Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

ಮಾರ್ಕ


1 : ಅವರೆಲ್ಲರು ಗಲಿಲೇಯ ಸರೋವರವನ್ನು ದಾಟಿ ಆಚೆಯ ಕಡೆಯಲ್ಲಿದ್ದ ಗೆರಸೇನರ ಪ್ರಾಂತ್ಯವನ್ನು ಸೇರಿದರು.
2 : ಯೇಸುಸ್ವಾಮಿ ದೋಣಿಯಿಂದ ಇಳಿಯುತ್ತಲೇ, ದೆವ್ವ ಹಿಡಿದಿದ್ದ ಒಬ್ಬನು ಸಮಾಧಿಯ ಗುಹೆಯೊಳಗಿಂದ ಅವರ ಎದುರಿಗೆ ಬಂದನು.
3 : ಸಮಾಧಿಯ ಗುಹೆಗಳೇ ಅವನಿಗೆ ವಾಸಸ್ಥಳವಾಗಿದ್ದವು.
4 : ಅವನನ್ನು ಬಂಧಿಸಲು ಯಾರಿಂದಲೂ ಆಗುತ್ತಿರಲಿಲ್ಲ; ಸಂಕೋಲೆಯಿಂದ ಬಂಧಿಸುವುದೂ ಅಸಾಧ್ಯವಾಗಿತ್ತು. ಸರಪಳಿ ಸಂಕೋಲೆಗಳಿಂದ ಅವನನ್ನು ಕಟ್ಟಿದಾಗ ಅವುಗಳನ್ನು ತುಂಡುತುಂಡು ಮಾಡುತ್ತಿದ್ದನು. ಅವನನ್ನು ಹತೋಟಿಗೆ ತರುವ ಸಾಮಥ್ರ್ಯ ಯಾರಿಗೂ ಇರಲಿಲ್ಲ.
5 : ಹಗಲಿರುಳೆನ್ನದೆ ಸಮಾಧಿಯ ಗುಹೆಗಳಲ್ಲಿಯೂ ಬೆಟ್ಟಗುಡ್ಡಗಳಲ್ಲಿಯೂ ಅವನು ಅಲೆದಾಡುತ್ತಾ ಅರಚಾಡುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಚಚ್ಚಿಕೊಳ್ಳುತ್ತಾ ಇದ್ದನು.
6 : ದೂರದಲ್ಲಿ ಬರುತ್ತಿದ್ದ ಯೇಸುಸ್ವಾಮಿಯನ್ನು ಕಂಡು, ಅವನು ಓಡಿಬಂದು ಅವರಿಗೆ ಸಾಷ್ಟಾಂಗವೆರಗಿ,
7 : “ಸ್ವಾಮಿ ಯೇಸುವೇ, ಪರಮೋನ್ನತ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದೇವರಾಣೆ, ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದು ಅಬ್ಬರಿಸಿದನು.
8 : ಕಾರಣ - ಅವನನ್ನು ಬಿಟ್ಟು ತೊಲಗಬೇಕೆಂದು ಯೇಸು ದೆವ್ವಕ್ಕೆ ಈ ಮೊದಲೇ ಕಟ್ಟಪ್ಪಣೆ ಮಾಡಿದ್ದರು.
9 : “ನಿನ್ನ ಹೆಸರೇನು?” ಎಂದು ಯೇಸು ಅವನನ್ನು ಕೇಳಲು, “ನನ್ನ ಹೆಸರು ‘ಗಣ’; ಏಕೆಂದರೆ ನಾವು ಬಹುಮಂದಿ ಇದ್ದೇವೆ,” ಎಂದನು.
10 : ಅಲ್ಲದೆ, “ನಮ್ಮನ್ನು ಆ ಪ್ರಾಂತ್ಯದಿಂದ ಹೊರಗಟ್ಟಬೇಡಿ,” ಎಂದು ಯೇಸುವನ್ನು ಬಹಳವಾಗಿ ಬೇಡಿಕೊಂಡನು.
11 : ಸಮೀಪದಲ್ಲೇ ಹಂದಿಗಳ ದೊಡ್ಡ ಹಿಂಡೊಂದು ಬೆಟ್ಟದ ತಪ್ಪಲಲ್ಲಿ ಮೇಯುತ್ತಿತ್ತು.
12 : ಆ ದೆವ್ವಗಳು, “ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸಿಕೊಡಿ,” ಎಂದು ಯೇಸುವನ್ನು ಬೇಡಿಕೊಂಡವು.
