1 : ಇದಾದ ಮೇಲೆ ಯೆಹೂದ್ಯರ ಹಬ್ಬ ಬಂದಿತು. ಯೇಸುಸ್ವಾಮಿ ಜೆರುಸಲೇಮಿಗೆ ತೆರಳಿದರು.
2 : ಅಲ್ಲಿ, ‘ಕುರಿಬಾಗಿಲು’ ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಹಿಬ್ರಿಯ ಭಾಷೆಯಲ್ಲಿ ‘ಬೆತ್ಸಥ’ ಎಂದು ಕರೆಯುತ್ತಾರೆ.
3 : ಕುರುಡರು, ಕುಂಟರು, ಪಾಶ್ರ್ವವಾಯು ಪೀಡಿತರು
4 : ಮೊದಲಾದ ಅನೇಕ ರೋಗಿಗಳು ಆ ಮಂಟಪಗಳಲ್ಲಿ ಬಿದ್ದುಕೊಳ್ಳುತ್ತಾ ಇದ್ದರು.
5 : ಮೂವತ್ತೆಂಟು ವರ್ಷ ಕಾಯಿಲೆಯಿಂದ ನರಳುತ್ತಿದ್ದ ಒಬ್ಬ ರೋಗಿ ಅಲ್ಲಿ ಮಲಗಿದ್ದನು.
6 : ಯೇಸು ಅವನನ್ನು ನೋಡಿ, ದೀರ್ಘಕಾಲದಿಂದ ಅವನು ಹಾಗೆ ಬಿದ್ದುಕೊಂಡಿರುವುದನ್ನು ತಿಳಿದು, “ನಿನಗೆ ಗುಣಹೊಂದಲು ಮನಸ್ಸಿದೆಯೇ?” ಎಂದು ಕೇಳಿದರು.
7 : “ಸ್ವಾವಿೂ, ನೀರು ಉಕ್ಕಿದಾಗ ನನ್ನನ್ನು ಕೊಳಕ್ಕಿಳಿಸಲು ಸಹಾಯಕರು ಇರುವುದಿಲ್ಲ; ನಾನು ಹೋಗುವಷ್ಟರಲ್ಲೇ ಬೇರೆ ಯಾರಾದರೂ ಇಳಿದು ಬಿಡುತ್ತಾರೆ,” ಎಂದು ಉತ್ತರಿಸಿದ ಆ ರೋಗಿ.
8 : ಯೇಸು ಅವನಿಗೆ, “ಎದ್ದು ನಿಲ್ಲು, ನಿನ್ನ ಹಾಸಿಗೆಯನ್ನು ಸುತ್ತಿಕೊಂಡು ನಡೆ,” ಎಂದರು.
9 : ಆ ಕ್ಷಣವೇ ಅವನು ಗುಣಹೊಂದಿ, ತನ್ನ ಹಾಸಿಗೆಯನ್ನು ಸುತ್ತಿಕೊಂಡು ನಡೆಯತೊಡಗಿದನು.
10 : ಅದು ಸಬ್ಬತ್ತಿನ ದಿನವಾಗಿತ್ತು. ಆದುದರಿಂದ ಯೆಹೂದ್ಯ ಅಧಿಕಾರಿಗಳು ಗುಣಹೊಂದಿದ ಆ ಮನುಷ್ಯನಿಗೆ, “ಇಂದು ಸಬ್ಬತ್ತಿನ ದಿನ. ನೀನು ಹಾಸಿಗೆಯನ್ನು ಎತ್ತಿಕೊಂಡು ನಡೆಯುವುದು ನಿಷಿದ್ಧ,” ಎಂದು ಹೇಳಿದರು.
11 : ಅದಕ್ಕೆ ಅವನು: “ನನ್ನನ್ನು ಗುಣಪಡಿಸಿದವರೇ, ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎಂದು ಹೇಳಿದರು,” ಎಂದು ಉತ್ತರಕೊಟ್ಟನು.
