Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

ಮಾರ್ಕ


1 : ಯೇಸುಸ್ವಾಮಿ ಅಲ್ಲಿಂದ ಹೊರಟು ತಮ್ಮ ಸ್ವಂತ ಊರಿಗೆ ಹೋದರು. ಶಿಷ್ಯರು ಅವರನ್ನು ಹಿಂಬಾಲಿಸಿದರು.
2 : ಸಬ್ಬತ್ ದಿನ ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಉಪದೇಶ ಮಾಡತೊಡಗಿದರು. ಕಿಕ್ಕಿರಿದು ನೆರೆದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. “ಇದೆಲ್ಲಾ ಇವನಿಗೆ ಎಲ್ಲಿಂದ ಬಂದಿತು? ಇವನು ಪಡೆದಿರುವ ಜ್ಞಾನವಾದರೂ ಎಂಥಾದ್ದು? ಇವನಿಂದ ಮಹತ್ಕಾರ್ಯಗಳು ಆಗುವುದಾದರೂ ಹೇಗೆ?
3 : ಇವನು ಆ ಬಡಗಿಯಲ್ಲವೆ? ಮರಿಯಳ ಮಗನಲ್ಲವೆ? ಯಕೋಬ, ಯೋಸೆ, ಯೂದ ಮತ್ತು ಸಿಮೋನ ಇವರ ಸಹೋದರನಲ್ಲವೆ? ಇವನ ಸಹೋದರಿಯರು ಇಲ್ಲಿಯೇ ವಾಸಮಾಡುತ್ತಿಲ್ಲವೆ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರ ಮಾಡಿದರು.
4 : ಆಗ ಯೇಸು, “ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು. ಆದರೆ ಸ್ವಗ್ರಾಮದಲ್ಲಿ, ಸ್ವಜನರಲ್ಲಿ, ಸ್ವಗೃಹದಲ್ಲಿ ಗೌರವ ದೊರಕದು,” ಎಂದರು.
5 : ಕೆಲವು ರೋಗಿಗಳ ಮೇಲೆ ಕೈಗಳನ್ನಿರಿಸಿ ಅವರನ್ನು ಗುಣಪಡಿಸಿದ್ದನ್ನು ಬಿಟ್ಟರೆ ಇನ್ನಾವ ಮಹತ್ತಾದ ಕಾರ್ಯಗಳನ್ನೂ ಅವರು ಅಲ್ಲಿ ಮಾಡಲಾಗಲಿಲ್ಲ.
6 : ಆ ಜನರ ಅವಿಶ್ವಾಸವನ್ನು ಕಂಡು ಯೇಸುವಿಗೆ ಬಹಳ ಅಚ್ಚರಿಯಾಯಿತು. ಪ್ರೇಷಿತರಿಗೆ ಕೊಟ್ಟ ಆದೇಶ (ಮತ್ತಾ. 10.5-15; ಲೂಕ 9.1-6)
7 : ಅನಂತರ ಯೇಸುಸ್ವಾಮಿ ಸುತ್ತಮುತ್ತಲಿನ ಊರುಗಳಿಗೆ ಹೋಗಿ ಜನರಿಗೆ ಪ್ರಬೋಧಿಸಿದರು. ಇದಲ್ಲದೆ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ ದೆವ್ವಬಿಡಿಸುವ ಅಧಿಕಾರವನ್ನಿತ್ತು, ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದರು.
8 : ಕಳುಹಿಸುವಾಗ, “ಪ್ರಯಾಣ ದಂಡವೊಂದನ್ನು ಹೊರತು ಇನ್ನೇನನ್ನೂ ತೆಗೆದುಕೊಂಡು ಹೋಗಬೇಡಿ.
9 : ಬುತ್ತಿ, ಜೋಳಿಗೆ, ಜೇಬಿನಲ್ಲಿ ಹಣ, ಯಾವುದೂ ಬೇಡ. ಪಾದರಕ್ಷೆಯನ್ನು ಮೆಟ್ಟಿಕೊಂಡರೆ ಸಾಕು. ಎರಡು ಅಂಗಿಗಳನ್ನೂ ತೊಟ್ಟುಕೊಳ್ಳಬೇಡಿ,” ಎಂದು ಅಪ್ಪಣೆ ಮಾಡಿದರು.
