Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

ಯೊವಾನ್ನ


1 : ಯೇಸುಸ್ವಾಮಿ ನಡೆದು ಹೋಗುತ್ತಿದ್ದಾಗ, ಒಬ್ಬ ಹುಟ್ಟು ಕುರುಡನನ್ನು ಕಂಡರು.
2 : ಶಿಷ್ಯರು, “ಗುರುದೇವಾ, ಇವನು ಕುರುಡನಾಗಿ ಹುಟ್ಟಬೇಕಾದರೆ ಅದಕ್ಕೆ ಯಾರ ಪಾಪ ಕಾರಣ? ಇವನದೋ ಅಥವಾ ಇವನನ್ನು ಹೆತ್ತವರದೋ?” ಎಂದು ಕೇಳಿದರು.
3 : ಅದಕ್ಕೆ ಉತ್ತರವಾಗಿ ಯೇಸು, ಇವನ ಪಾಪವಾಗಲಿ, ಇವನನ್ನು ಹೆತ್ತವರ ಪಾಪವಾಗಲಿ ಇದಕ್ಕೆ ಕಾರಣವಲ್ಲ, ದೇವರ ಕಾರ್ಯ ಇವನಲ್ಲಿ ವ್ಯಕ್ತವಾಗುವಂತೆ ಹೀಗಾಗಿದೆ.
4 : ಹಗಲಿರುವಾಗಲೇ ನನ್ನನ್ನು ಕಳುಹಿಸಿರುವಾತನ ಕೆಲಸವನ್ನು ನಾನು ಮಾಡುತ್ತಿರಬೇಕು. ರಾತ್ರಿ ಆದಮೇಲೆ ಯಾರೂ ಕೆಲಸಮಾಡಲಾಗದು.
5 : ಜಗತ್ತಿನಲ್ಲಿ ನಾನಿರುವಾಗ ಜಗದ ಜ್ಯೋತಿ ನಾನೇ,” ಎಂದು ನುಡಿದರು.
6 : ತರುವಾಯ ನೆಲದಲ್ಲಿ ಉಗುಳಿ, ಮಣ್ಣಿನ ಲೇಪಮಾಡಿ, ಅದನ್ನು ಕುರುಡನ ಕಣ್ಣಿಗೆ ಲೇಪಿಸಿ, “ನೀನು ಶಿಲೋವಾಮಿನ ಕೊಳಕ್ಕೆ ಹೋಗಿ ತೊಳೆದುಕೋ,” ಎಂದು ಹೇಳಿದರು.
7 : (‘ಶಿಲೋವಾಮ್’ ಎಂದರೆ ಕಳುಹಿಸಲಾದವನು ಎಂದರ್ಥ). ಅದರಂತೆಯೇ ಆ ಕುರುಡನು ಹೋಗಿ ಕಣ್ಣುಗಳನ್ನು ತೊಳೆದುಕೊಂಡನು; ಹಿಂದಿರುಗಿದಾಗ ಅವನಿಗೆ ಕಣ್ಣು ಬಂದಿತ್ತು.
8 : ಪುನಃ ಬಗ್ಗಿಕೊಂಡು ನೆಲದ ಮೇಲೆ ಬರೆಯತೊಡಗಿದರು.
9 : “ಹೌದು ಅವನೇ,” ಎಂದರು ಕೆಲವರು. “ಇಲ್ಲ, ಇವನು ಅವನಂತೆ ಕಾಣುತ್ತಾನೆ, ಅಷ್ಟೆ,” ಎಂದರು ಇತರರು. ಆ ಕುರುಡನು “ನಾನೇ ಅವನು” ಎಂದು ತಿಳಿಸಿದನು.
10 : ಆಗ ಅವರು, “ಹಾಗಾದರೆ ನಿನಗೆ ಕಣ್ಣು ಹೇಗೆ ಬಂತು?” ಎಂದು ಕೇಳಿದರು.
11 : ಅದಕ್ಕೆ ಅವನು, “ಯೇಸು ಎಂಬುವರು ಮಣ್ಣಿನ ಲೇಪಮಾಡಿ ನನ್ನ ಕಣ್ಣಿಗೆ ಹಚ್ಚಿದರು, ‘ಶಿಲೋವಾಮಿಗೆ ಹೋಗಿ ತೊಳೆದುಕೊ,’ ಎಂದು ಹೇಳಿದರು; ನಾನು ಹೋಗಿ ತೊಳೆದುಕೊಂಡೆ; ನನಗೆ ಕಣ್ಣು ಬಂತು,” ಎಂದು ಹೇಳಿದನು.
