1 : ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ ಇಂತೆಂದರು: “ಒಬ್ಬ ಧನಿಕನಿದ್ದ. ಅವನ ವ್ಯವಹಾರವನ್ನು ನೋಡಿಕೊಳ್ಳಲು ಒಬ್ಬ ಮೇಸ್ತ್ರಿಯಿದ್ದ. ಇವನು ಧನಿಕನ ಆಸ್ತಿಯನ್ನು ಹಾಳುಮಾಡುತ್ತಿದ್ದಾನೆಂದು ದೂರು ಬಂದಿತು.
2 : ಧನಿಕನು ಅವನನ್ನು ಕರೆದು, ‘ಏನಿದು, ನಿನ್ನ ವಿಷಯವಾಗಿ ನಾನು ಹೀಗೆಲ್ಲ ಕೇಳುತ್ತಾ ಇದ್ದೇನೆ? ನಿನ್ನ ಕೆಲಸದ ಲೆಕ್ಕಾಚಾರವನ್ನು ಒಪ್ಪಿಸಿಬಿಡು. ಇನ್ನು ನೀನು ಮೇಸ್ತ್ರಿ ಆಗಿರಲು ಆಗದು,’ ಎಂದ.
3 : ಆಗ ಮೇಸ್ತ್ರಿ, ‘ಈಗ ಏನು ಮಾಡಲಿ? ಯಜಮಾನನು ನನ್ನನ್ನು ಕೆಲಸದಿಂದ ತೆಗೆದು ಬಿಡುತ್ತಾನಲ್ಲಾ; ಅಗೆಯಲು ಶಕ್ತಿ ಸಾಲದು; ಭಿಕ್ಷೆ ಬೇಡಲು ನನಗೆ ನಾಚಿಕೆ,’ ಎಂದು ಚಿಂತಾಕ್ರಾಂತನಾದ.
4 : ಮರುಕ್ಷಣ, ‘ಸರಿ, ಕೆಲಸದಿಂದ ನನ್ನನ್ನು ತೆಗೆದುಹಾಕಿದ ಮೇಲೆ ಜನರು ನನ್ನನ್ನು ತಮ್ಮ ಮನೆಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ಈಗ ಗೊತ್ತಾಯಿತು,’ ಎಂದುಕೊಂಡ.
5 : ಯಜಮಾನನ ಸಾಲಗಾರರನ್ನು ಒಬ್ಬೊಬ್ಬರನ್ನಾಗಿ ಬರಮಾಡಿಕೊಂಡು, ‘ನೀನು ನನ್ನ ಯಜಮಾನನಿಗೆ ತೀರಿಸಬೇಕಾದ ಸಾಲ ಎಷ್ಟು?’ ಎಂದು ಮೊದಲನೆಯವನನ್ನು ಕೇಳಿದ.
6 : ಅವನು, ‘ನೂರು ಬುದ್ದಲಿ ಎಣ್ಣೆ,’ ಎಂದ. ಅದಕ್ಕೆ ಮೇಸ್ತ್ರಿ, ‘ಇಗೋ, ನಿನ್ನ ಪತ್ರ, ಕುಳಿತುಕೊಂಡು “ಐವತ್ತು” ಎಂದು ಬೇಗನೆ ಬರೆ,’ ಎಂದ.
7 : ಬಳಿಕ ಇನ್ನೊಬ್ಬನನ್ನು ಕರೆದು, ‘ನೀನೆಷ್ಟು ಸಾಲ ತೀರಿಸಬೇಕು?’ ಎಂದು ಕೇಳಿದ. ಅವನು ‘ನೂರು ಖಂಡುಗ ಗೋದಿ’ ಎಂದಾಗ ‘ಇಗೋ ನಿನ್ನ ಪತ್ರ, “ಎಂಬತ್ತು” ಎಂದು ಬರೆ’, ಎಂದ.
8 : “ಈ ಅಪ್ರಾಮಾಣಿಕ ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಸಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು.