10 : ಇದಲ್ಲದೆ, “ನೀವು ಯಾವುದೇ ಒಂದು ಊರಿಗೆ ಹೋದಾಗ ಆ ಊರನ್ನು ಬಿಡುವವರೆಗೂ ಆತಿಥ್ಯ ನೀಡುವ ಯಾವುದಾದರೂ ಒಂದು ಮನೆಯಲ್ಲೇ ಉಳಿದುಕೊಳ್ಳಿ.
11 : ಯಾವುದೇ ಊರಿನ ಜನರು ನಿಮ್ಮನ್ನು ಸ್ವಾಗತಿಸದೆಯೂ ನಿಮ್ಮ ಬೋಧನೆಗೆ ಕಿವಿಗೊಡದೆಯೂ ಹೋದರೆ, ಆ ಊರನ್ನು ಬಿಟ್ಟು ಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ. ಅವರ ವಿರುದ್ಧ ಅದು ಸಾಕ್ಷಿಯಾಗಿರಲಿ,” ಎಂದರು.
12 : ಶಿಷ್ಯರು ಹೊರಟು ಹೋಗಿ, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ,” ಎಂದು ಜನರಿಗೆ ಸಾರಿ ಹೇಳಿದರು.
13 : ದೆವ್ವ ಹಿಡಿದಿದ್ದ ಅನೇಕರಿಂದ ದೆವ್ವಗಳನ್ನು ಹೊರಗಟ್ಟಿದರು. ತೈಲಲೇಪನಮಾಡಿ ಅನೇಕ ರೋಗಿಗಳನ್ನು ಗುಣಪಡಿಸಿದರು. ಹುತಾತ್ಮನಾದ ಯೊವಾನ್ನ (ಮತ್ತಾ. 14.1-12; ಲೂಕ 9.7-9)
14 : ಇಷ್ಟರಲ್ಲಿ ಯೇಸುಸ್ವಾಮಿಯ ಹೆಸರು ಮನೆಮಾತಾಯಿತು. ಅದು ಹೆರೋದ ಅರಸನ ಕಿವಿಗೂ ಬಿತ್ತು. ಯೇಸುವಿನ ವಿಚಾರವಾಗಿ ಕೆಲವರು, “ಮಡಿದ ಸ್ನಾನಿಕ ಯೊವಾನ್ನನೇ ಮರಳಿ ಜೀವಂತವಾಗಿ ಬಂದಿದ್ದಾನೆ; ಆದುದರಿಂದಲೇ ಮಹತ್ಕಾರ್ಯಗಳನ್ನು ಮಾಡುವ ಶಕ್ತಿ ಇವನಿಗಿದೆ,” ಎನ್ನುತ್ತಿದ್ದರು.
15 : ಇನ್ನು ಕೆಲವರು, ‘ಈತನೇ ಎಲೀಯನು’ ಎಂದೂ ಮತ್ತೆ ಕೆಲವರು, “ಪ್ರಾಚೀನ ಪ್ರವಾದಿಗಳಂತೆ ಈತನೂ ಒಬ್ಬ ಪ್ರವಾದಿ,” ಎಂದೂ ಹೇಳುತ್ತಿದ್ದರು.
16 : ಇದನ್ನೆಲ್ಲಾ ಕೇಳಿದ ಹೆರೋದನು, “ಹೌದು, ನಾನು ಶಿರಚ್ಛೇದನ ಮಾಡಿದ ಯೊವಾನ್ನನೇ ಮರಳಿ ಜೀವಂತನಾಗಿ ಬಂದಿದ್ದಾನೆ,” ಎಂದನು.
