1 : ಅಲ್ಲಿ ನಿಕೊದೇಮನೆಂಬ ಫರಿಸಾಯನು ಇದ್ದನು.
2 : ಅವನು ಯೆಹೂದ್ಯರ ನಾಯಕರಲ್ಲಿ ಒಬ್ಬನು. ಒಂದು ರಾತ್ರಿ ಅವನು ಯೇಸುಸ್ವಾಮಿಯ ಬಳಿಗೆ ಬಂದು, “ಗುರುದೇವಾ, ತಾವು ದೇವರಿಂದ ಬಂದ ಬೋಧಕರೆಂದು ನಾವು ಬಲ್ಲೆವು. ದೇವರು ತನ್ನೊಡನೆ ಇಲ್ಲದ ಹೊರತು ಯಾರಿದಂಲೂ ತಾವು ಮಾಡುವ ಸೂಚಕಕಾರ್ಯಗಳನ್ನು ಮಾಡಲು ಆಗದು,” ಎಂದು ಹೇಳಿದನು.
3 : ಆಗ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ,” ಎಂದು ಹೇಳಿದರು.
4 : ಅದಕ್ಕೆ ನಿಕೊದೇಮನು, “ವಯಸ್ಸಾದ ಒಬ್ಬನು ಹೊಸದಾಗಿ ಹುಟ್ಟುವುದಾದರೂ ಹೇಗೆ? ತಾಯಿಯ ಗರ್ಭವನ್ನು ಮತ್ತೊಮ್ಮೆ ಹೊಕ್ಕು ಅವನು ಹುಟ್ಟಲು ಸಾಧ್ಯವೇ?” ಎಂದು ಕೇಳಿದನು.
5 : ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ನೀರಿನಿಂದಲೂ ಪವಿತ್ರಾತ್ಮನಿಂದಲೂ ಹುಟ್ಟಿದ ಹೊರತು ಯಾವನೂ ದೇವರ ರಾಜ್ಯವನ್ನು ಪ್ರವೇಶಿಸಲಾರನು.
6 : ಶರೀರದಿಂದ ಹುಟ್ಟಿದ್ದು ಶರೀರಮಯ, ದೇವರಿಂದ ಹುಟ್ಟಿದ್ದು ದೈವಮಯ.
7 : ನೀವು ಹೊಸ ಜನ್ಮ ಪಡೆಯಬೇಕೆಂದು ನಾನು ಹೇಳಿದ್ದನ್ನು ಕೇಳಿ ಬೆರಗಾಗಬೇಕಿಲ್ಲ.
8 : ಗಾಳಿ ತನಗೆ ತೋಚಿದ ಕಡೆ ಬಿಸುತ್ತದೆ, ಅದರ ಸದ್ದು ನಿನಗೆ ಕೇಳಿಸುತ್ತದೆ; ಆದರೆ ಅದು ಎಲ್ಲಿಂದ ಬರುತ್ತದೆ, ಎಲ್ಲಿಗೆ ಹೋಗುತ್ತದೆ ಎಂಬುದು ನಿನಗೆ ತಿಳಿಯದು. ದೇವರ ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬನೂ ಅದರಂತೆಯೇ,” ಎಂದು ಹೇಳಿದರು.
9 : ಅದಕ್ಕೆ ನಿಕೊದೇಮನು, “ಇದೆಲ್ಲಾ ಹೇಗೆ ಸಾಧ್ಯ?” ಎಂದು ಕೇಳಿದನು.
10 : ಆಗ ಯೇಸು, “ಇಸ್ರಯೇಲಿನ ಹೆಸರಾಂತ ಬೋಧಕನಾದ ನಿನಗೇ ಇದು ಅರ್ಥವಾಗಲಿಲ್ಲವೆ?
11 : ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ ಕೇಳು: ನಮಗೆ ತಿಳಿದುದನ್ನೇ ಕುರಿತು ನಾವು ಮಾತನಾಡುತ್ತೇವೆ; ನಾವು ಕಂಡದ್ದನ್ನು ಕುರಿತು ಸಾಕ್ಷಿ ನೀಡುತ್ತೇವೆ. ಆದರೂ ನಮ್ಮ ಸಾಕ್ಷ್ಯವನ್ನು ನೀವು ಒಪ್ಪಿಕೊಳ್ಳಲು ಸಿದ್ಧರಿಲ್ಲ.
12 : ಭೂಲೋಕದ ವಿಷಯವನ್ನು ಕುರಿತು ನಾನು ಮಾತನಾಡಿದಾಗಲೇ ನಿಮಗೆ ವಿಶ್ವಾಸವಿಲ್ಲವೆಂದ ಮೇಲೆ, ಸ್ವರ್ಗಲೋಕದ ವಿಷಯವನ್ನು ಕುರಿತು ನಾನು ಮಾತನಾಡಿದಲ್ಲಿ ನೀವು ವಿಸ್ವಾಸಿಸುವುದು ಉಂಟೆ?
