1 : “ನಾನೇ ನಿಜವಾದ ದ್ರಾಕ್ಷಾಬಳ್ಳಿ. ನನ್ನ ಪಿತನೇ ತೋಟಗಾರ.
2 : ನನ್ನಲ್ಲಿದ್ದೂ ಫಲಕೊಡದ ಕವಲುಬಳ್ಳಿಗಳನ್ನೆಲ್ಲಾ ಅವರು ಕತ್ತರಿಸಿಹಾಕುವರು. ಫಲಕೊಡುವ ಕವಲುಬಳ್ಳಿಗಳು ಮತ್ತಷ್ಟು ಫಲಕೊಡುವಂತೆ ಅವನ್ನು ಸವರಿ ಶುದ್ಧಗೊಳಿಸುವರು.
3 : ನೀವಾದರೋ, ನಾನು ನಿಮ್ಮೊಡನೆ ಆಡಿದ ಮಾತಿನಿಂದಾಗಿ ಸವರಿದ ಕವಲುಗಳಂತೆ ಶುದ್ಧರಾಗಿದ್ದೀರಿ.
4 : ನೀವು ನನ್ನಲ್ಲಿ ನೆಲೆಗೊಂಡಿರಿ, ಆಗ ನಾನು ನಿಮ್ಮಲ್ಲಿ ನೆಲೆಗೊಂಡಿರುವೆನು. ಕವಲು ಮೂಲಬಳ್ಳಿಯಲ್ಲಿ ಒಂದಾಗಿ ನೆಲಸದಿದ್ದರೆ ತನ್ನಷ್ಟಕ್ಕೆ ತಾನೇ ಫಲಕೊಡಲಾಗದು. ಹಾಗೆಯೇ ನೀವೂ ಕೂಡ ನನ್ನಲ್ಲಿ ಒಂದಾಗಿ ನೆಲಸದಿದ್ದರೆ ಫಲಕೊಡಲಾರಿರಿ.
5 : “ಹೌದು, ನಾನೇ ದ್ರಾಕ್ಷಾಬಳ್ಳಿ; ನೀವೇ ಅದರ ಕವಲುಬಳ್ಳಿಗಳು. ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅಂಥವನು ಸಮೃದ್ಧಿಯಾಗಿ ಫಲಕೊಡುವನು. ಏಕೆಂದರೆ, ನನ್ನಿಂದ ಬೇರ್ಪಟ್ಟು ನಿಮ್ಮಿಂದ ಏನೂ ಮಾಡಲಾಗದು.
6 : ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಅವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟು ಹಾಕಲಾಗುವುದು.
7 : “ನೀವು ನನ್ನಲ್ಲಿಯೂ ನನ್ನ ವಾಕ್ಯವು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನು ಬೇಕಾದರೂ ಕೇಳಬಹುದು. ನಿಮಗದು ಸಿಗುವುದು.
8 : ನೀವು ಸಮೃದ್ಧಿಯಾಗಿ ಫಲಕೊಟ್ಟು ನನ್ನ ಶಿಷ್ಯರಾಗಿ ಬೆಳಗುವುದರಿಂದಲೇ ನನ್ನ ಪಿತನ ಮಹಿಮೆ ಪ್ರಕಟವಾಗುವುದು.
9 : ಪಿತನು ನನ್ನನ್ನು ಪ್ರೀತಿಸಿದಂತೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನನ್ನ ಪ್ರೀತಿಯಲ್ಲಿ ನೆಲೆಗೊಂಡು ನಿಲ್ಲಿರಿ.
10 : ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.
11 : “ನನ್ನಲ್ಲಿರುವ ಆನಂದವು ನಿಮ್ಮಲ್ಲಿ ಇರಬೇಕೆಂತಲೂ ನಿಮ್ಮ ಆನಂದವು ತುಂಬಿ ತುಳುಕಬೇಕೆಂತಲೂ ಇದನ್ನೆಲ್ಲಾ ನಿಮಗೆ ಹೇಳುತ್ತಿದ್ದೇನೆ.
12 : ನಾನು ಕೊಡುವ ಆಜ್ಞೆ ಏನೆಂದರೆ: ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು.
13 : ಗೆಳೆಯರಿಗಾಗಿ ತನ್ನ ಪ್ರಾಣವನ್ನೇ ಧಾರೆಯೆರೆಯುವ ಪ್ರೀತಿಗಿಂತ ಮಿಗಿಲಾದ ಪ್ರೀತಿ ಯಾರಲ್ಲೂ ಇಲ್ಲ.
14 : ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು.
15 : ನಾನಿನ್ನು ನಿಮ್ಮನ್ನು ದಾಸರೆಂದು ಕರೆಯುವುದಿಲ್ಲ. ಧಣಿಯ ಕೆಲಸಕಾರ್ಯಗಳು ದಾಸನಿಗೆ ತಿಳಿಯವು. ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ. ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ.
16 : ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.