17 : ಹೆರೋದನು ತಾನು ಇಟ್ಟುಕೊಂಡಿದ್ದ ಹೆರೋದಿಯಳ ನಿಮಿತ್ತ ಯೊವಾನ್ನನನ್ನು ಸೆರೆಹಿಡಿಸಿ ಬಂಧನದಲ್ಲಿರಿಸಿದ್ದನು. ಹೆರೋದಿಯಳು ಹೆರೋದನ ಸಹೋದರ ಫಿಲಿಪ್ಪನ ಧರ್ಮಪತ್ನಿ. ಆದರೂ ಹೆರೋದನು ಆಕೆಯನ್ನು ಹೆಂಡತಿಯಾಗಿ ಇಟ್ಟುಕೊಂಡಿದ್ದನು.
18 : ಈ ಕಾರಣ ಯೊವಾನ್ನನು, “ನಿನ್ನ ಸಹೋದರನ ಪತ್ನಿಯನ್ನು ನೀನು ಇಟ್ಟುಕೊಂಡಿರುವುದು ನ್ಯಾಯವಲ್ಲ,” ಎಂದು ಪದೇಪದೇ ಅವನನ್ನು ಎಚ್ಚರಿಸುತ್ತಿದ್ದನು.
19 : ಇದರ ನಿಮಿತ್ತ ಹೆರೋದಿಯಳು ಯೊವಾನ್ನನ ಮೇಲೆ ಹಗೆಯಿಟ್ಟು ಆತನನ್ನು ಕೊಲ್ಲಿಸಬೇಕು ಎಂದಿದ್ದಳು. ಆದರೆ ತನ್ನ ಸೇಡನ್ನು ತೀರಿಸಿಕೊಳ್ಳಲು ಅವಳಿಂದಾಗಿರಲಿಲ್ಲ.
20 : ಏಕೆಂದರೆ, ಯೊವಾನ್ನನು ಸಂತನು ಹಾಗೂ ಸತ್ಪುರುಷನು ಎಂದು ಹೆರೋದನು ಅರಿತು, ಆತನಿಗೆ ಭಯಪಟ್ಟು ಯಾವ ಅಪಾಯವೂ ಆತನಿಗೆ ಬಾರದಂತೆ ನೋಡಿಕೊಳ್ಳುತ್ತಿದ್ದನು. ಯೊವಾನ್ನನು ಹೇಳುತ್ತಿದ್ದ ಮಾತುಗಳನ್ನು ಕೇಳಿದಾಗಲೆಲ್ಲಾ ಹೆರೋದನ ಮನಸ್ಸು ಅಲ್ಲೋಲ ಕಲ್ಲೋಲವಾಗುತ್ತಿತ್ತು. ಆದರೂ ಆತನ ಮಾತುಗಳನ್ನು ಕಿವಿಗೊಟ್ಟು ಕೇಳುತ್ತಿದ್ದನು.
21 : ಕಡೆಗೊಮ್ಮೆ, ಹೆರೋದಿಯಳಿಗೆ ಅನುಕೂಲವಾದ ಸಂದರ್ಭ ಒದಗಿತು. ಹೆರೋದನು ತನ್ನ ಹುಟ್ಟುಹಬ್ಬದ ದಿನಾಚರಣೆಯಂದು, ಆಸ್ಥಾನಿಕರಿಗೂ ಸೇನಾಧಿಪತಿಗಳಿಗೂ ಗಲಿಲೇಯ ಪ್ರಾಂತ್ಯದ ಪ್ರಮುಖರಿಗೂ ಔತಣಕೂಟವನ್ನು ಏರ್ಪಡಿಸಿದನು.
22 : ಆ ಸಮಾರಂಭದಲ್ಲಿ ಹೆರೋದಿಯಳ ಮಗಳು ಔತಣಶಾಲೆಗೆ ಬಂದು ನರ್ತನ ಮಾಡಿದಳು. ಹೆರೋದನೂ ಅವನ ಜೊತೆಯಲ್ಲಿ ಭೋಜನಕ್ಕೆ ಕುಳಿತಿದ್ದ ಅತಿಥಿಗಳೂ ಅದನ್ನು ಬಹಳವಾಗಿ ಮೆಚ್ಚಿಕೊಂಡರು.