12 : ಅದಕ್ಕೆ ಅವರು, “ಆತ ಎಲ್ಲಿದ್ದಾನೆ?” ಎಂದು ವಿಚಾರಿಸಿದರು. ಅವನು ಉತ್ತರವಾಗಿ “ನಾನರಿಯೆ,” ಎಂದನು.
13 : ಆಗ ಆ ಜನರು ಅವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಹೋದರು.
14 : ಏಕೆಂದರೆ, ಯೇಸುಸ್ವಾಮಿ ಮಣ್ಣಿನ ಲೇಪವನ್ನು ಮಾಡಿ ಅವನಿಗೆ ಕಣ್ಣುಕೊಟ್ಟ ದಿನ ಸಬ್ಬತ್ ದಿನವಾಗಿತ್ತು.
15 : ಕಣ್ಣು ಬಂದುದು ಹೇಗೆಂದು ಫರಿಸಾಯರು ಅವನನ್ನು ಮತ್ತೆ ಕೇಳಿದರು. “ಯೇಸು ನನ್ನ ಕಣ್ಣುಗಳಿಗೆ ಮಣ್ಣಿನ ಲೇಪವನ್ನು ಹಚ್ಚಿದರು; ನಾನು ಹೋಗಿ ಕಣ್ಣುಗಳನ್ನು ತೊಳೆದುಕೊಳ್ಳುತ್ತಲೇ ನನಗೆ ದೃಷ್ಟಿ ಬಂತು,” ಎಂದನು ಅವನು.
16 : ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ, ಅವನು ಸಬ್ಬತ್ ನಿಯಮವನ್ನು ಪಾಲಿಸುವುದಿಲ್ಲ,” ಎಂದರು. ಇತರರು, “ಪಾಪಿಯಾದವನು ಇಂಥ ಸೂಚಕಕಾರ್ಯಗಳನ್ನು ಮಾಡಲು ಸಾಧ್ಯವೇ?” ಎಂದರು. ಹೀಗೆ ಅವರಲ್ಲೇ ಭಿನ್ನಬೇಧವುಂಟಾಯಿತು.
17 : ಆದ್ದರಿಂದ ಫರಿಸಾಯರು ಆ ಕುರುಡನನ್ನು ಕುರಿತು, “ಅವನೇ ನಿನಗೆ ಕಣ್ಣು ಕೊಟ್ಟನೆಂದು ಹೇಳುತ್ತೀಯಲ್ಲಾ, ಅವನ ಬಗ್ಗೆ ನಿನಗೇನು ಅನ್ನಿಸುತ್ತದೆ?” ಎಂದು ವಿಚಾರಿಸಿದರು. ಅದಕ್ಕೆ ಅವನು, “ಅವರೊಬ್ಬ ಪ್ರವಾದಿಯೇ ಸರಿ,” ಎಂದನು.
18 : ಆ ಕುರುಡನು ಹಿಂದೆ ನಿಜವಾಗಿಯೂ ಕುರುಡನಾಗಿದ್ದು ಈಗ ದೃಷ್ಟಿ ಪಡೆದಿದ್ದಾನೆ ಎಂದು ಯೆಹೂದ್ಯ ಅಧಿಕಾರಿಗಳು ನಂಬಲು ಒಪ್ಪಲಿಲ್ಲ.
19 : ಈ ಕಾರಣ ಅವನ ಹೆತ್ತವರನ್ನು ಕರೆಯಿಸಿ, “ಇವನು ನಿಮ್ಮ ಮಗನೋ? ಇವನು ಹುಟ್ಟು ಕುರುಡನೋ? ಹಾಗಾದರೆ ಇವನಿಗೆ ಈಗ ಕಣ್ಣು ಬಂದದ್ದು ಹೇಗೆ?” ಎಂದು ಕೇಳಿದರು.
20 : ಅದಕ್ಕೆ ಅವನ ತಂದೆ ತಾಯಿಗಳು, “ಇವನಿಗೆ ದೃಷ್ಟಿ ಬಂದದ್ದು ಹೇಗೆ ಎಂದು ನಮಗೆ ಗೊತ್ತಿಲ್ಲ; ಇವನಿಗೆ ಕಣ್ಣುಕೊಟ್ಟವರು ಯಾರೆಂದೂ ನಮಗೆ ತಿಳಿಯದು.
