1 : ಇದಾದ ಮೇಲೆ, ಯೇಸುಸ್ವಾಮಿ ಇನ್ನೂ ಎಪ್ಪತ್ತೆರಡು ಮಂದಿಯನ್ನು ನೇಮಿಸಿ ಅವರನ್ನು ಇಬ್ಬಿಬ್ಬರನ್ನಾಗಿ ತಾವೇ ಹೋಗಲಿದ್ದ ಊರುಗಳಿಗೂ ಸ್ಥಳಗಳಿಗೂ ಮುಂದಾಗಿ ಕಳಿಸಿದರು.
2 : ಕಳುಹಿಸುವಾಗ ಅವರಿಗೆ ಹೇಳಿದ್ದೇನೆಂದರೆ, “ಬೆಳೆಯೇನೋ ಹೇರಳವಾಗಿದೆ; ಕೊಯ್ಲುಗಾರರೊ ವಿರಳ. ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಬೇಡಿಕೊಳ್ಳಿ.
3 : ಹೋಗಿರಿ, ತೋಳಗಳ ನಡುವೆ ಕುರಿಮರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ.
4 : ಹಣದ ಚೀಲವನ್ನಾಗಲಿ, ಜೋಳಿಗೆಯನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗದಿರಿ. ದಾರಿಯಲ್ಲಿ ಯಾರಿಗೂ ವಂದನೋಪಚಾರಗಳನ್ನು ಮಾಡಿಕೊಂಡಿರಬೇಡಿ.
5 : ನೀವು ಯಾವ ಮನೆಗೆ ಹೋದರೂ, ‘ಈ ಮನೆಗೆ ಶಾಂತಿ,’ ಎಂದು ಆಶೀರ್ವಾದ ಮಾಡಿ,
6 : ಶಾಂತಿಪ್ರಿಯನು ಅಲ್ಲಿದ್ದರೆ ನಿಮ್ಮ ಆಶೀರ್ವಾದವು ಅವನ ಮೇಲೆ ನೆಲೆಸುವುದು. ಇಲ್ಲವಾದರೆ, ಅದು ನಿಮಗೆ ಹಿಂದಿರುಗುವುದು.
7 : ಮನೆಯಿಂದ ಮನೆಗೆ ಹೋಗದೆ ಆ ಮನೆಯಲ್ಲೇ ತಂಗಿದ್ದು, ಅಲ್ಲಿಯವರು ಕೊಡುವ ಅನ್ನಪಾನೀಯಗಳನ್ನು ಸೇವಿಸಿರಿ. ದುಡಿಮೆಗಾರನು ಕೂಲಿಗೆ ಬಾಧ್ಯನು.
8 : “ನೀವು ಯಾವ ಊರಿಗೆ ಹೋದರೂ ಜನರು ನಿಮ್ಮನ್ನು ಸ್ವಾಗತಿಸಿದಾಗ, ಅವರು ಬಡಿಸಿದ್ದನ್ನು ಭುಜಿಸಿರಿ.
9 : ಅಲ್ಲಿರುವ ರೋಗಿಗಳನ್ನು ಗುಣಪಡಿಸಿರಿ. ‘ದೇವರ ಸಾಮ್ರಾಜ್ಯ ನಿಮ್ಮನ್ನು ಸಮೀಪಿಸಿದೆ,’ ಎಂದು ತಿಳಿಸಿರಿ.
10 : ಆದರೆ ನೀವು ಹೋಗುವ ಊರಿನ ಜನರು ನಿಮ್ಮನ್ನು ಸ್ವಾಗತಿಸದೆ ಹೋದರೆ, ರಸ್ತೆಗಳಿಗೆ ಹೋಗಿ,
11 : ‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮಗೆ ವಿರುದ್ಧವಾಗಿ ಒದರಿಬಿಡುತ್ತೇವೆ. ಆದರೂ ದೇವರ ಸಾಮ್ರಾಜ್ಯ ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ,’ ಎಂದು ತಿಳಿಸಿರಿ.
12 : ತೀರ್ಪಿನ ದಿನ ಈ ಊರಿನ ಗತಿ ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವುದೆಂದು ನಾನು ನಿಮಗೆ ಹೇಳುತ್ತೇನೆ.
ಅವಿಶ್ವಾಸಿಗಳ ಅಧೋಗತಿ
(ಮತ್ತಾ. 11.20-24)
13 : “ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಭುತ ಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗುತ್ತಿದ್ದರು.
