1 : ಇಕೋನಿಯದಲ್ಲಿ ಪೌಲ ಮತ್ತು ಬಾರ್ನಬ
ಇಕೋನಿಯದಲ್ಲೂ ಪೌಲ ಮತ್ತು ಬಾರ್ನಬ ಯೆಹೂದ್ಯರ ಪ್ರಾರ್ಥನಾ ಮಂದಿರಕ್ಕೆ ಹೋದರು. ಅವರ ಅಮೋಘ ಬೋಧನೆಯನ್ನು ಕೇಳಿ ಯೆಹೂದ್ಯರು ಮತ್ತು ಗ್ರೀಕರು ಬಹುಸಂಖ್ಯೆಯಲ್ಲಿ ಭಕ್ತ ವಿಶ್ವಾಸಿಗಳಾದರು.
2 : ವಿಶ್ವಾಸಿಸಲೊಲ್ಲದ ಯೆಹೂದ್ಯರಾದರೋ ಅನ್ಯಧವರ್ಿೂಯರನ್ನು ಪ್ರಚೋದಿಸಿ ಭಕ್ತರ ವಿರುದ್ಧ ಎತ್ತಿಕಟ್ಟಿದರು.
3 : ಪ್ರೇಷಿತರಿಬ್ಬರೂ ಅಲ್ಲಿ ಬಹುಕಾಲವಿದ್ದು ಪ್ರಭುವನ್ನು ಕುರಿತು ಧೈರ್ಯವಾಗಿ ಬೋಧಿಸಿದರು. ಪ್ರಭು ಅವರಿಗೆ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುವ ಶಕ್ತಿಯನ್ನು ಕೊಟ್ಟರು. ಈ ಮೂಲಕ ದೇವಾನುಗ್ರಹದ ಬಗ್ಗೆ ಅವರ ಸಂದೇಶ ಸತ್ಯವಾದುದೆಂದು ವ್ಯಕ್ತಪಡಿಸಿದರು.
4 : 4ಪಟ್ಟಣದ ಜನರಲ್ಲಿ ಭಿನ್ನಾಭಿಪ್ರಾಯ ಉಂಟಾಯಿತು. ಕೆಲವರು ಯೆಹೂದ್ಯರ ಪರವಾಗಿಯೂ ಮತ್ತೆ ಕೆಲವರು ಪ್ರೇಷಿತರ ಪರವಾಗಿಯೂ ವಿಂಗಡವಾಗಿ ಹೋದರು.
5 : ಅನ್ಯಧರ್ಮದವರು ಮತ್ತು ಯೆಹೂದ್ಯರು ತಮ್ಮ ಅಧಿಕಾರಿಗಳೊಡನೆ ಸೇರಿ ಪ್ರೇಷಿತರಿಗೆ ಕಿರುಕುಳಕೊಡಲು ಹಾಗೂ ಅವರ ಮೇಲೆ ಕಲ್ಲು ತೂರಲು ಪ್ರಯತ್ನಿಸಿದರು.
6 : ಇದನ್ನರಿತುಕೊಂಡ ಪ್ರೇಷಿತರು ಅಲ್ಲಿಂದ ಪಲಾಯನಮಾಡಿ ಲುಕವೋನಿಯದ ಪಟ್ಟಣಗಳಾದ ಲುಸ್ತ್ರ ಮತ್ತು ದೆರ್ಬೆಗೂ ಅದರ ಸುತ್ತಮುತ್ತಲ ಪ್ರದೇಶಗಳಿಗೂ ಹೊರಟುಹೋದರು.
7 : ಅಲ್ಲೂ ಶುಭಸಂದೇಶವನ್ನು ಸಾರತೊಡಗಿದರು.
