1 : ಜನರು ಪುನಃ ದೊಡ್ಡ ಸಂಖ್ಯೆಯಲ್ಲಿ ಬಂದು ನೆರೆದಿದ್ದರು. ಊಟಮಾಡಲು ಅವರಲ್ಲಿ ಆಹಾರವಿರಲಿಲ್ಲ.
2 : ಆಗ ಯೇಸುಸ್ವಾಮಿ ಶಿಷ್ಯರನ್ನು ಕರೆದು, “ಈ ಜನರು ಕಳೆದ ಮೂರು ದಿನಗಳಿಂದಲೂ ನನ್ನ ಬಳಿ ಇದ್ದಾರೆ; ಊಟಕ್ಕೆ ಇವರಲ್ಲಿ ಏನೂ ಇಲ್ಲ.
3 : ಇವರನ್ನು ಕಂಡಾಗ ನನ್ನ ಹೃದಯ ಕರಗುತ್ತದೆ. ಬರೀ ಹೊಟ್ಟೆಯಲ್ಲಿ ಮನೆಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಬಿದ್ದಾರು. ಕೆಲವರಂತೂ ಬಹುದೂರದಿಂದ ಬಂದಿದ್ದಾರೆ,” ಎಂದರು.
4 : ಅದಕ್ಕೆ ಶಿಷ್ಯರು, “ಇಷ್ಟು ದೊಡ್ಡ ಗುಂಪಿಗೆ ಆಗುವಷ್ಟು ರೊಟ್ಟಿಯನ್ನು ಈ ಅಡವಿಯಲ್ಲಿ ನಾವು ತರುವುದಾದರೂ ಎಲ್ಲಿಂದ?” ಎಂದು ಮರುನುಡಿದರು.
5 : ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಲು ಅವರು, “ಏಳು ಇವೆ,” ಎಂದರು.
6 : ಯೇಸು ಜನರ ಗುಂಪಿಗೆ ನೆಲದ ಮೇಲೆ ಕುಳಿತುಕೊಳ್ಳುವಂತೆ ಆಜ್ಞಾಪಿಸಿದರು. ಅನಂತರ ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಸಲ್ಲಿಸಿ, ಅವುಗಳನ್ನು ಮುರಿದು, ಜನರ ಗುಂಪಿಗೆ ಬಡಿಸಲು ಶಿಷ್ಯರಿಗೆ ಕೊಟ್ಟರು. ಅವರು ಬಡಿಸಿದರು.
7 : ಅವರಲ್ಲಿ ಕೆಲವು ಸಣ್ಣ ವಿೂನುಗಳಿದ್ದವು. ಯೇಸು ಅವುಗಳಿಗಾಗಿಯೂ ದೇವಸ್ತುತಿಮಾಡಿ ಅವುಗಳನ್ನು ಹಂಚಬೇಕೆಂದು ಆಜ್ಞಾಪಿಸಿದರು. ಜನರೆಲ್ಲರೂ ಉಂಡು ತೃಪ್ತರಾದರು.
8 : ಉಳಿದ ರೊಟ್ಟಿಯ ತುಂಡುಗಳನ್ನು ಒಟ್ಟುಗೂಡಿಸಿದಾಗ ಅವು ಏಳು ಕುಕ್ಕೆಗಳ ತುಂಬ ಆದುವು.
9 : ಊಟಮಾಡಿದವರ ಸಂಖ್ಯೆ ನಾಲ್ಕು ಸಾವಿರ.
10 : ಊಟವಾದ ಬಳಿಕ ಯೇಸು ಜನರನ್ನು ಕಳುಹಿಸಿಕೊಟ್ಟು, ವಿಳಂಬಮಾಡದೆ ದೋಣಿಯನ್ನು ಹತ್ತಿ, ಶಿಷ್ಯರೊಡನೆ ದಲ್ಮನೂಥ ಎಂಬ ಪ್ರದೇಶಕ್ಕೆ ಹೋದರು.