23 : ಆಗ ಅರಸ ಹೆರೋದನು ಅವಳಿಗೆ, “ನಿನಗೆ ಏನು ಬೇಕಾದರೂ ಕೇಳು, ಕೊಡುತ್ತೇನೆ” ಎಂದನು. “ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿಕೊಂಡರೂ ಅದನ್ನು ನಿನಗೆ ಕೊಡುತ್ತೇನೆ,” ಎಂದು ಪ್ರಮಾಣ ಮಾಡಿದನು.
24 : ಅವಳು ತನ್ನ ತಾಯಿಯ ಬಳಿಗೆ ಹೋಗಿ, “ಅಮ್ಮಾ, ನಾನು ಏನನ್ನು ಕೇಳಿಕೊಳ್ಳಲಿ?” ಎಂದು ವಿಚಾರಿಸಿದಳು. “ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು,” ಎಂದು ಆಕೆ ಮಗಳನ್ನು ಪ್ರೇರೇಪಿಸಿದಳು.
25 : ಕೂಡಲೆ ಅವಳು ಅರಸನ ಬಳಿಗೆ ಧಾವಿಸಿ, “ಸ್ನಾನಿಕ ಯೊವಾನ್ನನ ತಲೆಯನ್ನು ಇದೀಗಲೇ ಒಂದು ತಟ್ಟೆಯಲ್ಲಿ ತರಿಸಿಕೊಡಿ; ಇದೇ ನನ್ನ ಬೇಡಿಕೆ,” ಎಂದು ಕೇಳಿಕೊಂಡಳು.
26 : ಅರಸನಿಗೆ ಅತೀವ ದುಃಖವಾಯಿತು. ಆದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ.
27 : ಆದುದರಿಂದ ಅವನು ಒಬ್ಬ ಪಹರೆಯವನನ್ನು ಕರೆದು, ಕೂಡಲೇ ಯೊವಾನ್ನನ ತಲೆಯನ್ನು ತರಬೇಕೆಂದು ಅವನಿಗೆ ಆಜ್ಞೆಮಾಡಿ ಕಳುಹಿಸಿದನು.
28 : ಪಹರೆಯವನು ಸೆರೆಮನೆಗೆ ಹೋಗಿ ಯೊವಾನ್ನನ ತಲೆಯನ್ನು ಕತ್ತರಿಸಿ, ಅದನ್ನು ತಟ್ಟೆಯಲ್ಲಿ ಇಟ್ಟು ಹುಡುಗಿಗೆ ತಂದುಕೊಟ್ಟನು. ಅವಳು ಅದನ್ನು ತನ್ನ ತಾಯಿಗೆ ಕೊಟ್ಟಳು.
29 : ಇದನ್ನು ಕೇಳಿದ ಯೊವಾನ್ನನ ಶಿಷ್ಯರು ಅಲ್ಲಿಗೆ ಬಂದು ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಮಾಡಿದರು. ಐದೆಲ್ಲಿ? ಐದುಸಾವಿರವೆಲ್ಲಿ? (ಮತ್ತಾ. 14.13-21; ಲೂಕ 9.10-17; ಯೊವಾ. 6.1-13)
30 : ಪ್ರೇಷಿತರು ಯೇಸುಸ್ವಾಮಿಯ ಬಳಿಗೆ ಹಿಂದಿರುಗಿ ಬಂದು ತಾವು ಮಾಡಿದ ಸಕಲ ಕಾರ್ಯಕಲಾಪಗಳ ಹಾಗೂ ನೀಡಿದ ಬೋಧನೆಯ ವರದಿಯನ್ನು ಒಪ್ಪಿಸಿದರು.
31 : ಜನರು ಗುಂಪು ಗುಂಪಾಗಿ ಎಡೆಬಿಡದೆ ಬರುತ್ತಾ ಹೋಗುತ್ತಾ ಇದ್ದುದರಿಂದ ಯೇಸುವಿಗೆ ಮತ್ತು ಅವರ ಶಿಷ್ಯರಿಗೆ ಊಟಮಾಡಲೂ ಬಿಡುವಿರಲಿಲ್ಲ.