9 : ನಾನು ಹೇಳುವುದನ್ನು ಗಮನಿಸಿರಿ; ಲೌಕಿಕ ಆಸ್ತಿಪಾಸ್ತಿಯಿಂದ ಗೆಳೆಯರನ್ನು ಗಳಿಸಿಕೊಳ್ಳಿರಿ. ಅದು ವ್ಯಯವಾಗಿ ಹೋದಾಗ ನಿಮ್ಮನ್ನು ಅಮರ ನಿವಾಸಕ್ಕೆ ಸ್ವಾಗತಿಸಲಾಗುವುದು.
10 : ಸಣ್ಣ ವಿಷಯಗಳಲ್ಲಿ ಪ್ರಾಮಾಣಿಕನಾಗಿ ನಡೆದುಕೊಳ್ಳುವವನು ದೊಡ್ಡ ವಿಷಯಗಳಲ್ಲೂ ಪ್ರಾಮಾಣಿಕನಾಗಿ ನಡೆದುಕೊಳ್ಳುತ್ತಾನೆ. ಸಣ್ಣ ವಿಷಯಗಳಲ್ಲಿ ದ್ರೋಹ ಮಾಡುವವನು ದೊಡ್ಡ ವಿಷಯಗಳಲ್ಲೂ ದ್ರೋಹ ಮಾಡುತ್ತಾನೆ.
11 : ಲೌಕಿಕ ಆಸ್ತಿಪಾಸ್ತಿಗಳ ವಿಷಯದಲ್ಲಿ ನೀವು ಪ್ರಾಮಾಣಿಕರಾಗಿ ನಡೆದುಕೊಳ್ಳದೆ ಹೋದರೆ, ನಿಮ್ಮನ್ನು ನಂಬಿ ನೈಜ ಸಂಪತ್ತನ್ನು ನಿಮ್ಮ ವಶಕ್ಕೆ ಕೊಡುವವರಾರು?
12 : ಇನ್ನೊಬ್ಬರಿಗೆ ಸೇರಿದ ವಸ್ತುಗಳ ವಿಷಯದಲ್ಲಿ ನೀವು ಪ್ರಾಮಾಣಿಕರಾಗಿ ನಡೆದುಕೊಳ್ಳದೆ ಹೋದರೆ, ನಿಮ್ಮ ಸ್ವಂತಕ್ಕೆ ಏನನ್ನಾದರೂ ಕೊಡುವವರಾರು?
13 : “ಯಾವನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾಗದು; ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು,” ಎಂದರು.
14 : ಹಣದಾಶೆಯಿಂದ ಕೂಡಿದ್ದ ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ, ಯೇಸುವನ್ನು ಪರಿಹಾಸ್ಯಮಾಡಿದರು.
15 : ಅದಕ್ಕೆ ಯೇಸು, “ನೀವು ಮಾನವರ ಮುಂದೆ ಸತ್ಪುರುಷರೆಂದು ತೋರಿಸಿಕೊಳ್ಳುತ್ತೀರಿ; ದೇವರಾದರೋ ನಿಮ್ಮ ಅಂತರಂಗವನ್ನು ಅರಿತಿದ್ದಾರೆ. ಮಾನವರಿಗೆ ಅಮೂಲ್ಯವಾದುದು ದೇವರಿಗೆ ಅಸಹ್ಯವಾದುದು,” ಎಂದರು.
ಯೇಸುವಿನ ಕೆಲವು ಗಮನಾರ್ಹ ವಚನಗಳು
(ಮತ್ತಾ. 11.12-13, 5.31-32; ಮಾರ್ಕ 10.11-12)
16 : “ಧರ್ಮಶಾಸ್ತ್ರ ಹಾಗೂ ಪ್ರವಾದನೆಗಳ ಪರಿಣಾಮ ಯೊವಾನ್ನನ ಕಾಲದವರೆಗೆ ಮಾತ್ರ. ಅನಂತರ ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಸಾರಲಾಗುತ್ತಿದೆ. ಸರ್ವರೂ ಈ ರಾಜ್ಯದೊಳಕ್ಕೆ ಒತ್ತರಿಸಿಕೊಂಡು ನುಗ್ಗುತ್ತಿದ್ದಾರೆ.
