಾನವಾದ ಮೇಲೆ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಅವರು ಸ್ವರ್ಗದ ದೇವದೂತರಂತೆ ಇರುತ್ತಾರೆ.
26 : ಇದಲ್ಲದೆ ಸತ್ತವರು ಪುನರುತ್ಥಾನವಾಗುವ ವಿಷಯದಲ್ಲಿ ಹೇಳುವುದಾದರೆ: ‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು’ ಎಂದು ದೇವರು ಮೋಶೆಗೆ ಹೇಳಿದ್ದನ್ನು ಮೋಶೆಯ ಗ್ರಂಥದಲ್ಲಿ ‘ಉರಿಯುವ ಪೊದೆ’ಯ ಪ್ರಸ್ತಾಪವಿರುವ ಭಾಗದಲ್ಲಿ, ನೀವು ಓದಿರಬೇಕಲ್ಲವೆ?
27 : ದೇವರು ಜೀವಿತರ ದೇವರೇ ಹೊರತು ಮೃತರ ದೇವರಲ್ಲ, ನಿಮ್ಮ ಅಭಿಪ್ರಾಯ ತೀರಾ ತಪ್ಪಾಗಿದೆ,” ಎಂದರು. ಪ್ರಧಾನ ಆಜ್ಞೆ ಯಾವುದು? (ಮತ್ತಾ. 22.34-40; ಲೂಕ 10.25-28)
28 : ಈ ತರ್ಕವನ್ನು ಕೇಳುತ್ತಿದ ಧರ್ಮಶಾಸ್ತ್ರಿ ಒಬ್ಬನು, ಯೇಸುಸ್ವಾಮಿ ಸದ್ದುಕಾಯರಿಗೆ ಸಮರ್ಪಕವಾದ ಉತ್ತರವನ್ನು ಕೊಟ್ಟಿದ್ದನ್ನು ಮೆಚ್ಚಿ, ಅವರ ಬಳಿಗೆ ಬಂದು, “ಆಜ್ಞೆಗಳಲ್ಲೆಲ್ಲಾ ಪ್ರಪ್ರಥಮ ಆಜ್ಞೆ ಯಾವುದು?” ಎಂದು ಕೇಳಿದನು.
29 : ಯೇಸು ಅವನಿಗೆ, “ಇಸ್ರಯೇಲ್ ಸಮಾಜವೇ ಕೇಳು: ನಮ್ಮ ದೇವರಾದ ಸರ್ವೇಶ್ವರ ಏಕೈಕ ಸರ್ವೇಶ್ವರ;
30 : ನಿನ್ನ ದೇವರಾದ ಸರ್ವೇಶ್ವರನನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ಪ್ರೀತಿಸು. ಇದೇ ಪ್ರಪ್ರಥಮ ಆಜ್ಞೆ.
31 : “ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು. ಇದೇ ಎರಡನೆಯ ಆಜ್ಞೆ. ಇವೆರಡು ಆಜ್ಞೆಗಳಿಗಿಂತ ಶ್ರೇಷ್ಠವಾದ ಆಜ್ಞೆ ಬೇರೊಂದೂ ಇಲ್ಲ,” ಎಂದರು.
32 : ಇದನ್ನು ಕೇಳಿದ ಆ ಧರ್ಮಶಾಸ್ತ್ರಿ, “ಬೋಧಕರೇ, ಚೆನ್ನಾಗಿ ಹೇಳಿದಿರಿ. ದೇವರು ಒಬ್ಬರೇ, ಅವರ ಹೊರತು ಬೇರೆ ದೇವರಿಲ್ಲ, ಎಂದು ನೀವು ಹೇಳಿದ್ದು ಸತ್ಯ;
33 : ಅವರನ್ನು ನಾವು ಪೂರ್ಣ ಹೃದಯದಿಂದಲೂ ಪೂರ್ಣ ಜ್ಞಾನದಿಂದಲೂ ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ನಮ್ಮನ್ನು ನಾವು ಪ್ರೀತಿಸಿಕೊಳ್ಳುವಂತೆಯೇ ನಮ್ಮ ನೆರೆಯವರನ್ನೂ ಪ್ರೀತಿಸತಕ್ಕದ್ದು. ಇವು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಯಾಗಾದಿಗಳಿಗಿಂತಲೂ ಎಷ್ಟೋ ಮೇಲಾದುವು,” ಎಂದನು.