ಪವಾಡಗಳನ್ನು ಕೋರಿದ ಫರಿಸಾಯರು
(ಮತ್ತಾ. 12.38-39; 16.1-4; ಲೂಕ 11.29-32)
11 : ಫರಿಸಾಯರು ಯೇಸುಸ್ವಾಮಿಯ ಬಳಿಗೆ ಬಂದು, ಅವರೊಡನೆ ತರ್ಕಮಾಡಿ, ಅವರನ್ನು ಪರೀಕ್ಷಿಸುವ ಉದ್ದೇಶದಿಂದ: “ನೀನು ದೇವರಿಂದ ಬಂದವನೆಂಬುದನ್ನು ಸೂಚಿಸಲು ಒಂದು ಅದ್ಭುತವನ್ನು ಮಾಡಿತೋರಿಸು,” ಎಂದು ಕೇಳಿದರು.
12 : ಇದನ್ನು ಕೇಳಿ ಯೇಸು, ಮನಸ್ಸಿನಲ್ಲೇ ನೊಂದುಕೊಂಡು, ನಿಟ್ಟುಸಿರಿಟ್ಟು, “ಈ ಪೀಳಿಗೆ ಅದ್ಭುತವನ್ನು ಸಂಕೇತವಾಗಿ ಅಪೇಕ್ಷಿಸುವುದೇಕೆ? ಇದಕ್ಕೆ ಅಂಥ ಯಾವ ಸಂಕೇತವನ್ನು ಕೊಡಲಾಗದು, ಇದು ಖಂಡಿತ,” ಎಂದರು.
13 : ಅನಂತರ ಯೇಸು ಅವರನ್ನು ಬಿಟ್ಟು, ದೋಣಿಯನ್ನು ಹತ್ತಿ ಸರೋವರದ ಆಚೆದಡಕ್ಕೆ ಹೊರಟುಹೋದರು.
ದುರ್ಬೋಧಕರಿಂದ ದೂರವಿರಿ
(ಮತ್ತಾ. 16.5-12; ಲೂಕ 12.1)
14 : ಶಿಷ್ಯರು ಬುತ್ತಿಯನ್ನು ಕಟ್ಟಿಕೊಳ್ಳಲು ಮರೆತಿದ್ದರು. ದೋಣಿಯಲ್ಲಿ ಒಂದೇ ಒಂದು ರೊಟ್ಟಿಯಿತ್ತು.
15 : ಯೇಸುಸ್ವಾಮಿ ಅವರಿಗೆ, “ಎಚ್ಚರಿಕೆ, ಫರಿಸಾಯರ ಹಾಗೂ ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ,” ಎಂದು ಹೇಳಿದರು.
16 : ಇದನ್ನು ಕೇಳಿದ ಶಿಷ್ಯರು, “ನಮ್ಮಲ್ಲಿ ರೊಟ್ಟಿಯಿಲ್ಲದ್ದರಿಂದ ಹೀಗೆ ಹೇಳುತ್ತಿರಬಹುದೇ” ಎಂದು ಚರ್ಚಿಸತೊಡಗಿದರು.
17 : ಆ ಚರ್ಚೆಯನ್ನು ಯೇಸು ಗಮನಿಸಿ “ರೊಟ್ಟಿ ಇಲ್ಲವೆಂದು ಚರ್ಚೆ ಏಕೆ? ನಿಮಗೆ ಇನ್ನೂ ಅರಿವಾಗಲಿ, ಗ್ರಹಿಕೆಯಾಗಲಿ ಇಲ್ಲವೇ? ನೀವಿನ್ನೂ ಮಂದಮತಿಗಳಾಗಿರುವಿರೋ?
18 : ಕಿವಿಗಳಿದ್ದೂ ಕೇಳಲಾರಿರಾ? ಕಣ್ಣುಗಳಿದ್ದೂ ನೋಡಲಾರಿರಾ?
19 : ನಾನು ಐದು ರೊಟ್ಟಿಗಳಿಂದ ಐದುಸಾವಿರ ಜನರನ್ನು ತೃಪ್ತಿಪಡಿಸಿದಾಗ ಉಳಿದ ರೊಟ್ಟಿಯ ತುಂಡುಗಳನ್ನು ಎಷ್ಟು ಬುಟ್ಟಿ ತುಂಬಾ ಒಟ್ಟುಗೂಡಿಸಿದಿರಿ? ನಿಮಗೆ ಜ್ಞಾಪಕವಿಲ್ಲವೇ?” ಎಂದು ಕೇಳಿದರು. “ಹನ್ನೆರಡು ಬುಟ್ಟಿಗಳು” ಎಂದು ಅವರು ಉತ್ತರವಿತ್ತರು.