32 : ಆದುದರಿಂದ ಯೇಸು, “ಬನ್ನಿ, ಪ್ರತ್ಯೇಕವಾಗಿ ನಾವು ನಿರ್ಜನಪ್ರದೇಶಕ್ಕೆ ಹೋಗಿ ಸ್ವಲ್ಪ ವಿಶ್ರಮಿಸಿಕೊಂಡು ಬರೋಣ,” ಎಂದರು. ಅಂತೆಯೇ ಅವರೆಲ್ಲರೂ ಪ್ರತ್ಯೇಕವಾಗಿ ದೋಣಿಯನ್ನು ಹತ್ತಿ ಏಕಾಂತ ಪ್ರದೇಶಕ್ಕೆ ಹೊರಟರು.
33 : ಆದರೆ ಅವರು ಹೋಗುತ್ತಿರುವುದನ್ನು ಕಂಡು ಗುರುತಿಸಿದ ಅನೇಕರು ಎಲ್ಲಾ ಊರುಗಳಿಂದ ಕಾಲ್ದಾರಿಯಲ್ಲಿ ತ್ವರಿತವಾಗಿ ಸಾಗಿ ಅವರಿಗೆ ಮುಂಚಿತವಾಗಿಯೇ ಆ ಸ್ಥಳವನ್ನು ಸೇರಿದರು.
34 : ಯೇಸು ದೋಣಿಯಿಂದ ಇಳಿದಾಗ ಅಲ್ಲಿ ದೊಡ್ಡ ಜನಸಮೂಹವೇ ಸೇರಿತ್ತು. ಆ ಜನರು ಕುರುಬನಿಲ್ಲದ ಕುರಿಗಳಂತಿರುವುದನ್ನು ಕಂಡು, ಯೇಸುವಿನ ಮನ ಕರಗಿತು; ಅನೇಕ ವಿಷಯಗಳನ್ನು ಕುರಿತು ಅವರಿಗೆ ಉಪದೇಶವಿತ್ತರು.
35 : ಅಷ್ಟರಲ್ಲಿ ಸಂಜೆಯಾಗುತ್ತಾ ಬಂದಿತು. ಶಿಷ್ಯರು ಯೇಸುವಿನ ಬಳಿಗೆ ಬಂದು,
36 : “ಈಗಾಗಲೇ ಹೊತ್ತು ವಿೂರಿಹೋಯಿತು; ಇದು ನಿರ್ಜನ ಪ್ರದೇಶ; ಇನ್ನು ಜನರನ್ನು ಕಳುಹಿಸಿಬಿಡಿ. ಅವರು ಸವಿೂಪದ ಊರುಕೇರಿಗಳಿಗೆ ಹೋಗಿ ಊಟಕ್ಕೆ ಏನಾದರೂ ಕೊಂಡುಕೊಳ್ಳಲಿ,” ಎಂದರು.
37 : ಆಗ ಯೇಸು, “ನೀವೇ ಅವರಿಗೆ ಊಟಕ್ಕೇನಾದರೂ ಕೊಡಿ,” ಎಂದರು ಅದಕ್ಕೆ ಶಿಷ್ಯರು “ನಾವು ಹೋಗಿ ಇನ್ನೂರು ದೆನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುತಂದು ಅವರಿಗೆ ಊಟಕ್ಕೆ ಬಡಿಸೋಣವೇನು?” ಎಂದರು.
38 : ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ, ಹೋಗಿ ನೋಡಿಕೊಂಡು ಬನ್ನಿ,” ಎಂದರು. ಅವರು ವಿಚಾರಿಸಿಕೊಂಡು ಬಂದು, “ನಮ್ಮಲ್ಲಿ ಐದುರೊಟ್ಟಿ ಮತ್ತು ಎರಡು ವಿೂನುಗಳಿವೆ,” ಎಂದು ತಿಳಿಸಿದರು.