21 : ಇವನನ್ನೇ ಕೇಳಿ, ಹೇಗೂ ಪ್ರಾಯದವನಾಗಿದ್ದಾನಲ್ಲವೆ? ತನ್ನ ವಿಷಯವಾಗಿ ತಾನೇ ಮಾತನಾಡಬಲ್ಲ,” ಎಂದು ಉತ್ತರಿಸಿದರು.
22 : ಅವರು ಹೀಗೆ ಹೇಳಿದ್ದು ಯೆಹೂದ್ಯ ಅಧಿಕಾರಿಗಳ ಅಂಜಿಕೆಯಿಂದ. ಏಕೆಂದರೆ, ಯಾರಾದರೂ ಯೇಸುವನ್ನು ಲೋಕೋದ್ಧಾರಕ ಎಂದು ಒಪ್ಪಿಕೊಂಡರೆ ಅಂಥವರಿಗೆ ಪ್ರಾರ್ಥನಾ ಮಂದಿರದಿಂದ ಬಹಿಷ್ಕಾರ ಹಾಕಬೇಕೆಂದು ಅಧಿಕಾರಿಗಳು ಈ ಮೊದಲೇ ಗೊತ್ತುಮಾಡಿದ್ದರು.
23 : ಆದುದರಿಂದಲೇ, “ಅವನು ಪ್ರಾಯದವನು, ಅವನನ್ನೇ ಕೇಳಿ” ಎಂದು ಅವನ ತಂದೆತಾಯಿಗಳು ಹೇಳಿದ್ದು.
24 : ಅಧಿಕಾರಿಗಳು ಆ ಹುಟ್ಟು ಕುರುಡನನ್ನು ಮತ್ತೆ ಕರೆಯಿಸಿ, “ನೀನು ದೇವರ ಮುಂದೆ ಪ್ರಮಾಣ ಮಾಡಿ ಹೇಳು. ಆ ಮನುಷ್ಯ ಪಾಪಿಯೆಂದು ನಮಗೆ ಗೊತ್ತು,” ಎಂದು ಕೇಳಿದರು.
25 : ಉತ್ತರವಾಗಿ ಅವನು, “ಅವರು ಪಾಪಿಯೋ, ಅಲ್ಲವೋ ನಾನರಿಯೆ; ಆದರೆ ನಾನೊಮ್ಮೆ ಕುರುಡನಾಗಿದ್ದೆ; ಈಗಲಾದರೋ ಕಣ್ಣುಕಾಣಿಸುತ್ತದೆ ಇಷ್ಟು ಮಾತ್ರ ಬಲ್ಲೆ,” ಎಂದು ಹೇಳಿದನು.
26 : “ಅವನು ನಿನಗೇನು ಮಾಡಿದ? ನಿನಗೆ ಹೇಗೆ ಕಣ್ಣು ಬರಿಸಿದ?” ಎಂದು ಅವರು ಮತ್ತೆ ಪ್ರಶ್ನಿಸಿದರು.
27 : ಅವನು, “ನಿಮಗೆ ಆಗಲೇ ಹೇಳಿದ್ದೇನೆ. ಆದರೆ ನೀವು ನಂಬುವುದಿಲ್ಲ. ಅದನ್ನೇ ಏಕೆ ಮತ್ತೆ ಮತ್ತೆ ಕೇಳುತ್ತೀರಿ? ಅವನ ಶಿಷ್ಯರಾಗಲು ನಿಮಗೂ ಮನಸ್ಸಿದೆಯೇ?” ಎಂದನು.
28 : ಆಗ ಅಧಿಕಾರಿಗಳು ಅವನನ್ನು ಶಪಿಸಿದರು. “ನೀನೇ ಅವನ ಶಿಷ್ಯ, ನಾವು ಮೋಶೆಯ ಶಿಷ್ಯರು.
29 : ಮೋಶೆಯೊಡನೆ ದೇವರು ಮಾತನಾಡಿದರು ಎಂಬುದನ್ನು ನಾವು ಬಲ್ಲೆವು. ಆದರೆ ಇವನು ಎಲ್ಲಿಯವನೋ ನಾವು ಅರಿಯೆವು,” ಎಂದರು.
30 : ಅದಕ್ಕೆ ಆ ಕುರುಡ, “ಏನಾಶ್ಚರ್ಯ! ನನಗೆ ಕಣ್ಣು ಬರಿಸಿದ್ದಾರೆ. ಆದರೂ ‘ಅವನು ಎಲ್ಲಿಯವನೋ ನಾವರಿಯೆವು’ ಎನ್ನುತ್ತೀರಿ.