20 : “ಅಲ್ಲದೆ ನಾನು ಏಳು ರೊಟ್ಟಿಗಳಿಂದ ನಾಲ್ಕುಸಾವಿರ ಜನರನ್ನು ತೃಪ್ತಿಪಡಿಸಿದಾಗ ಎಷ್ಟು ಕುಕ್ಕೆತುಂಬಾ ರೊಟ್ಟಿಯ ತುಂಡುಗಳನ್ನು ಒಟ್ಟುಗೂಡಿಸಿದಿರಿ?” ಎಂದು ಪುನಃ ಅವರನ್ನು ಕೇಳಲು, “ಏಳು ಕುಕ್ಕೆಗಳು,” ಎಂದರು.
21 : ಆಗ ಯೇಸು, “ಇಷ್ಟಾದರೂ ನಿಮಗಿನ್ನೂ ತಿಳುವಳಿಕೆ ಇಲ್ಲವೆ?” ಎಂದರು.
ಬೆತ್ಸಾಯಿದದ ಕುರುಡನಿಗೆ ದೃಷ್ಟಿದಾನ
22 : ಯೇಸುಸ್ವಾಮಿ ಮತ್ತು ಅವರ ಶಿಷ್ಯರು ಬೆತ್ಸಾಯಿದಕ್ಕೆ ಬಂದರು. ಕೆಲವರು ಯೇಸುವಿನ ಬಳಿಗೆ ಕುರುಡನೊಬ್ಬನನ್ನು ಕರೆತಂದು ಅವನನ್ನು ಮುಟ್ಟಬೇಕೆಂದು ಬೇಡಿಕೊಂಡರು.
23 : ಯೇಸು ಕುರುಡನ ಕೈಹಿಡಿದು, ಅವನನ್ನು ಊರ ಹೊರಗೆ ಕರೆದೊಯ್ದರು. ಅವನ ಮೇಲೆ ಕೈಯಿಟ್ಟು, “ನಿನಗೆ ಏನಾದರೂ ಕಾಣುತ್ತಿದೆಯೇ?” ಎಂದು ಕೇಳಿದರು.
24 : ಆಗ ಅವನು ಕಣ್ಣೆತ್ತಿ ನೋಡಿ, “ನನಗೆ ಮನುಷ್ಯರು ಮರಗಳಂತೆ ಕಾಣಿಸುತ್ತಾರೆ. ಆದರೂ ಅವರು ನಡೆದಾಡುತ್ತಿದ್ದಾರೆ,” ಎಂದನು.
25 : ಯೇಸು ಪುನಃ ಅವನ ಕಣ್ಣುಗಳ ಮೇಲೆ ಕೈಯಿಟ್ಟರು. ಅವನು ಕಣ್ಣರಳಿಸಿ ನೋಡಿದಾಗ ಪೂರ್ಣ ದೃಷ್ಟಿಯನ್ನು ಹೊಂದಿದ್ದನು. ಎಲ್ಲವೂ ಅವನಿಗೆ ಸ್ಪಷ್ಟವಾಗಿ ಕಾಣಿಸಿತು.
26 : ಅನಂತರ ಯೇಸು, “ನೀನು ಊರೊಳಗೆ ಹೋಗುವುದೇ ಬೇಡ,” ಎಂದು ಅವನಿಗೆ ಆಜ್ಞಾಪಿಸಿ, ಮನೆಗೆ ಕಳುಹಿಸಿಬಿಟ್ಟರು.
ಪೇತ್ರನ ವಿಶ್ವಾಸ ಪ್ರಕಟಣೆ
(ಮತ್ತಾ. 16.13-20; ಲೂಕ 9.18-21)
27 : ಯೇಸುಸ್ವಾಮಿ ತಮ್ಮ ಶಿಷ್ಯರ ಸಂಗಡ ಫಿಲಿಪ್ಪನ ಸೆಜರೇಯ ಎಂಬ ಪಟ್ಟಣದ ಪಕ್ಕದಲ್ಲಿರುವ ಹಳ್ಳಿಗಳಿಗೆ ಪ್ರಯಾಣ ಬೆಳೆಸಿದರು. ದಾರಿಯಲ್ಲಿ, “ಜನರು ನನ್ನನ್ನು ಯಾರೆಂದು ಹೇಳುತ್ತಾರೆ?” ಎಂದು ಶಿಷ್ಯರನ್ನು ಕೇಳಿದರು.