39 : ಎಲ್ಲರು ಪಂಕ್ತಿಪಂಕ್ತಿಯಾಗಿ ಹಸಿರು ಹುಲ್ಲಿನ ಮೇಲೆ ಊಟಕ್ಕೆ ಕುಳಿತುಕೊಳ್ಳಬೇಕೆಂದು ಯೇಸು ಅಪ್ಪಣೆಮಾಡಿದರು.
40 : ಅವರು ಐವತ್ತರಂತೆಯೂ ನೂರರಂತೆಯೂ ಪಂಕ್ತಿಯಲ್ಲಿ ಕುಳಿತರು.
41 : ಯೇಸು ಆ ಐದು ರೊಟ್ಟಿಗಳನ್ನೂ ಎರಡು ವಿೂನುಗಳನ್ನೂ ತೆಗೆದುಕೊಂಡು, ಸ್ವರ್ಗದತ್ತ ಕಣ್ಣೆತ್ತಿ ನೋಡಿ, ದೇವರಿಗೆ ಸ್ತೋತ್ರ ಸಲ್ಲಿಸಿದರು. ತರುವಾಯ ಆ ರೊಟ್ಟಿಗಳನ್ನು ಮುರಿದು ಜನರಿಗೆ ಬಡಿಸುವಂತೆ ಅವನ್ನು ಶಿಷ್ಯರಿಗೆ ಕೊಟ್ಟರು. ಅಂತೆಯೇ ಎರಡು ವಿೂನುಗಳನ್ನು ಜನರೆಲ್ಲರಿಗೆ ಹಂಚುವಂತೆ ಮಾಡಿದರು.
42 : ಎಲ್ಲರೂ ಹೊಟ್ಟೆ ತುಂಬಾ ತಿಂದು ತೃಪ್ತರಾದರು.
43 : ಇನ್ನೂ ಉಳಿದಿದ್ದ ರೊಟ್ಟಿ ಮತ್ತು ವಿೂನಿನ ತುಂಡುಗಳನ್ನು ಒಟ್ಟುಗೂಡಿಸಿದಾಗ, ಅವು ಹನ್ನೆರಡು ಬುಟ್ಟಿ ತುಂಬ ಆದವು.
44 : ಊಟ ಮಾಡಿದವರಲ್ಲಿ ಗಂಡಸರ ಸಂಖ್ಯೆಯೇ ಐದು ಸಾವಿರ. ಕಡಲಿನ ಮೇಲೆ ಕಾಲುನಡೆ (ಮತ್ತಾ. 14.22-33; ಯೊವಾ. 6.15-21)
45 : ಇದಾದಮೇಲೆ ಯೇಸುಸ್ವಾಮಿ, ತಾವು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ ಶಿಷ್ಯರು ದೋಣಿ ಹತ್ತಿ ತಮಗಿಂತ ಮುಂದಾಗಿ ಸರೋವರದ ಆ ಕಡೆಗಿದ್ದ ಬೆತ್ಸಾಯಿದಕ್ಕೆ ಹೋಗುವಂತೆ ಆಜ್ಞಾಪಿಸಿದರು.
46 : ಜನರನ್ನು ಬೀಳ್ಕೊಟ್ಟ ಬಳಿಕ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋದರು.
47 : ಕತ್ತಲೆ ಕವಿದಾಗ ದೋಣಿಯು ಸರೋವರದ ಮಧ್ಯೆ ಸಾಗಿತ್ತು. ಇತ್ತ ಯೇಸು ಒಬ್ಬರೇ ದಡದಲ್ಲಿದ್ದರು.
48 : ಎದುರುಗಾಳಿ ಬೀಸುತ್ತಿದ್ದುದರಿಂದ ಶಿಷ್ಯರು ಹುಟ್ಟುಹಾಕಿ ದಣಿದು ಹೋಗಿದ್ದರು. ಇದನ್ನು ಕಂಡ ಯೇಸು ಸರೋವರದ ನೀರಿನ ಮೇಲೆ ನಡೆದುಕೊಂಡು ಅವರ ಕಡೆಗೆ ಬಂದು, ಅವರನ್ನು ದಾಟಿ ಮುಂದೆ ಹೋಗುವುದರಲ್ಲಿದ್ದರು.