13 : ಸ್ವರ್ಗಲೋಕದಿಂದಲೇ ಇಳಿದು ಬಂದ ನರಪುತ್ರನೇ ಹೊರತು ಬೇರೆ ಯಾರೂ ಸ್ವರ್ಗಕ್ಕೆ ಏರಿಹೋದವರಿಲ್ಲ.
14 : “ಮೋಶೆ ಮರುಭೂಮಿಯಲ್ಲಿ ಸರ್ಪವನ್ನು ಮೇಲಕ್ಕೆ ಏರಿಸಿದನು.
15 : ಅಂತೆಯೇ ನರಪುತ್ರನಲ್ಲಿ ವಿಶ್ವಾಸವಿಟ್ಟವರೆಲ್ಲರೂ ನಿತ್ಯಜೀವವನ್ನು ಪಡೆಯುವಂತೆ ನರಪುತ್ರನನ್ನು ಸಹ ಮೇಲಕ್ಕೆ ಏರಿಸಬೇಕು.
16 : ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯ ಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.
17 : ದೇವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು.
18 : ಪುತ್ರನಲ್ಲಿ ವಿಶ್ವಾಸವಿಟ್ಟವನಿಗೆ ತೀರ್ಪಿಲ್ಲ. ಆತನಲ್ಲಿ ವಿಶ್ವಾಸವಿಡದವನಾದರೋ ಈಗಾಗಲೇ ತೀರ್ಪಿಗೆ ಗುರಿಯಾಗಿದ್ದಾನೆ. ಏಕೆಂದರೆ, ಅವನಿಗೆ ದೇವರ ಏಕೈಕ ಪುತ್ರನಲ್ಲಿ ವಿಶ್ವಾಸವಿಲ್ಲ.
19 : ಈ ತೀರ್ಪು ಏನೆಂದರೆ: ಜ್ಯೋತಿ ಜಗತ್ತಿಗೆ ಬಂದಿತು; ಮಾನವರಾದರೋ ತಮ್ಮ ದುಷ್ಕøತ್ಯಗಳಿಂದಾಗಿ ಆ ಜ್ಯೋತಿಗೆ ಬದಲು ಅಂಧಕಾರವನ್ನೇ ಅವಲಂಬಿಸಿದರು.
20 : ಕೇಡನ್ನು ಮಾಡುವವನಿಗೆ ಬೆಳಕೆಂದರೆ ಆಗದು. ತನ್ನ ದುಷ್ಕøತ್ಯಗಳು ಬಯಲಾಗಬಾರದೆಂದು ಅವನು ಬೆಳಕಿನ ಬಳಿಗೆ ಸುಳಿಯುವುದೂ ಇಲ್ಲ,
21 : ಸತ್ಯಸಂಧನಾದರೋ ಬೆಳಕಿನ ಬಳಿಗೆ ಬರುತ್ತಾನೆ. ತಾನು ಮಾಡುವುದು ದೇವರು ಮೆಚ್ಚುವುದನ್ನೇ ಎಂಬುದನ್ನು ತೋರ್ಪಡಿಸುತ್ತಾನೆ.
22 : ಇದಾದ ಬಳಿಕ ಯೇಸುಸ್ವಾಮಿ ತಮ್ಮ ಶಿಷ್ಯರೊಡನೆ ಜುದೇಯ ಪ್ರಾಂತ್ಯಕ್ಕೆ ಬಂದು ಅವರೊಡನೆ ಕೆಲವು ಕಾಲ ಅಲ್ಲೇ ಉಳಿದುಕೊಂಡು ದೀಕ್ಷಾಸ್ನಾನ ಮಾಡಿಸತೊಡಗಿದರು.
23 : ಅತ್ತ ಯೊವಾನ್ನನು ಕೂಡ ಸಾಲಿಮ್ ಎಂಬ ಊರಿಗೆ ಹತ್ತಿರವಾಗಿದ್ದ ಐನೋನ್ ಎಂಬ ಸ್ಥಳದಲ್ಲಿ ನೀರು ಹೆಚ್ಚಾಗಿದ್ದುದರಿಂದ ಸ್ನಾನದೀಕ್ಷೆಯನ್ನು ಮಾಡಿಸುತ್ತಿದ್ದನು. ಜನರು ಬಂದು ಸ್ನಾನದೀಕ್ಷೆಯನ್ನು ಪಡೆಯುತ್ತಿದ್ದರು.
24 : ಯೊವಾನ್ನನು ಆಗ ಇನ್ನೂ ಬಂಧಿತನಾಗಿರಲಿಲ್ಲ.
25 : ಶುದ್ಧಾಚಾರವನ್ನು ಕುರಿತು ಯೊವಾನ್ನನ ಶಿಷ್ಯರಿಗೂ ಯೆಹೂದ್ಯನೊಬ್ಬನಿಗೂ ವಿವಾದ ಎದ್ದಿತು.