12 : ಅಧಿಕಾರಿಗಳು, “ಅದನ್ನು ಎತ್ತಿಕೊಂಡು ನಡೆ ಎಂದ ಅವನು ಯಾರು?” ಎಂದು ಪ್ರಶ್ನಿಸಿದರು.
13 : ತನ್ನನ್ನು ಗುಣಪಡಿಸಿದವರು ಯಾರೆಂದು ಅವನಿಗೆ ತಿಳಿದಿರಲಿಲ್ಲ; ಅಲ್ಲದೆ ಜನಸಂದಣಿಯ ನಿಮಿತ್ತ ಯೇಸು ಆಗಲೇ ಮರೆಯಾಗಿ ಬಿಟ್ಟಿದ್ದರು.
14 : ಅನಂತರ ದೇವಾಲಯದಲ್ಲಿ ಯೇಸು ಆ ಮನುಷ್ಯನನ್ನು ಕಂಡು, “ನೋಡು, ನೀನು ಗುಣಹೊಂದಿರುವೆ; ಇನ್ನುಮೇಲೆ ಪಾಪ ಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ನಿನ್ನ ಗತಿ ಇನ್ನಷ್ಟು ಚಿಂತಾಜನಕವಾದೀತು,” ಎಂದರು.
15 : ಆ ಮನುಷ್ಯ ಅಲ್ಲಿಂದ ಯೆಹೂದ್ಯರ ಬಳಿಗೆ ಹೋಗಿ, “ನನ್ನನ್ನು ಗುಣಪಡಿಸಿದವನು ಯೇಸುವೇ,” ಎಂದು ತಿಳಿಸಿದನು.
16 : ಯೇಸು ಇದನ್ನು ಸಬ್ಬತ್ ದಿನದಲ್ಲಿ ಮಾಡಿದ್ದರಿಂದ ಯೆಹೂದ್ಯರು ಅವರಿಗೆ ಕಿರುಕುಳಕೊಡಲು ತೊಡಗಿದರು.
17 : ಅದಕ್ಕೆ ಉತ್ತರವಾಗಿ ಯೇಸು, “ನನ್ನ ಪಿತ ಸತತವೂ ಕಾರ್ಯನಿರತರು. ಅವರಂತೆಯೇ ನಾನು ಸದಾ ಕಾರ್ಯನಿರತನಾಗಿದ್ದೇನೆ,” ಎಂದು ನುಡಿದರು.
18 : ಯೇಸು ಸಬ್ಬತ್ತಿನ ನಿಯಮವನ್ನು ಮುರಿದುದೇ ಅಲ್ಲದೆ, ದೇವರನ್ನು ತನ್ನ ಪಿತನೆಂದು ಹೇಳಿಕೊಳ್ಳುತ್ತಾ, ತನ್ನನ್ನೇ ದೇವರಿಗೆ ಸರಿಸಮ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಅವರನ್ನು ಕೊಲ್ಲಲು ಮತ್ತಷ್ಟು ಹವಣಿಸಿದರು.
19 : ಯೇಸುಸ್ವಾಮಿ ಅವರನ್ನು ಉದ್ದೇಶಿಸಿ ಹೀಗೆಂದರು: “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಪುತ್ರನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ಪಿತನು ಮಾಡುವುದನ್ನು ಕಂಡು ತಾನೂ ಹಾಗೆಯೇ ಮಾಡುತ್ತಾನೆ. ಪಿತನು ಮಾಡುವುದನ್ನೇ ಪುತ್ರನೂ ಮಾಡುವುದು.