9 : ಒಮ್ಮೆ, ಅವನು ಕುಳಿತಲ್ಲೇ ಪೌಲನ ಮಾತುಗಳನ್ನು ಆಲಿಸುತ್ತಿದ್ದನು. ಆಗ ಪೌಲನು ಅವನನ್ನೇ ದಿಟ್ಟಿಸಿ ನೋಡಿದನು. ಅವನಲ್ಲಿ ಸ್ವಸ್ಥ ಪಡೆಯುವಷ್ಟು ವಿಶ್ವಾಸವನ್ನು ಕಂಡು ಸ್ವರವೆತ್ತಿ,
10 : “ಎದ್ದೇಳು, ಕಾಲೂರಿ ನೆಟ್ಟಗೆ ನಿಲ್ಲು,” ಎಂದು ಹೇಳಿದನು. ಆ ಮನುಷ್ಯನು ನೆಗೆದುನಿಂತು ನಡೆಯಲಾರಂಭಿಸಿದನು.
11 : ಪೌಲನು ಮಾಡಿದ ಈ ಮಹತ್ಕಾರ್ಯವನ್ನು ಜನಸಮೂಹವು ನೋಡಿತು. “ದೇವರುಗಳೇ ಮನುಷ್ಯರೂಪದಲ್ಲಿ ನಮ್ಮಲ್ಲಿಗೆ ಬಂದಿದ್ದಾರೆ,” ಎಂದು ತಮ್ಮ ಲುಕವೋನಿಯ ಭಾಷೆಯಲ್ಲಿ ಗಟ್ಟಿಯಾಗಿ ಕೂಗಲಾರಂಭಿಸಿತು.
12 : ಆ ಜನರು ಬಾರ್ನಬನನ್ನು ‘ಜೆಯುಸ್’ ದೇವರೆಂದೂ ಪೌಲನು ಮುಖ್ಯ ಭಾಷಣಕಾರನಾದುದರಿಂದ, ಅವನನ್ನು ‘ಹೆರ್ಮೆ’ ದೇವರೆಂದೂ ಕರೆಯಲಾರಂಭಿಸಿದರು.
13 : ಆ ಜೆಯುಸ್ ದೇವರ ಗುಡಿ ಪಟ್ಟಣದ ಮುಂದೆಯೇ ಇತ್ತು. ಅಲ್ಲಿಯ ಅರ್ಚಕನು ದ್ವಾರದ ಬಳಿಗೆ ಹೋರಿಗಳನ್ನೂ ಹೂವಿನ ಹಾರಗಳನ್ನೂ ತೆಗೆದುಕೊಂಡು ಬಂದನು. ಜನರೊಡನೆ ಸೇರಿ ಪ್ರೇಷಿತರಿಗೆ ಬಲಿಯನ್ನು ಅರ್ಪಿಸಬೇಕೆಂದಿದ್ದನು.
14 : ಇದನ್ನು ಕೇಳಿದ ಬಾರ್ನಬ ಮತ್ತು ಪೌಲರು ಸಿಟ್ಟಿನಿಂದ ತಮ್ಮ ಮೇಲಂಗಿಗಳನ್ನು ಹರಿದು ಜನಸಂದಣಿಯತ್ತ ಧಾವಿಸಿ ಹೀಗೆಂದು ಕೂಗಿ ಹೇಳಿದರು:
15 : “ಮಹಾಜನರೇ, ನೀವು ಮಾಡುತ್ತಿರುವುದೇನು? ನಾವು ನಿಮ್ಮಂತೆ ಕೇವಲ ನರಮಾನವರು. ನಾವು ಬಂದಿರುವುದು ನಿಮಗೆ ಶುಭಸಂದೇಶವನ್ನು ಸಾರುವುದಕ್ಕೆ; ನೀವು ಈ ನಿರರ್ಥಕ ಕಾರ್ಯವನ್ನು ಬಿಟ್ಟುಬಿಡಬೇಕು; ಭೂಮ್ಯಾಕಾಶವನ್ನೂ ಸಮುದ್ರ ಸರೋವರವನ್ನೂ ಮತ್ತು ಅವುಗಳಲ್ಲಿರುವ ಸಮಸ್ತ ಸೃಷ್ಟಿಯನ್ನೂ ಉಂಟುಮಾಡಿದ ಜೀವಂತ ದೇವರ ಭಕ್ತರಾಗಬೇಕು.