17 : “ಭೂಮ್ಯಕಾಶಗಳು ಅಳಿದು ಹೋಗಬಹುದು. ಆದರೆ ಧರ್ಮಶಾಸ್ತ್ರದಲ್ಲಿನ ಒಂದು ಚುಕ್ಕೆಯೂ ನಿರರ್ಥಕವಾಗದು.
18 : “ಹೆಂಡತಿಯನ್ನು ಬಿಟ್ಟುಬಿಟ್ಟು ಬೇರೊಬ್ಬಳನ್ನು ಮದುವೆಯಾಗುವ ಪ್ರತಿಯೊಬ್ಬನೂ ವ್ಯಭಿಚಾರಿಯಾಗುತ್ತಾನೆ. ಅಂತೆಯೇ, ಗಂಡಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರಿಯಾಗುತ್ತಾನೆ.
ಭೋಗಿ ಮತ್ತು ಭಿಕಾರಿ
19 : “ಒಬ್ಬ ಧನಿಕನಿದ್ದ. ಬೆಲೆಬಾಳುವ ಉಡುಗೆ-ತೊಡುಗೆಗಳನ್ನೂ ನಯವಾದ ನಾರುಮಡಿಗಳನ್ನೂ ಧರಿಸಿಕೊಂಡು ದಿನನಿತ್ಯವೂ ಸುಖಭೋಗಗಳಲ್ಲಿ ಮೈಮರೆಯುತ್ತಿದ್ದ.
20 : ಅವನ ಮನೆಯ ಬಾಗಿಲಲ್ಲೇ ಲಾಜರನೆಂಬ ಒಬ್ಬ ಭಿಕಾರಿ ಬಿದ್ದಿರುತ್ತಿದ್ದ. ಅವನ ಮೈಯೆಲ್ಲಾ ಹುಣ್ಣು.
21 : ಧನಿಕನು ತಿಂದು ಬಿಸಾಡಿದ ಎಂಜಲಿನಿಂದ ಹಸಿವು ನೀಗಿಸಿಕೊಳ್ಳಲು ಅವನು ಹಂಬಲಿಸುತ್ತಿದ್ದ. ಅಷ್ಟುಮಾತ್ರವಲ್ಲ, ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.
22 : “ಒಂದು ದಿನ ಆ ಭಿಕಾರಿ ಸತ್ತುಹೋದ. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಸ್ವರ್ಗಸೌಭಾಗ್ಯದಲ್ಲಿದ್ದ ಅಬ್ರಹಾಮನ ಪಕ್ಕದಲ್ಲೇ ಕೂರಿಸಿದರು. ಧನಿಕನು ಕೂಡ ಸತ್ತುಹೋದ. ಅವನ ಶವಸಂಸ್ಕಾರವೂ ಮುಗಿಯಿತು.
23 : ಪಾತಾಳದಲ್ಲಿ ಯಾತನೆಪಡುತ್ತಾ ಅವನು ಕಣ್ಣೆತ್ತಿ ನೋಡಿದಾಗ, ದೂರದಲ್ಲಿ ಅಬ್ರಹಾಮನನ್ನೂ ಅವನ ಪಕ್ಕದಲ್ಲೇ ಕುಳಿತಿದ್ದ ಲಾಜರನನ್ನೂ ಕಂಡ.
24 : ‘ಓ ಪಿತಾಮಹ ಅಬ್ರಹಾಮ, ನನ್ನ ಮೇಲೆ ಕನಿಕರವಿಡು. ಈ ಅಗ್ನಿಜ್ವಾಲೆಯಲ್ಲಿ ಬಾಧೆಪಡುತ್ತಿದ್ದೇನೆ; ಲಾಜರನು ತನ್ನ ತುದಿ ಬೆರಳನ್ನು ತಣ್ಣೀರಿನಲ್ಲಿ ಅದ್ದಿ, ನನ್ನ ನಾಲಗೆಗೆ ತಂಪನ್ನುಂಟುಮಾಡುವಂತೆ ಅವನನ್ನು ಇಲ್ಲಿಗೆ ಕಳುಹಿಸಿಕೊಡು’ ಎಂದು ದನಿಯೆತ್ತಿ ಮೊರೆಯಿಟ್ಟ.