20 : ಪುತ್ರನೆಂದರೆ ಪಿತನಿಗೆ ಪ್ರೀತಿ. ಆದುದರಿಂದ ತಾವು ಮಾಡುವುದನ್ನೆಲ್ಲಾ ಪುತ್ರನಿಗೆ ತೋರಿಸುತ್ತಾರೆ. ಇದಲ್ಲದೆ ಇನ್ನೂ ಎಷ್ಟೋ ಮಿಗಿಲಾದ ಕಾರ್ಯಗಳನ್ನು ಪುತ್ರನಿಗೆ ತೋರಿಸುತ್ತಾರೆ. ಅವುಗಳನ್ನು ಕಂಡು ನೀವು ಬೆರಗಾಗುವಿರಿ.
21 : ಪಿತನು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವವನ್ನು ಕೊಡುವಂತೆಯೇ ಪುತ್ರನೂ ತನಗೆ ಬೇಕಾದವರಿಗೆ ಜೀವವನ್ನು ಕೊಡುತ್ತಾನೆ.
22 : ಅಲ್ಲದೆ, ಪಿತನು ಯಾರನ್ನೂ ತೀರ್ಪಿಗೆ ಗುರಿಮಾಡುವುದಿಲ್ಲ. ತೀರ್ಪುಕೊಡುವ ಅಧಿಕಾರವನ್ನೆಲ್ಲಾ ಅವರು ಪುತ್ರನಿಗೆ ಕೊಟ್ಟಿದ್ದಾರೆ.
23 : ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ.
24 : “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನ್ನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯಜೀವವನ್ನು ಪಡೆದಿರುತ್ತಾನೆ. ಅವನು ಖಂಡನೆಗೆ ಗುರಿ ಆಗನು; ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ.
25 : ಸತ್ಯವಾಗಿ ನಿಮಗೆ ಮತ್ತೆ ಹೇಳುತ್ತೇನೆ; ಸತ್ತವರು ದೇವರ ಪುತ್ರನ ಧ್ವನಿಯನ್ನು ಕೇಳುವ ಕಾಲ ಬರುವುದು; ಈಗಾಗಲೇ ಬಂದಿದೆ; ಈ ಧ್ವನಿಯನ್ನು ಕೇಳುವವರು ಜೀವಿಸುವರು.
26 : ಪಿತನು ತಾವೇ ಸ್ವಯಂ ಜೀವಮೂಲವಾಗಿರುವಂತೆ ಪುತ್ರನು ಸಹ ಸ್ವಯಂ ಜೀವಮೂಲವಾಗಿರುವಂತೆ ಕರುಣಿಸಿದ್ದಾರೆ.
27 : ಅದೂ ಅಲ್ಲದೆ, ಆತನು ನರಪುತ್ರನಾಗಿರುವ ಕಾರಣ ತೀರ್ಪನ್ನು ಕೊಡುವ ಹಕ್ಕನ್ನು ಆತನಿಗೇ ದಯಪಾಲಿಸಿದ್ದಾರೆ.
28 : ಇದನ್ನು ಕೇಳಿ ನೀವು ಬೆರಗಾಗುವುದು ಬೇಡ. ಸತ್ತು ಸಮಾಧಿಯಲ್ಲಿರುವವರೆಲ್ಲರೂ ಆತನ ಧ್ವನಿಯನ್ನು ಕೇಳುವ ಕಾಲ ಬರುವುದು.
29 : ಹಾಗೆ ಕೇಳಿದವರೆಲ್ಲಾ ಸಮಾಧಿಯನ್ನು ಬಿಟ್ಟು ಎದ್ದುಬರುವರು; ಸಜ್ಜನರು ಸಜ್ಜೀವಕ್ಕಾಗಿ ಪುನರುತ್ಥಾನರಾಗುವರು, ದುರ್ಜನರು ದಂಡನಾ ತೀರ್ಪಿಗಾಗಿ ಪುನರುತ್ಥಾನ ಆಗುವರು.