13 : ಅವರು ಹಾಗೆಯೆ ಅಪ್ಪಣೆ ಮಾಡಿದರು. ಕೂಡಲೇ ದೆವ್ವಗಳು ಆ ವ್ಯಕ್ತಿಯಿಂದ ಹೊರಬಂದು ಹಂದಿಗಳೊಳಗೆ ಹೊಕ್ಕವು. ಇದರ ಪರಿಣಾಮವಾಗಿ ಎರಡು ಸಾವಿರ ಹಂದಿಗಳಿದ್ದ ಆ ಹಿಂಡು, ಬೆಟ್ಟದ ಕಡಿದಾದ ಬದಿಯಿಂದ ಸರೋವರದತ್ತ ಧಾವಿಸಿ, ಅದರಲ್ಲಿ ಬಿದ್ದು ಮುಳುಗಿಹೋಯಿತು.
14 : ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಊರುಕೇರಿಗಳಲ್ಲಿ ಈ ವಿಷಯವನ್ನು ತಿಳಿಸಿದರು. ನಡೆದ ಸಂಗತಿ ಏನೆಂಬುದನ್ನು ನೋಡಲು ಜನರು ಹೊರಟು, ಯೇಸುಸ್ವಾಮಿಯ ಬಳಿಗೆ ಬಂದರು.
15 : ದೆವ್ವಗಣದಿಂದ ಪೀಡಿತನಾಗಿದ್ದವನು ಈಗ ಬಟ್ಟೆಯನ್ನು ತೊಟ್ಟುಕೊಂಡು, ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಅವರೆಲ್ಲರೂ ಗಾಬರಿಗೊಂಡರು.
16 : ನಡೆದುದನ್ನು ಕಣ್ಣಾರೆ ನೋಡಿದವರು ದೆವ್ವ ಹಿಡಿದಿದ್ದವನು ಸ್ವಸ್ಥನಾದ ವಿಧವನ್ನು ಮತ್ತು ಹಂದಿಗಳಿಗಾದ ಗತಿಯನ್ನು ಅವರಿಗೆ ವಿವರಿಸಿದರು.
17 : ಇದನ್ನು ಕೇಳಿದ ಜನರು ಯೇಸುವಿಗೆ, ತಮ್ಮ ಪ್ರಾಂತ್ಯವನ್ನು ಬಿಟ್ಟುಹೋಗಬೇಕೆಂದು ಮನವಿಮಾಡಿಕೊಂಡರು.
18 : ಯೇಸು ದೋಣಿಯನ್ನು ಹತ್ತುತ್ತಿದ್ದಾಗ ದೆವ್ವ ಹಿಡಿದಿದ್ದವನು, “ನನ್ನನ್ನು ನಿಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗಿ,” ಎಂದು ಬಿನ್ನವಿಸಿಕೊಂಡನು.
19 : ಯೇಸು ಅದಕ್ಕೊಪ್ಪದೆ, “ನೀನು ನಿನ್ನ ಮನೆಗೂ ನಿನ್ನ ಸ್ವಜನರ ಬಳಿಗೂ ಹೋಗು. ಸರ್ವೇಶ್ವರ ನಿನಗೆ ಎಂಥಾ ಉಪಕಾರ ಮಾಡಿದ್ದಾರೆ, ಎಷ್ಟು ಕರುಣೆ ತೋರಿಸಿದ್ದಾರೆ, ಎಂದು ಅವರಿಗೆ ವಿವರಿಸು,” ಎಂದರು.
20 : ಅಂತೆಯೇ ಅವನು ಹೊರಟು ಹೋಗಿ, ಯೇಸು ತನಗೆ ಮಾಡಿದ ಮಹದುಪಕಾರವನ್ನು ದೆಕಪೊಲಿ ಎಂಬ ನಾಡಿನಲ್ಲಿ ಪ್ರಕಟಿಸಿದನು. ಕೇಳಿದವರೆಲ್ಲರೂ ಆಶ್ಚರ್ಯ ಚಕಿತರಾದರು. ಸಾವುನೋವುಗಳ ನಿವಾರಕ (ಮತ್ತಾ. 9.18-26; ಲೂಕ 8.40-56)
21 : ಯೇಸುಸ್ವಾಮಿ ದೋಣಿಯನ್ನೇರಿ ಸರೋವರದ ಈಚೆದಡಕ್ಕೆ ಮರಳಿದರು. ತೀರವನ್ನು ಸೇರಿದೊಡನೆ ಜನರು ದೊಡ್ಡಗುಂಪಾಗಿ ಅವರ ಸುತ್ತಲೂ ನೆರೆದರು.
22 : ಪ್ರಾರ್ಥನಾಮಂದಿರದ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನ ಹೆಸರು ಯಾ¬ೂರ.