14 : ಆದುದರಿಂದ ತೀರ್ಪಿನ ದಿನ ಟೈರ್ ಮತ್ತು ಸಿದೋನಿನ ಗತಿಯು ನಿಮಗಿಂತಲೂ ಸಹನೀಯವಾಗಿರುವುದು.
15 : ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತಿಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ,” ಎಂದರು ಯೇಸುಸ್ವಾಮಿ.
16 : ಅನಂತರ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮನ್ನು ಆಲಿಸುವವನು ನನ್ನನ್ನೇ ಆಲಿಸುತ್ತಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನೇ ಅಲಕ್ಷ್ಯಮಾಡುತ್ತಾನೆ; ನನ್ನನ್ನು ಅಲಕ್ಷ್ಯಮಾಡುವವನಾದರೋ ನನ್ನನ್ನು ಕಳುಹಿಸಿದಾತನನ್ನೇ ಅಲಕ್ಷ್ಯ ಮಾಡುತ್ತಾನೆ,” ಎಂದರು.
17 : ಕಳುಹಿಸಲಾಗಿದ್ದ ಎಪ್ಪತ್ತೆರಡು ಮಂದಿ ಸಂತೋಷಭರಿತರಾಗಿ ಹಿಂದಿರುಗಿ ಬಂದು, “ಸ್ವಾವಿೂ, ನಿಮ್ಮ ಹೆಸರಿನಲ್ಲಿ ಆಜ್ಞೆಮಾಡಿದಾಗ ದೆವ್ವಗಳು ಕೂಡ ನಮಗೆ ಅಧೀನವಾಗುತ್ತವೆ,” ಎಂದು ವರದಿ ಮಾಡಿದರು.
18 : ಅದಕ್ಕೆ ಯೇಸು, “ಸೈತಾನನು ಆಕಾಶದಿಂದ ಸಿಡಿಲಿನಂತೆ ಬೀಳುವುದನ್ನು ಕಂಡೆನು.
19 : ಇಗೋ, ಸರ್ಪಗಳನ್ನು ಹಾಗೂ ಚೇಳುಗಳನ್ನು ತುಳಿಯುವುದಕ್ಕೂ ಶತ್ರುವಿನ ಸಮಸ್ತ ಶಕ್ತಿಯನ್ನು ಜಯಿಸುವುದಕ್ಕೂ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯವುದೂ ನಿಮಗೆ ಹಾನಿಮಾಡದು.
20 : ಆದರೂ ದೆವ್ವಗಳು ನಿಮಗೆ ಅಧೀನವಾಗಿವೆಯೆಂದು ಸಂತೋಷಪಡುವುದಕ್ಕಿಂತ ನಿಮ್ಮ ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿವೆ ಎಂದು ಸಂತೋಷಪಡಿ,” ಎಂದು ಹೇಳಿದರು.
ಯೇಸುವಿನ ಸಂತಸ
(ಮತ್ತಾ. 11.25-27, 13.16-17)
21 : ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.
22 : ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ ಅವರೇ ಹೊರತು ಮತ್ತಾರೂ ಅರಿಯರು,” ಎಂದು ಹೇಳಿದರು.
23 : ಅನಂತರ ಯೇಸು ಶಿಷ್ಯರ ಕಡೆ ತಿರುಗಿ, ಅವರಿಗೆ ಪ್ರತ್ಯೇಕವಾಗಿ, “ನೀವು ಕಾಣುವುದನ್ನು ಕಾಣುವ ಕಣ್ಣುಗಳು ಭಾಗ್ಯವುಳ್ಳವು.
24 : ಏಕೆಂದರೆ, ಎಷ್ಟೋ ಪ್ರವಾದಿಗಳು ಹಾಗೂ ಅರಸರು ನೀವು ನೋಡುವುದನ್ನು ನೋಡುವುದಕ್ಕೂ, ನೀವು ಕೇಳುವುದನ್ನು ಕೇಳುವುದಕ್ಕೂ ಆಶಿಸಿದರು. ಆದರೂ ಅದನ್ನು ಅವರು ನೋಡಲೂ ಇಲ್ಲ, ಕೇಳಲೂ ಇಲ್ಲ ಎಂದು ನಿಮಗೆ ಹೇಳುತ್ತೇನೆ,” ಎಂದರು.