17 : ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನಾನು ನಿಮಗೆ ಕೊಡುವ ಆಜ್ಞೆ.
18 : “ಲೋಕವು ನಿಮ್ಮನ್ನು ದ್ವೇಷಿಸಿದರೆ, ನನ್ನ ಮೇಲೆ ಅದಕ್ಕೆ ಮೊದಲೇ ದ್ವೇಷವಿತ್ತೆಂಬುದನ್ನು ನೆನಪಿನಲ್ಲಿಡಿ.
19 : ನೀವು ಲೋಕದ ಕಡೆಯವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಮಮತೆಯಿಂದ ಕಾಣುತ್ತಿತ್ತು. ನೀವಾದರೋ ಲೋಕದ ಕಡೆಗೆ ಸೇರಿದವರಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿರುವುದರಿಂದ ನೀವು ಲೋಕದಿಂದ ಬೇರ್ಪಟ್ಟಿದ್ದೀರಿ. ಎಂದೇ ಲೋಕಕ್ಕೆ ನಿಮ್ಮ ಮೇಲೆ ದ್ವೇಷವಿದೆ.
20 : ಧಣಿಗಿಂತಲೂ ದಾಸನು ದೊಡ್ಡವನಲ್ಲವೆಂದು ನಾನು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿ. ಅವರು ನನ್ನನ್ನು ಹಿಂಸೆಗೆ ಗುರಿಮಾಡಿದಂತೆ ನಿಮ್ಮನ್ನೂ ಹಿಂಸೆಗೆ ಗುರಿಮಾಡುವರು. ನನ್ನ ಬೋಧನೆಯ ಮಾತನ್ನು ಅವರು ಅನುಸರಿಸಿ ನಡೆದರೆ ನಿಮ್ಮ ಬೋಧನೆಯ ಮಾತನ್ನು ಅನುಸರಿಸಿ ನಡೆಯುವರು.
21 : ನೀವು ನನ್ನವರಾದುದರಿಂದ ಅವರು ನಿಮ್ಮನ್ನು ಹೀಗೆ ಕಾಣುವರು. ಏಕೆಂದರೆ ನನ್ನನ್ನು ಕಳುಹಿಸಿದಾತನನ್ನು ಅವರು ಅರಿಯರು.
22 : ನಾನು ಬಂದು ಅವರಿಗೆ ಬೋಧನೆ ಮಾಡದೆ ಹೋಗಿದ್ದರೆ ಅವರು ಪಾಪದೋಷಿಗಳು ಎಂದು ಹೇಳಲಾಗುತ್ತಿರಲಿಲ್ಲ. ಆದರೆ ಈಗ ಅವರ ದೋಷಕ್ಕೆ ಯಾವ ನೆಪವನ್ನೂ ಒಡ್ಡುವಂತಿಲ್ಲ.
23 : ನನ್ನ ಮೇಲೆ ದ್ವೇಷ ಇದ್ದವನಿಗೆ ನನ್ನ ಪಿತನ ಮೇಲೆಯೂ ದ್ವೇಷ ಇದೆ.
24 : ಬೇರೆ ಯಾರೂ ಮಾಡದ ಮಹತ್ತಾದ ಕಾರ್ಯಗಳನ್ನು ನಾನು ಅವರ ನಡುವೆ ಮಾಡದೆ ಹೋಗಿದ್ದರೆ ಅವರು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಅವರು ನನ್ನ ಕಾರ್ಯಗಳನ್ನು ನೋಡಿಯು ಸಹ ನನ್ನ ಮೇಲೆ ಹಾಗು ನನ್ನ ಪಿತನ ಮೇಲೆ ದ್ವೇಷ ಬೆಳೆಸಿದ್ದಾರೆ.
25 : “ನಿಷ್ಕಾರಣವಾಗಿ ಅವರು ನನ್ನನ್ನು ದ್ವೇಷಿಸಿದರು” ಎಂದು ಅವರ ಧರ್ಮಶಾಸ್ತ್ರದಲ್ಲೇ ಬರೆದಿರುವುದು ಹೀಗೆ ನೆರವೇರಿದೆ.
26 : ಪಿತನಿಂದ ಹೊರಡುವ ಸತ್ಯಸ್ವರೂಪಿಯಾದ ಪವಿತ್ರಾತ್ಮರನ್ನು ನಿಮ್ಮ ಪೋಷಕರನ್ನಾಗಿ ನಾನು ಪಿತನಿಂದಲೇ ಕಳುಹಿಸುವೆನು. ಅವರು ಬಂದು ನನ್ನ ಪರವಾಗಿ ಸಾಕ್ಷಿ ನೀಡುವರು.
27 : ಮೊತ್ತ ಮೊದಲಿನಿಂದಲೂ ನನ್ನ ಸಂಗಡ ಇದ್ದ ನೀವು ಕೂಡ ನನ್ನನ್ನು ಕುರಿತು ಸಾಕ್ಷಿ ನೀಡುವವರಾಗಿದ್ದೀರಿ.