23 : ಅವನು ಯೇಸುವನ್ನು ನೋಡಿದೊಡನೆ ಅವರ ಪಾದಕ್ಕೆರಗಿ, “ನನ್ನ ಪುಟ್ಟ ಮಗಳು ಮರಣಾವಸ್ಥೆಯಲ್ಲಿದ್ದಾಳೆ; ತಾವು ಬಂದು ತಮ್ಮ ಹಸ್ತವನ್ನು ಅವಳ ಮೇಲಿಟ್ಟು, ಅವಳು ಗುಣಹೊಂದಿ ಬದುಕುವಂತೆ ಅನುಗ್ರಹಿಸಬೇಕು,” ಎಂದು ಬಹಳವಾಗಿ ವಿನಂತಿಸಿದನು.
24 : ಯೇಸು ಅವನ ಜೊತೆಯಲ್ಲಿ ಹೊರಟರು. ದೊಡ್ಡ ಜನಸ್ತೋಮವು ಯೇಸುವನ್ನು ಮುತ್ತಿಕೊಂಡು ಅವರ ಜೊತೆಯಲ್ಲೇ ಹೊರಟಿತು.
25 : ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ಆ ಗುಂಪಿನಲ್ಲಿದ್ದಳು.
26 : ಅನೇಕ ವೈದ್ಯರಿಂದ ಚಿಕಿತ್ಸೆ ಪಡೆದಿದ್ದರೂ ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯ ಮಾಡಿದ್ದರೂ ಅವಳ ರೋಗ ಮಾತ್ರ ಉಲ್ಬಣ ಆಗುತ್ತಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ.
27 : ಯೇಸುವಿನ ವಿಷಯವಾಗಿ ಜನರು ಹೇಳುತ್ತಿದ್ದುದನ್ನು ಆಕೆ ಕೇಳಿ, ಜನರ ಗುಂಪಿನಲ್ಲಿ ಸೇರಿ, ಯೇಸುವನ್ನು ಹಿಂಬಾಲಿಸಿದಳು.
28 : “ನಾನು ಅವರ ಉಡುಪನ್ನು ಮುಟ್ಟಿದರೂ ಸಾಕು, ಗುಣಹೊಂದುವೆನು” ಎಂದುಕೊಂಡು ಯೇಸುವಿನ ಉಡುಪನ್ನು ಮುಟ್ಟಿದಳು.
29 : ಅದನ್ನು ಮುಟ್ಟಿದಾಕ್ಷಣ ಅವಳ ರಕ್ತಸ್ರಾವ ನಿಂತುಹೋಯಿತು. ಕಾಡುತ್ತಿದ್ದ ವ್ಯಾಧಿಯಿಂದ ತಾನು ಗುಣಹೊಂದಿದ್ದೇನೆಂದು ಆಕೆಗೆ ಅರಿವಾಯಿತು.
30 : ಇತ್ತ ಯೇಸು, ರೋಗವನ್ನು ಗುಣಪಡಿಸುವ ಶಕ್ತಿ ತಮ್ಮಿಂದ ಹೊರಹೊಮ್ಮಿದ್ದನ್ನು ತಕ್ಷಣ ತಿಳಿದು, ಸುತ್ತಲಿದ್ದ ಜನರತ್ತ ತಮ್ಮ ದೃಷ್ಟಿಯನ್ನು ಹರಿಸಿ, “ನನ್ನ ಉಡುಪನ್ನು ಮುಟ್ಟಿದವರಾರು?” ಎಂದು ಪ್ರಶ್ನಿಸಿದರು.
31 : ಅದಕ್ಕೆ ಶಿಷ್ಯರು, “ತಮ್ಮ ಸುತ್ತಲೂ ಜನರು ಮುತ್ತಿಕೊಂಡಿರುವುದು ತಮಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು?’ ಎಂದು ಕೇಳುತ್ತೀರಲ್ಲಾ” ಎಂದರು.
32 : ಆದರೆ ಯೇಸು ತಮ್ಮನ್ನು ಮುಟ್ಟಿದವರು ಯಾರೆಂದು ಗುರುತಿಸಲು ಸುತ್ತಲೂ ನೋಡುತ್ತಿದ್ದರು.
33 : ತನ್ನಲ್ಲಿ ಸಂಭವಿಸಿದ್ದನ್ನು ಅರಿತಿದ್ದ ಆ ಮಹಿಳೆ ಭಯದಿಂದ ನಡುಗುತ್ತಾ ಮುಂದೆ ಬಂದು ಯೇಸುವಿನ ಪಾದಕ್ಕೆ ಎರಗಿ, ಅವರಿಗೆ ನಡೆದ ಸಂಗತಿಯನ್ನು ತಿಳಿಸಿದಳು.