ಸದಯ ಸಮಾರಿತನ ಸಾಮತಿ
25 : ಒಬ್ಬ ಶಾಸ್ತ್ರಜ್ಞನು ಎದ್ದು ಯೇಸುಸ್ವಾಮಿಯನ್ನು ಪರೀಕ್ಷಿಸುವ ಉದ್ದೇಶದಿಂದ “ಬೋಧಕರೇ, ಅಮರಜೀವ ನನಗೆ ಪ್ರಾಪ್ತಿ ಆಗಬೇಕಾದರೆ ನಾನು ಮಾಡಬೇಕಾದುದು ಏನು?” ಎಂದು ಕೇಳಿದನು.
26 : ಅದಕ್ಕೆ ಯೇಸು, “ಧರ್ಮಶಾಸ್ತ್ರದಲ್ಲಿ ಏನು ಬರೆದಿದೆ? ಹೇಗೆ ಪಠಿಸುತ್ತೀಯೆ?” ಎಂದು ಮರುಪ್ರಶ್ನೆ ಹಾಕಿದರು.
27 : ಅವನು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು ಮತ್ತು ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು’ ಎಂದಿದೆ,” ಎಂದು ಉತ್ತರಕೊಟ್ಟನು.
28 : ಯೇಸು, “ಸರಿಯಾಗಿ ಉತ್ತರಕೊಟ್ಟೆ. ಅದರಂತೆ ಮಾಡು. ನಿನಗೆ ಅಮರಜೀವ ಲಭಿಸುವುದು,” ಎಂದನು.
29 : ಆದರೆ ಆ ಶಾಸ್ತ್ರಜ್ಞನು ತನ್ನನ್ನು ತಾನೇ ಸಮರ್ಥಿಸಿಕೊಳ್ಳಲು, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಮತ್ತೆ ಪ್ರಶ್ನಿಸಿದನು.
30 : ಯೇಸು ಅವನಿಗೆ ಹೀಗೆಂದು ವಿವರಿಸಿದರು:
“ಒಬ್ಬನು ಜೆರುಸಲೇಮಿನಿಂದ ಇಳಿದು ಜೆರಿಕೋವಿಗೆ ಪ್ರಯಾಣ ಮಾಡುತ್ತಿದ್ದಾಗ, ದರೋಡೆಗಾರರ ಕೈಗೆ ಸಿಕ್ಕಿಬಿದ್ದ. ದರೋಡೆಗಾರರು ಅವನನ್ನು ಸುಲಿಗೆ ಮಾಡಿ, ಹೊಡೆದು ಬಡಿದು, ಅರೆಜೀವ ಮಾಡಿ, ಅಲ್ಲೇ ಬಿಟ್ಟುಹೋದರು.
31 : ಅದೇ ಮಾರ್ಗವಾಗಿ ಒಬ್ಬ ಯಾಜಕನು ಹಾದು ಹೋಗಬೇಕಾಗಿ ಬಂದಿತು. ಈತನು, ಅವನನ್ನು ಕಂಡದ್ದೇ ಆಚೆ ಬಳಸಿಕೊಂಡು ಹೋದ.
32 : ಹಾಗೆಯೇ ಲೇವಿಯೊಬ್ಬನು ಆ ಸ್ಥಳಕ್ಕೆ ಬಂದು ಅವನನ್ನು ನೋಡಿ, ಹಾಗೆಯೇ ಬಳಸಿಕೊಂಡು ಹೋದ.
33 : ಆದರೆ ಆ ಮಾರ್ಗವಾಗಿ ಪ್ರಯಾಣ ಮಾಡುತ್ತಿದ್ದ ಒಬ್ಬ ಸಮಾರಿಯದವನು ಅಲ್ಲಿಗೆ ಬಂದಾಗ, ಅವನನ್ನು ಕಂಡು ಕನಿಕರಪಟ್ಟ.
34 : ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹಚ್ಚಿ ಅವುಗಳಿಗೆ ಬಟ್ಟೆ ಕಟ್ಟಿದ. ಬಳಿಕ ಅವನನ್ನು ತನ್ನ ಸ್ವಂತ ವಾಹಕಪಶುವಿನ ಮೇಲೆ ಹತ್ತಿಸಿಕೊಂಡು ಒಂದು ಛತ್ರಕ್ಕೆ ಕರೆದುಕೊಂಡು ಹೋಗಿ, ಆರೈಕೆ ಮಾಡಿದ.