34 : ಅವನ ವಿವೇಕಪೂರ್ಣವಾದ ಉತ್ತರವನ್ನು ಮೆಚ್ಚಿ ಯೇಸು, “ನೀನು ದೇವರ ಸಾಮ್ರಾಜ್ಯದಿಂದ ದೂರವಿಲ್ಲ,” ಎಂದರು. ಇದಾದ ಬಳಿಕ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರೊಬ್ಬರೂ ಧೈರ್ಯಗೊಳ್ಳಲಿಲ್ಲ. ಯೇಸು ದಾವೀದನಿಗೆ ಮಗನೋ ಅಥವಾ ಪ್ರಭುವೋ? (ಮತ್ತಾ. 22.41-46; ಲೂಕ 20.41-44)
35 : ಬಳಿಕ ಯೇಸುಸ್ವಾಮಿ ಮಹಾದೇವಾಲಯದಲ್ಲಿ ಉಪದೇಶಮಾಡುತ್ತಾ ಈ ಪ್ರಶ್ನೆ ಎತ್ತಿದರು: “ಅಭಿಷಿಕ್ತನಾದ ಲೋಕೋದ್ಧಾರಕನನ್ನು ಧರ್ಮಶಾಸ್ತ್ರಿಗಳು ‘ದಾವೀದನ ಪುತ್ರ’ ಎಂದು ಕರೆಯುತ್ತಾರಲ್ಲ! ಅದು ಹೇಗಾದೀತು?
36 : ‘ನಿನ್ನ ಶತ್ರುಗಳನ್ನು ನಾನು ನಿನ್ನ ಪಾದದಡಿ ಹಾಕುವ ತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು ಎಂದು ನನ್ನ ಪ್ರಭುವಿಗೆ ಸರ್ವೇಶ್ವರ ಹೇಳಿದ್ದಾರೆ,’ ಎಂದು ದಾವೀದನೇ ಪವಿತ್ರಾತ್ಮ ಪ್ರೇರಣೆಯಿಂದ ಹೇಳಿದ್ದಾನಲ್ಲಾ!
37 : ದಾವೀದನೇ, ಕ್ರಿಸ್ತನನ್ನು ‘ನನ್ನ ಪ್ರಭು’ ಎಂದು ಕರೆದಿರುವಲ್ಲಿ ಆತನು ದಾವೀದನ ಪುತ್ರನಾಗಿರುವುದು ಹೇಗೆ?” ಎಂದು ಪ್ರಶ್ನಿಸಿದರು. ಕಪಟಶಾಸ್ತ್ರಜ್ಞರ ಬಗ್ಗೆ ಎಚ್ಚರಿಕೆ ! (ಮತ್ತಾ. 23.1-36; ಲೂಕ 20.45-47)
38 : ಜನಸಮೂಹವು ಸಂತಸಚಿತ್ತದಿಂದ ಯೇಸುಸ್ವಾಮಿಯ ಮಾತುಗಳನ್ನು ಆಲಿಸುತ್ತಿತ್ತು. ಯೇಸು ತಮ್ಮ ಉಪದೇಶವನ್ನು ಮುಂದುವರಿಸುತ್ತಾ,
39 : “ಧರ್ಮಶಾಸ್ತ್ರಿಗಳ ಬಗ್ಗೆ ಎಚ್ಚರಿಕೆ! ಅವರು ನಿಲುವಂಗಿಗಳನ್ನು ಧರಿಸಿಕೊಂಡು ತಿರುಗಾಡುತ್ತಾರೆ; ಪೇಟೆ ಬೀದಿಗಳಲ್ಲಿ ವಂದನೋಪಚಾರಗಳನ್ನೂ ಪ್ರಾರ್ಥನಾ ಮಂದಿರಗಳಲ್ಲಿ ಉನ್ನತ ಆಸನಗಳನ್ನೂ ಔತಣ ಸಮಾರಂಭಗಳಲ್ಲಿ ಶ್ರೇಷ್ಠಸ್ಥಾನಗಳನ್ನೂ ಅಪೇಕ್ಷಿಸುತ್ತಾರೆ.