30 : “ನನ್ನಷ್ಟಕ್ಕೇ ನಾನೇ ಏನೂ ಮಾಡಲಾರೆ. ಪಿತನು ನನಗೆ ತಿಳಿಸಿದ ಪ್ರಕಾರ ನಾನು ತೀರ್ಪುಕೊಡುತ್ತೇನೆ. ಈ ನನ್ನ ತೀರ್ಪು ನ್ಯಾಯಬದ್ಧ ಆದುದು. ಏಕೆಂದರೆ, ನಾನು ನನ್ನ ಸ್ವಂತ ಇಚ್ಛೆಯನ್ನು ನೆರವೇರಿಸದೆ ಪಿತನ ಚಿತ್ತವನ್ನೇ ನೆರವೇರಿಸಲು ಆಶಿಸುತ್ತೇನೆ.
31 : “ನನ್ನ ಪರವಾಗಿ ನಾನೇ ಸಾಕ್ಷಿ ನೀಡಿದರೆ ನನ್ನ ಸಾಕ್ಷಿಗೆ ಬೆಲೆಯಿರದು.
32 : ನನ್ನ ಪರವಾಗಿ ಸಾಕ್ಷಿ ನೀಡುವಾತನು ಇನ್ನೊಬ್ಬನಿದ್ದಾನೆ. ಆತನು ನೀಡುವ ಸಾಕ್ಷ್ಯಕ್ಕೆ ಬೆಲೆಯಿದೆ ಎಂದು ನಾನು ಬಲ್ಲೆ.
33 : ನೀವೇ ಯೊವಾನ್ನನ ಬಳಿಗೆ ದೂತರನ್ನು ಕಳುಹಿಸಿದ್ದಿರಿ. ಆತನು ಸತ್ಯವನ್ನು ಕುರಿತು ಸಾಕ್ಷಿ ಹೇಳಿದ್ದಾನೆ.
34 : ನನಗೆ ಮಾನವ ಸಾಕ್ಷಿ ಬೇಕೆಂದು ಅಲ್ಲ; ಆದರೆ ಇದನ್ನೆಲ್ಲಾ ನಿಮ್ಮ ಉದ್ಧಾರಕ್ಕೆಂದು ನಾನು ಹೇಳುತ್ತಿದ್ದೇನೆ.
35 : ಯೊವಾನ್ನನು ಉಜ್ವಲವಾಗಿ ಉರಿಯುವ ದೀಪದಂತೆ ಇದ್ದನು. ಆ ಬೆಳಕಿನಲ್ಲಿ ನೀವು ಸ್ವಲ್ಪಕಾಲ ನಲಿದಾಡಿದಿರಿ.
36 : ಯೊವಾನ್ನನು ನೀಡಿದ ಸಾಕ್ಷ್ಯಕ್ಕಿಂತಲೂ ಮಿಗಿಲಾದ ಸಾಕ್ಷ್ಯ ನನಗುಂಟು: ನಾನು ಸಾಧಿಸುತ್ತಿರುವ ಸುಕೃತ್ಯಗಳೇ, ಅಂದರೆ, ಪಿತನು ನನಗೆ ಮಾಡಿ ಮುಗಿಸಲು ಕೊಟ್ಟ ಕಾರ್ಯಗಳೇ, ನಾನು ಪಿತನಿಂದ ಬಂದವನೆಂದು ನನ್ನ ಪರವಾಗಿ ಸಾಕ್ಷಿಕೊಡುತ್ತವೆ.
37 : ನನ್ನನ್ನು ಕಳುಹಿಸಿದ ಪಿತನೇ ನನ್ನ ಪರವಾಗಿ ಸಾಕ್ಷಿ ನೀಡಿದ್ದಾರೆ. ನೀವಾದರೋ ಅವರ ಧ್ವನಿಯನ್ನು ಎಂದೂ ಕೇಳಿಲ್ಲ, ಅವರ ದರ್ಶನವನ್ನು ಎಂದೂ ಕಂಡಿಲ್ಲ.
38 : ಅವರ ಸಂದೇಶ ನಿಮ್ಮಲ್ಲಿ ನೆಲಸಿಲ್ಲ. ಏಕೆಂದರೆ, ಅವರು ಕಳುಹಿಸಿದವನಲ್ಲಿ ನೀವು ವಿಶ್ವಾಸವಿಡಲಿಲ್ಲ.