25 : ಅದಕ್ಕೆ ಅಬ್ರಹಾಮನು, ‘ಮಗನೇ, ಜೀವಮಾನದಲ್ಲಿ ಬೇಕಾದಷ್ಟು ಸುಖಸಂಪತ್ತನ್ನು ನೀನು ಅನುಭವಿಸಿದೆ; ಲಾಜರನಾದರೋ ದುಃಖ ದಾರಿದ್ರ್ಯವನ್ನು ಅನುಭವಿಸಿದ ಎಂಬುದನ್ನು ನೆನಪಿಗೆ ತಂದುಕೊ. ಆದರೆ ಈಗ ಅವನು ಇಲ್ಲಿ ಸುಖಪಡುತ್ತಿದ್ದಾನೆ; ನೀನು ಅಲ್ಲಿ ಸಂಕಟಪಡುತ್ತಿರುವೆ.
26 : ಅಷ್ಟೇ ಮಾತ್ರವಲ್ಲ, ನಮಗೂ ನಿಮಗೂ ನಡುವೆ ಅಗಾಧ ಪ್ರಪಾತವು ಚಾಚಿದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಬರಬೇಕೆಂದಿದ್ದರೂ ಬರಲಾಗದು; ಆ ಕಡೆಯಿಂದ ನಮ್ಮ ಬಳಿಗೆ ದಾಟಿಬರಲೂ ಸಾಧ್ಯವಿಲ್ಲ,’ ಎಂದ.
27 : ಆಗ ಆ ಧನಿಕ, ‘ಪಿತಾಮಹ ಅಬ್ರಹಾಮ, ಲಾಜರನನ್ನು ನನ್ನ ತಂದೆಯ ಮನೆಗಾದರೂ ಕಳುಹಿಸು.
28 : ನನಗೆ ಐವರು ಸೋದರರಿದ್ದಾರೆ; ಅವರೂ ಈ ಯಾತನಾಸ್ಥಳಕ್ಕೆ ಬಾರದಂತೆ ಇವನು ಹೋಗಿ ಎಚ್ಚರಿಕೆಕೊಡಲಿ,’ ಎಂದು ಬೇಡಿಕೊಂಡ.
29 : ಅದಕ್ಕೆ ಅಬ್ರಹಾಮನು, ‘ಅವರಿಗೆ ಎಚ್ಚರಿಕೆ ಕೊಡಲು ಮೋಶೆ ಮತ್ತು ಪ್ರವಾದಿಗಳ ಗ್ರಂಥಗಳಿವೆ. ಅವುಗಳಿಗೆ ಕಿವಿಗೊಡಲಿ,’ ಎಂದು ಉತ್ತರಕೊಟ್ಟ.
30 : ‘ಇಲ್ಲ, ಪಿತಾಮಹ ಅಬ್ರಹಾಮ, ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಾಪಕ್ಕೆ ವಿಮುಖರಾಗುವರು,’ ಎಂದು ಧನಿಕನು ಮತ್ತೆ ಕೇಳಿಕೊಂಡ.
31 : ಅದಕ್ಕೆ ಅಬ್ರಹಾಮನು, ‘ಮೋಶೆಗೂ ಪ್ರವಾದಿಗಳಿಗೂ ಅವರು ಕಿವಿಗೊಡದಿದ್ದರೆ, ಸತ್ತವನು ಜೀವಂತನಾಗಿ ಎದ್ದುಬಂದರೂ ಅವರು ನಂಬುವುದಿಲ್ಲ,’ ಎಂದ.”
ಪಾಪಪ್ರಚೋದಕನಿಗೆ ಧಿಕ್ಕಾರ; ಪಶ್ಚಾತ್ತಾಪಕ್ಕೆ ಕ್ಷಮೆ
(ಮತ್ತಾ. 18.6-7, 21-22; ಮಾರ್ಕ 9.42)