40 : ವಿಧವೆಯರ ಮನೆಮಾರುಗಳನ್ನು ದೋಚಿಕೊಳ್ಳುವ ಈ ಜನ ನಟನೆಗಾಗಿ ದೀರ್ಘವಾಗಿ ಜಪತಪಗಳನ್ನು ಮಾಡುತ್ತಾರೆ. ಇವರನ್ನು ದೇವರು ಬಹಳ ಕಠಿಣವಾದ ದಂಡನೆಗೆ ಗುರಿಪಡಿಸುವರು,” ಎಂದರು.
41 : ಯೇಸುಸ್ವಾಮಿ ದೇವಾಲಯದಲ್ಲಿ ಕಾಣಿಕೆ ಪೆಟ್ಟಿಗೆಗಳಿಗೆ ಎದುರಾಗಿ ಕುಳಿತಿದ್ದರು. ಜನರು ಅದರಲ್ಲಿ ಹಣಹಾಕುವ ರೀತಿ ಅವರ ಕಣ್ಣಿಗೆ ಬಿತ್ತು. ಧನವಂತರನೇಕರು ಹೆಚ್ಚು ಹೆಚ್ಚು ಹಣವನ್ನು ಹಾಕುತ್ತಿದ್ದರು.
42 : ಅಷ್ಟರಲ್ಲಿ ಬಡ ವಿಧವೆ ಒಬ್ಬಳು ಅಲ್ಲಿಗೆ ಬಂದಳು. ತಾಮ್ರದ ಚಿಕ್ಕ ನಾಣ್ಯಗಳೆರಡನ್ನು ಕಾಣಿಕೆಯಾಗಿ ಹಾಕಿದಳು.
43 : ಆಗ ಯೇಸು ತಮ್ಮ ಶಿಷ್ಯರನ್ನು ಕರೆದು, “ಕಾಣಿಕೆ ಪೆಟ್ಟಿಗೆಯಲ್ಲಿ ಹಣ ಹಾಕಿದ ಎಲ್ಲರಿಗಿಂತಲೂ ಈ ವಿಧವೆ ಹೆಚ್ಚಾಗಿ ಅರ್ಪಿಸಿದಳು ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ;
44 : ಇವರೆಲ್ಲರೂ ತಮ್ಮ ಅಪರಿಮಿತ ಐಶ್ವರ್ಯದಿಂದ ಕಾಣಿಕೆಯಿತ್ತರು. ಈಕೆಯಾದರೋ ತನ್ನ ಕಡುಬಡತನದಲ್ಲೂ ತನ್ನಲ್ಲಿ ಇದ್ದುದೆಲ್ಲವನ್ನು ಅರ್ಪಿಸಿದಳು; ತನ್ನ ಜೀವನಾಧಾರವನ್ನೇ ಕೊಟ್ಟುಬಿಟ್ಟಳು,” ಎಂದರು. ದೇವಾಲಯದ ವಿನಾಶದ ಮುನ್ಸೂಚನೆ (ಮತ್ತಾ. 24.1-2; ಲೂಕ 21.5-6)

· © 2017 kannadacatholicbible.org Privacy Policy