39 : ಪವಿತ್ರ ಗ್ರಂಥದಿಂದಲೇ ನಿತ್ಯಜೀವ ಲಭಿಸುವುದೆಂದು ಭಾವಿಸಿ, ನೀವು ಅದನ್ನು ಪರಿಶೀಲಿಸಿ ನೋಡುತ್ತೀರಿ. ಆ ಗ್ರಂಥವು ಸಹ ನನ್ನ ಪರವಾಗಿ ಸಾಕ್ಷಿಹೇಳುತ್ತದೆ.
40 : ಆದರೂ ನಿತ್ಯಜೀವವನ್ನು ಪಡೆಯುವುದಕ್ಕಾಗಿ ನನ್ನ ಬಳಿಗೆ ಬರಲು ನಿಮಗೆ ಇಷ್ಟವಿಲ್ಲ.
41 : “ನಾನು ಮನುಷ್ಯರಿಂದ ಬರುವ ಗೌರವವನ್ನು ಅರಸುವುದಿಲ್ಲ.
42 : ದೇವರ ಮೇಲೆ ನಿಮಗೆ ಪ್ರೀತಿಯಿಲ್ಲವೆಂದು ನಾನು ಚೆನ್ನಾಗಿ ಬಲ್ಲೆ.
43 : ನಾನು ಬಂದಿರುವುದು ಪಿತನ ಹೆಸರಿನಲ್ಲೇ. ಆದರೂ ನೀವು ನನ್ನನ್ನು ಬರಮಾಡಿಕೊಳ್ಳುವುದಿಲ್ಲ. ಬೇರೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದನೆಂದರೆ ಅಂಥವನನ್ನು ನೀವು ಬರಮಾಡಿಕೊಳ್ಳುತ್ತೀರಿ.
44 : ಕಾರಣ, ದೇವರಿಂದ ಸಿಗುವಂಥ ಗೌರವವನ್ನು ಅರಸದೆ ನಿಮ್ಮ ನಿಮ್ಮಲ್ಲೇ ಪರಸ್ಪರ ಗೌರವವನ್ನು ಬಯಸುತ್ತೀರಿ. ಹೀಗಿರುವಲ್ಲಿ, ನಿಮ್ಮಲ್ಲಿ ವಿಶ್ವಾಸಮೂಡಲು ಹೇಗೆ ತಾನೆ ಸಾಧ್ಯ? ಪಿತನ ಮುಂದೆ ನಾನು ನಿಮ್ಮನ್ನು ಆಪಾದಿಸುತ್ತಿರುವೆನೆಂದು ಎಣಿಸಬೇಡಿ.
45 : ಆಪಾದಿಸುವವನು ಒಬ್ಬನಿದ್ದಾನೆ. ಆತನೇ ನೀವು ಆಶ್ರಯಿಸಿಕೊಂಡಿರುವ ಮೋಶೆ.
46 : ಮೋಶೆಯಲ್ಲಿ ನಿಮಗೆ ವಿಶ್ವಾಸ ಇದ್ದಿದ್ದರೆ ನನ್ನಲ್ಲಿ ವಿಶ್ವಾಸ ಇಡುತ್ತಿದ್ದಿರಿ. ಏಕೆಂದರೆ, ಆತನು ಬರೆದುದು ನನ್ನನ್ನು ಕುರಿತೇ.
47 : ಆತನು ಬರೆದುದರಲ್ಲಿ ನಿಮಗೆ ನಂಬಿಕೆಯಿಲ್ಲವೆಂದ ಮೇಲೆ ನನ್ನ ಮಾತಿನಲ್ಲಿ ನಿಮಗೆ ಹೇಗೆ ನಂಬಿಕೆ ಹುಟ್ಟೀತು?”