49 : ಆಗ ಸುಮಾರು ರಾತ್ರಿಯ ಕಡೇ ಜಾವದ ಸಮಯ. ಸರೋವರದ ಮೇಲೆ ನಡೆದು ಬರುತ್ತಿದ್ದ ಯೇಸುವನ್ನು ಶಿಷ್ಯರು ನೋಡಿದರು; ಭೂತವೆಂದು ಭಾವಿಸಿ ಭಯದಿಂದ ಚೀರಿದರು. ಅವರೆಲ್ಲರೂ ಯೇಸುವನ್ನು ನೋಡಿ ದಿಗಿಲುಗೊಂಡಿದ್ದರು.
50 : ತಕ್ಷಣವೇ ಯೇಸು ಅವರೊಡನೆ ಮಾತನಾಡುತ್ತಾ, “ಭಯಪಡಬೇಡಿ, ಬೇರೆ ಯಾರೂ ಅಲ್ಲ, ನಾನೇ; ಧೈರ್ಯದಿಂದಿರಿ,” ಎಂದು ಅವರೊಡನೆ ಮಾತಾಡಿ ದೋಣಿಯನ್ನು ಹತ್ತಿದರು.
51 : ಆಗ ಎದುರುಗಾಳಿ ನಿಂತು ಹೋಯಿತು. ಶಿಷ್ಯರು ಬೆಕ್ಕಸಬೆರಗಾದರು. ಅವರ ಬುದ್ಧಿ ಮಂದವಾಗಿತ್ತು.
52 : ರೊಟ್ಟಿಗಳ ಅದ್ಭುತವನ್ನು ಅವರು ಇನ್ನೂ ಗ್ರಹಿಸಿಕೊಂಡಿರಲಿಲ್ಲ. ಗೆನಸರೇತಿನ ರೋಗಿಗಳಿಗೆ ಆರೋಗ್ಯದಾನ (ಮತ್ತಾ. 14.34-36)
53 : ಅವರೆಲ್ಲರು ಸರೋವರವನ್ನು ದಾಟಿ ಗೆನಸರೇತ್ ಊರಿನ ದಡ ಸೇರಿದರು.
54 : ಅವರು ದೋಣಿಯನ್ನು ಕಟ್ಟಿ, ಅದರಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುಸ್ವಾಮಿಯ ಗುರುತು ಹಚ್ಚಿದರು. ಒಡನೆ ಸುತ್ತಮುತ್ತಲೆಲ್ಲಾ ಓಡಾಡಿ, ರೋಗಿಗಳನ್ನು ಹಾಸಿಗೆಗಳ ಸಹಿತ ಹೊತ್ತುಕೊಂಡು, ಯೇಸು ಎಲ್ಲೆಲ್ಲಿ ಇದ್ದಾರೆಂದು ಕೇಳಿದರೋ ಅಲ್ಲೆಲ್ಲಾ ಹೋಗತೊಡಗಿದರು.
55 : ಯೇಸು ಹಳ್ಳಿಗಳಿಗಾಗಲಿ ಪಟ್ಟಣಪಾಳೆಯಗಳಿಗಾಗಲಿ ಹೋದಾಗಲೆಲ್ಲಾ ಜನರು ರೋಗಿಗಳನ್ನು ಅಲ್ಲಿಯ ಸಂತೆಬೀದಿ ಚೌಕಗಳಿಗೆ ಕರೆ ತರುತ್ತಿದ್ದರು.
56 : ಅವರ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಯೇಸುವನ್ನು ಬೇಡಿಕೊಳ್ಳುತ್ತಿದ್ದರು. ಹಾಗೆ ಮುಟ್ಟಿದವರೆಲ್ಲರೂ ಗುಣಹೊಂದುತ್ತಿದ್ದರು. ಮಾನವ ಸಂಪ್ರದಾಯಕ್ಕಿಂತ ದೈವಾಜ್ಞೆ ಶ್ರೇಷ್ಠ (ಮತ್ತಾ. 15.1-10)

· © 2017 kannadacatholicbible.org Privacy Policy