34 : ಯೇಸು ಆಕೆಗೆ, “ಮಗಳೇ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ; ಸಮಾಧಾನದಿಂದ ಹೋಗು, ವ್ಯಾಧಿಮುಕ್ತಳಾಗಿ ಆರೋಗ್ಯದಿಂದಿರು,” ಎಂದು ಅನುಗ್ರಹಿಸಿದರು.
35 : ಯೇಸುಸ್ವಾಮಿ ಇನ್ನೂ ಮಾತನಾಡುತ್ತ ಇರುವಾಗಲೇ ಯಾಯಿರನ ಮನೆಯಿಂದ ಕೆಲವರು ಬಂದು ಅವನಿಗೆ, “ನಿಮ್ಮ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುತ್ತೀರಿ?” ಎಂದರು.
36 : ಅವರು ಹೇಳಿದ ಮಾತುಗಳನ್ನು ಯೇಸು ಕೇಳಿಯೂ ಅವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳದೆ ಯಾಯಿರನಿಗೆ, “ಭಯಪಡಬೇಡ, ನಿನ್ನಲ್ಲಿ ವಿಶ್ವಾಸ ಒಂದಿದ್ದರೆ ಸಾಕು,” ಎಂದರು.
37 : ಅನಂತರ ಪೇತ್ರ, ಯಕೋಬ ಹಾಗೂ ಅವನ ಸೋದರ ಯೊವಾನ್ನ, ಇವರನ್ನು ಮಾತ್ರ ತಮ್ಮ ಜೊತೆಯಲ್ಲಿ ಕರೆದುಕೊಂಡು ಯಾಯಿರನ ಮನೆಯನ್ನು ತಲುಪಿದರು.
38 : ಅಲ್ಲಿ ಜನರ ಗೋಳಾಟ, ಗೊಂದಲದ ದೃಶ್ಯ ಅವರ ಕಣ್ಣಿಗೆ ಬಿತ್ತು.
39 : ಯೇಸು ಮನೆಯೊಳಕ್ಕೆ ಹೋಗಿ, “ಏತಕ್ಕೆ ಇಷ್ಟೆಲ್ಲಾ ಗಲಭೆ, ಗೋಳಾಟ? ಬಾಲಕಿ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ,” ಎಂದರು.
40 : ಇದನ್ನು ಕೇಳಿದ ಜನರು, ಯೇಸುವನ್ನು ಪರಿಹಾಸ್ಯ ಮಾಡಿದರು. ಆದರೆ ಯೇಸು ಎಲ್ಲರನ್ನೂ ಹೊರಗೆ ಕಳುಹಿಸಿ ಬಾಲಕಿಯ ತಂದೆತಾಯಿಯನ್ನು ಮತ್ತು ತಮ್ಮೊಂದಿಗಿದ್ದ ಮೂವರು ಶಿಷ್ಯರನ್ನು ಮಾತ್ರ ಕರೆದುಕೊಂಡು ಆ ಬಾಲಕಿಯನ್ನು ಮಲಗಿಸಿದ್ದ ಕೊಠಡಿಯನ್ನು ಪ್ರವೇಶಿಸಿದರು.
41 : ಆಕೆಯ ಕೈಯನ್ನು ಹಿಡಿದು, “ತಲಿಥಾಕೂಮ್” ಎಂದರು. (‘ಮಗಳೇ, ನಿನಗೆ ಹೇಳುತ್ತೇನೆ, ಎದ್ದೇಳು’ ಎಂಬುದು ಆ ಮಾತಿನ ಅರ್ಥ)
42 : ಅವಳು ತಟ್ಟನೆ ಎದ್ದು ನಡೆದಾಡತೊಡಗಿದಳು. ಅಲ್ಲಿದ್ದವರೆಲ್ಲರೂ ಆಶ್ಚರ್ಯ ಭರಿತರಾದರು. ಅವಳಿಗೆ ಹನ್ನೆರಡು ವರ್ಷ ವಯಸ್ಸು ಆಗಿತ್ತು.
43 : ಈ ವಿಷಯವನ್ನು ಬೇರೆ ಯಾರಿಗೂ ತಿಳಿಸಬಾರದೆಂದು ಯೇಸು ಅವರಿಗೆ ಕಟ್ಟಪ್ಪಣೆ ಮಾಡಿದರು. ಬಾಲಕಿಗೆ ತಿನ್ನಲು ಏನಾದರೂ ಕೊಡುವಂತೆ ತಿಳಿಸಿದರು. ತೌರೂರಿನವರ ತಾತ್ಸಾರ (ಮತ್ತಾ. 13.53-58; ಲೂಕ 4.16-30)

· © 2017 kannadacatholicbible.org Privacy Policy