31 : ದೇವರು ಪಾಪಿಗಳಿಗೆ ಓಗೊಡುವುದಿಲ್ಲ. ಯಾರು ಭಕ್ತಿಯಿಂದ ಅವರ ಚಿತ್ತದಂತೆ ನಡೆಯುತ್ತಾರೋ ಅವರಿಗೆ ಓಗೊಡುತ್ತಾರೆಂದು ನಮಗೆಲ್ಲಾ ಚೆನ್ನಾಗಿ ತಿಳಿದಿದೆ.
32 : ಹುಟ್ಟುಕುರುಡನಿಗೆ ಯಾರಾದರೂ ಕಣ್ಣುಕೊಟ್ಟ ಸುದ್ದಿಯನ್ನು ಲೋಕ ಸೃಷ್ಟಿಯಾದಾಗಿನಿಂದ ಒಬ್ಬರೂ ಕೇಳಿಲ್ಲ.
33 : ಇವರು ದೇವರಿಂದ ಬಂದವರು ಅಲ್ಲದಿದ್ದರೆ ಇಂಥದ್ದೇನನ್ನೂ ಮಾಡಲಾಗುತ್ತಿರಲಿಲ್ಲ,” ಎಂದನು.
34 : ಆಗ ಫರಿಸಾಯರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು. ನಮಗೇ ಬುದ್ಧಿ ಹೇಳ ಹೊರಟೆಯಾ?” ಎಂದು ಹೇಳಿ ಅವನನ್ನು ತಳ್ಳಿಬಿಟ್ಟರು.
35 : ಹುಟ್ಟು ಕುರುಡನನ್ನು ಹೊರಗೆ ತಳ್ಳಿದ ವಾರ್ತೆ ಯೇಸುಸ್ವಾಮಿಯ ಕಿವಿಗೆ ಮುಟ್ಟಿತು. ಯೇಸು ಅವನನ್ನು ಕಂಡು, “ನರಪುತ್ರನಲ್ಲಿ ನಿನಗೆ ವಿಶ್ವಾಸವಿದೆಯೇ?” ಎಂದು ಕೇಳಿದರು.
36 : ಅವನು, “ಅವರು ಯಾರೆಂದು ತಿಳಿಸಿ ಸ್ವಾವಿೂ, ನಾನು ವಿಶ್ವಾಸಿಸುತ್ತೇನೆ,” ಎಂದನು.
37 : ಯೇಸು, “ನೀನು ಆತನನ್ನು ಕಂಡಿದ್ದೀಯೆ, ನಿನ್ನೊಡನೆ ಮಾತನಾಡುತ್ತಿರುವ ನಾನೇ ಆತನು,” ಎಂದರು.
38 : “ಸ್ವಾವಿೂ, ನಾನು ವಿಶ್ವಾಸಿಸುತ್ತೇನೆ,” ಎಂದು ಹೇಳುತ್ತಾ ಅವನು ಯೇಸುವಿಗೆ ಅಡ್ಡಬಿದ್ದನು.
39 : ಆಗ ಯೇಸು, “ಕುರುಡರು ಕಾಣುವಂತೆಯೂ ಕಾಣುವವರು ಕುರುಡರಾಗುವಂತೆಯೂ ತೀರ್ಪುಕೊಡಲೆಂದೇ ನಾನು ಈ ಲೋಕಕ್ಕೆ ಬಂದುದು,” ಎಂದು ನುಡಿದರು.
40 : ಅಲ್ಲಿ ನಿಂತಿದ್ದ ಫರಿಸಾಯರು ಈ ಮಾತನ್ನು ಕೇಳಿ, “ಹಾಗಾದರೆ ನಾವು ಕೂಡ ಕುರುಡರೋ?” ಎಂದು ಪ್ರಶ್ನಿಸಿದರು.
41 : ಯೇಸು, “ನೀವು ಕುರುಡರೇ ಆಗಿದ್ದರೆ ಪಾಪಿಗಳಾಗುತ್ತಿರಲಿಲ್ಲ, ಆದರೆ, ‘ನಮಗೆ ಕಣ್ಣು ಕಾಣುತ್ತದೆ,’ ಎಂದು ಹೇಳಿಕೊಳ್ಳುತ್ತೀರಿ; ಆದ್ದರಿಂದ ನೀವು ಪಾಪಿಗಳಾಗಿದ್ದೀರಿ,” ಎಂದರು.

· © 2017 kannadacatholicbible.org Privacy Policy