28 : ಅದಕ್ಕೆ ಶಿಷ್ಯರು, “ಕೆಲವರು ತಮ್ಮನ್ನು ‘ಸ್ನಾನಿಕ ಯೊವಾನ್ನ’ ಎನ್ನುತ್ತಾರೆ. ಇನ್ನು ಕೆಲವರು ‘ಎಲೀಯನು,’ ಮತ್ತೆ ಕೆಲವರು ಪ್ರವಾದಿಗಳಲ್ಲಿ ತಾವೂ ಒಬ್ಬರು ಎನ್ನುತ್ತಾರೆ,” ಎಂದರು.
29 : ಆಗ ಯೇಸು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಪ್ರಶ್ನಿಸಿದರು. ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ” ಎಂದು ಉತ್ತರವಿತ್ತನು.
30 : ಆಗ ಯೇಸು, “ಈ ವಿಷಯವನ್ನು ಯಾರಿಗೂ ತಿಳಿಸಬೇಡಿ,” ಎಂದು ತಮ್ಮ ಶಿಷ್ಯರಿಗೆ ಕಟ್ಟಪ್ಪಣೆ ಮಾಡಿದರು.
ಯೇಸುವಿನ ಮರಣ ಮತ್ತು ಪುನರುತ್ಥಾನದ ಪ್ರಕಟಣೆ
(ಮತ್ತಾ. 16.21-28; ಲೂಕ 9.22-27)
31 : ಈ ಘಟನೆಯ ಬಳಿಕ ಯೇಸುಸ್ವಾಮಿ, “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾಪ್ರಮುಖರಿಂದಲೂ ಪ್ರಧಾನ ಯಾಜಕರಿಂದಲೂ ಧರ್ಮಶಾಸ್ತ್ರಿ ಗಳಿಂದಲೂ ಆತನು ತಿರಸ್ಕøತನಾಗಿ ಕೊಲ್ಲಲ್ಪಡುವನು; ಆದರೆ ಮೂರನೇ ದಿನ ಪುನರುತ್ಥಾನ ಹೊಂದುವನು,” ಎಂದು ತಮ್ಮ ಶಿಷ್ಯರಿಗೆ ಮುಚ್ಚು ಮರೆಯಿಲ್ಲದೆ ಬೋಧಿಸಲಾರಂಭಿಸಿದರು.
32 : ಇದನ್ನು ಕೇಳಲಾಗದೇ ಪೇತ್ರನು ಅವರನ್ನು ಪ್ರತ್ಯೇಕವಾಗಿ ಕರೆದು, “ತಾವು ಹೀಗೆಲ್ಲಾ ಹೇಳಬಾರದು,” ಎಂದು ಪ್ರತಿಭಟಿಸಿದನು.
33 : ಆಗ ಯೇಸು ಹಿಂದಕ್ಕೆ ತಿರುಗಿ, ತಮ್ಮ ಶಿಷ್ಯರನ್ನು ನೋಡಿ, ಪೇತ್ರನನ್ನು ಗದರಿಸುತ್ತಾ, “ಸೈತಾನನೇ, ತೊಲಗು ಇಲ್ಲಿಂದ; ನಿನ್ನ ಈ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ,” ಎಂದರು.
ಸಾವಿನಿಂದ ಜೀವಕ್ಕೆ
(ಮತ್ತಾ. 16.24-28; ಲೂಕ 9.23-27)
34 : ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರನ್ನೂ ಜನರ ಗುಂಪನ್ನೂ ಒಟ್ಟಾಗಿ ತಮ್ಮ ಬಳಿಗೆ ಕರೆದು, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ, ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;
35 : ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ಹಾಗೂ ಶುಭಸಂದೇಶದ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ನಿತ್ಯಕ್ಕೂ ಉಳಿಸಿಕೊಳ್ಳುವನು.
36 : ಒಬ್ಬನು ಪ್ರಪಂಚವನ್ನೆಲ್ಲಾ ಗೆದ್ದು, ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಬರುವ ಲಾಭವಾದರೂ ಏನು?
37 : ಮನುಷ್ಯನು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು?
38 : ದೈವನಿಷ್ಠೆಯಿಲ್ಲದ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆ ಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ ತನ್ನ ಪಿತನ ಪ್ರಭಾವದೊಡನೆ ದೇವದೂತರ ಪರಿವಾರ ಸಮೇತನಾಗಿ ಬರುವಾಗ, ನಾಚಿಕೆ ಪಡುವನು,” ಎಂದರು.