26 : ಅವರು ಯೊವಾನ್ನನ ಬಳಿಗೆ ಬಂದು, “ಗುರುವೇ, ಜೋರ್ಡನಿನ ಆಚೆಕಡೆಯಲ್ಲಿ ನಿಮ್ಮೊಡನೆ ಒಬ್ಬನು ಇದ್ದನಲ್ಲವೆ? ಆತನನ್ನು ಕುರಿತು ನೀವೇ ಸಾಕ್ಷಿ ಹೇಳಲಿಲ್ಲವೆ? ಈಗ ನೋಡಿ, ಆತನೇ ದೀಕ್ಷಾಸ್ನಾನ ಮಾಡಿಸುತ್ತಿದ್ದಾನೆ. ಎಲ್ಲರೂ ಆತನ ಬಳಿಗೆ ಹೋಗುತ್ತಿದ್ದಾರೆ,” ಎಂದು ದೂರಿತ್ತರು.
27 : ಅದಕ್ಕೆ ಯೊವಾನ್ನನು, “ದೇವರು ದಯಪಾಲಿಸದೆ ಹೋದರೆ ಮಾನವನಿಗೇನೂ ದಕ್ಕದು.
28 : ನಾನು ಲೋಕೋದ್ಧಾರಕನಲ್ಲ; ಆತನ ಮುಂದೂತ ಮಾತ್ರ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ.
29 : ಮದುಮಗಳು ಮದುಮಗನಿಗೆ ಸೇರಿದವಳು. ಮದುಮಗನ ಗೆಳೆಯನಾದರೋ ಪಕ್ಕದಲ್ಲಿದ್ದು ಮದುಮಗನ ಕರೆಗೆ ಕಿವಿಗೊಡುತ್ತಾನೆ; ಆತನ ಸ್ವರ ಕೇಳಿ ಹರ್ಷಿಸುತ್ತಾನೆ. ಇಂಥ ಆನಂದದಿಂದ ನಾನೀಗ ಭರಿತನಾಗಿದ್ದೇನೆ.
30 : ಆತ ಬೆಳೆಯುತ್ತಿರಬೇಕು, ನಾನು ಅಳಿಯುತ್ತಿರಬೇಕು.
31 : “ಮೇಲಿಂದ ಬಂದವನೇ ಎಲ್ಲರಿಗಿಂತ ಮೇಲಾದವನು. ಇಹಲೋಕದಿಂದ ಬಂದವನು ಆದರೋ ಈ ಲೋಕಕ್ಕೆ ಸೇರಿದವನು; ಅವನು ಲೌಕಿಕವಾದುದನ್ನೇ ಹೇಳುವವನು. ಸ್ವರ್ಗದಿಂದ ಬಂದವನಾದರೋ ಸರ್ವರಿಗೂ ಶ್ರೇಷ್ಠನು.
32 : ಆತನು ತಾನು ಕಂಡದ್ದನ್ನೂ ಕೇಳಿದ್ದನ್ನೂ ಕುರಿತೇ ಸಾಕ್ಷಿಹೇಳುತ್ತಾನೆ. ಆದರೂ ಆತನ ಮಾತನ್ನು ಯಾರೂ ಅಂಗೀಕರಿಸುವುದಿಲ್ಲ.
33 : ಆತನ ಮಾತನ್ನು ಅಂಗೀಕರಿಸುವವನು ದೇವರು ಸತ್ಯಸ್ವರೂಪಿ ಎಂದು ಸಾದೃಶ್ಯಪಡಿಸುತ್ತಾನೆ.
34 : ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ. ಏಕೆಂದರೆ ದೇವರು ಆತನಿಗೆ ಪವಿತ್ರಾತ್ಮ ಅವರನ್ನು ಪೂರ್ಣವಾಗಿ ಕೊಟ್ಟಿರುತ್ತಾರೆ.
35 : ಪಿತ ಪುತ್ರನನ್ನು ಪ್ರೀತಿಸಿ ಸರ್ವಸ್ವವನ್ನೂ ಆತನ ಕೈಗೆ ಕೊಟ್ಟಿದ್ದಾರೆ.
36 : ಪುತ್ರನಲ್ಲಿ ವಿಶ್ವಾಸವಿಟ್ಟವನು ನಿತ್ಯಜೀವವನ್ನು ಪಡೆದಿರುತ್ತಾನೆ; ಪುತ್ರನಿಗೆ ಶರಣಾಗದವನು ನಿತ್ಯಜೀವವನ್ನು ಸವಿಯನು. ಅವನು ದೇವರ ಕೋಪಾಗ್ನಿಗೆ ಗುರಿಯಾಗುತ್ತಾನೆ,” ಎಂದು ಉತ್ತರಕೊಟ್ಟನು.