35 : ಮಾರನೆಯ ದಿನ ಎರಡು ದಿನಾರಿ ನಾಣ್ಯಗಳನ್ನು ಛತ್ರದವನಿಗೆ ಕೊಟ್ಟು, ‘ಇವನನ್ನು ಚೆನ್ನಾಗಿ ನೋಡಿಕೊ, ಇದಕ್ಕಿಂತ ಹೆಚ್ಚು ವೆಚ್ಚ ಆದರೆ ನಾನು ಹಿಂದಿರುಗಿ ಬರುವಾಗ ಸಲ್ಲಿಸುತ್ತೇನೆ,’ ಎಂದ.
36 : “ದರೋಡೆಗಾರರ ಕೈಗೆ ಸಿಕ್ಕಿದವನಿಗೆ ಈ ಮೂವರಲ್ಲಿ ಯಾರು ನೆರೆಯವನೆಂದು ನಿನಗೆ ತೋರುತ್ತದೆ?” ಎಂದು ಯೇಸು ಆ ಶಾಸ್ತ್ರಜ್ಞನನ್ನು ಕೇಳಿದರು.
37 : ದಕ್ಕೆ ಅವನು, “ದಯೆ ತೋರಿದವನೇ ನೆರೆಯವನು,” ಎಂದನು. ಆಗ ಯೇಸು, “ಹೋಗು, ನೀನೂ ಹಾಗೆಯೇ ಮಾಡು,” ಎಂದು ಹೇಳಿದರು.
ಸೇವಾಸಕ್ತ ಮಾರ್ತಳು - ಧ್ಯಾನಾಸಕ್ತ ಮರಿಯಳು
38 : ಯೇಸುಸ್ವಾಮಿ ತಮ್ಮ ಶಿಷ್ಯರೊಡನೆ ಪ್ರಯಾಣ ಮುಂದುವರಿಸಿ ಒಂದು ಹಳ್ಳಿಗೆ ಬಂದರು. ಅಲ್ಲಿ ಮಾರ್ತಳೆಂಬ ಮಹಿಳೆ ಅವರನ್ನು ತಮ್ಮ ಮನೆಗೆ ಆಮಂತ್ರಿಸಿದಳು.
39 : ಆಕೆಗೆ ಮರಿಯಳೆಂಬ ಸೋದರಿ ಇದ್ದಳು. ಈಕೆ ಪ್ರಭುವಿನ ಪಾದತಳದಲ್ಲಿ ಕುಳಿತುಕೊಂಡು ಅವರ ಬೋಧನೆಯನ್ನು ಆಲಿಸುತ್ತಿದ್ದಳು.
40 : ಮಾರ್ತಳಾದರೋ, ಅತಿಥಿಸತ್ಕಾರದ ಗಡಿಬಿಡಿಯಲ್ಲಿ ಇದ್ದಳು. ಅವಳು ಬಂದು, “ಪ್ರಭೂ, ನನ್ನ ಸೋದರಿ ಈ ಕೆಲಸವನ್ನೆಲ್ಲಾ ನನ್ನೊಬ್ಬಳಿಗೇ ಬಿಟ್ಟಿದ್ದಾಳೆ. ನೀವಿದನ್ನು ಗಮನಿಸಬಾರದೇ? ನನಗೆ ಸಹಾಯ ಮಾಡುವಂತೆ ಅವಳಿಗೆ ಹೇಳಿ,” ಎಂದಳು.
41 : ಯೇಸು ಆಕೆಗೆ ಪ್ರತ್ಯುತ್ತರವಾಗಿ, “ಮಾರ್ತಾ, ಮಾರ್ತಾ, ನೀನು ಅನಾವಶ್ಯ ಚಿಂತೆ ಪೇಚಾಟಗಳಿಗೆ ಒಳಗಾಗಿರುವೆ. ಆದರೆ ಅಗತ್ಯವಾದುದು ಒಂದೇ. ಮರಿಯಳು ಉತ್ತಮವಾದುದನ್ನೇ ಆರಿಸಿಕೊಂಡಿದ್ದಾಳೆ. ಅದನ್ನು ಆಕೆಯಿಂದ ಕಸಿದುಕೊಳ್ಳಲಾಗದು,” ಎಂದರು.
ಸ್ವಾಮಿ ಕಲಿಸಿಕೊಟ್ಟ ಪ್ರಾರ್ಥನೆ
(ಮತ್ತಾ. 6.9-13, 7.7-11)