16 : ಹಿಂದಿನ ಕಾಲದಲ್ಲಿ ಸಮಸ್ತ ಜನಾಂಗಗಳು ತಮಗೆ ಇಷ್ಟಬಂದಂತೆ ನಡೆಯಲೆಂದು ದೇವರು ಬಿಟ್ಟುಬಿಟ್ಟರು.
17 : ಆದರೆ ತಮ್ಮ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಸಾಕ್ಷ್ಯ ನೀಡುತ್ತಲೇ ಬಂದಿದ್ದಾರೆ; ನಿಮಗೆ ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ ಬೆಳೆಯನ್ನೂ ಕೊಡುತ್ತಾ ಆಹಾರವನ್ನು ಒದಗಿಸಿ, ನಿಮ್ಮ ಹೃದಯವನ್ನು ಪರಮಾನಂದಗೊಳಿಸುತ್ತಾ ಬಂದಿದ್ದಾರೆ.”
18 : ಪ್ರೇಷಿತರು ಇಷ್ಟು ಹೇಳಿದರೂ ಜನರು ತಮಗೆ ಬಲಿಯರ್ಪಿಸುವುದನ್ನು ತಡೆಯುವುದು ಕಷ್ಟಸಾಧ್ಯವಾಯಿತು.
19 : ಆಗ ಅಂತಿಯೋಕ್ಯ ಮತ್ತು ಇಕೋನಿಯದಿಂದ ಕೆಲವು ಯೆಹೂದ್ಯರು ಅಲ್ಲಿಗೆ ಬಂದರು. ಅವರು ಜನಸಮೂಹವನ್ನು ತಮ್ಮ ಕಡೆ ಒಲಿಸಿಕೊಂಡು ಪೌಲನ ಮೇಲೆ ಕಲ್ಲು ಬೀರಿ, ಅವನು ಸತ್ತನೆಂದು ಭಾವಿಸಿ, ಪಟ್ಟಣದಿಂದ ಹೊರಗೆ ಎಳೆದು ಹಾಕಿದರು.
20 : ಆದರೆ, ಭಕ್ತವಿಶ್ವಾಸಿಗಳು ಬಂದು ಅವನ ಸುತ್ತಲೂ ನೆರೆದಿದ್ದಾಗ ಅವನು ಎದ್ದು ಪಟ್ಟಣವನ್ನು ಪ್ರವೇಶಿಸಿದನು. ಮರುದಿನ ಅವನು ಬಾರ್ನಬನ ಸಂಗಡ ದೆರ್ಬೆಗೆ ಹೊರಟು ಹೋದನು.
21 : ಸಿರಿಯದ ಅಂತಿಯೋಕ್ಯಕ್ಕೆ ಮರುಪ್ರಯಾಣ
ದೆರ್ಬೆಯಲ್ಲಿ ಪೌಲ ಮತ್ತು ಬಾರ್ನಬ ಶುಭಸಂದೇಶವನ್ನು ಸಾರಿ ಅನೇಕರನ್ನು ಭಕ್ತವಿಶ್ವಾಸಿಗಳನ್ನಾಗಿ ಮಾಡಿಕೊಂಡರು. ಅನಂತರ ಅಲ್ಲಿಂದ ಲುಸ್ತ್ರಕ್ಕೂ ಇಕೋನಿಯಕ್ಕೂ ಅಂತಿಯೋಕ್ಯಕ್ಕೂ ಹಿಂದಿರುಗಿ ಬಂದರು.
22 : ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.
23 : ಇದಲ್ಲದೆ ಪ್ರತಿಯೊಂದು ಕ್ರೈಸ್ತಸಭೆಗೂ ಪ್ರಮುಖರನ್ನು ನೇಮಿಸಿದರು. ಪ್ರಾರ್ಥನೆ ಮತ್ತು ಉಪವಾಸ ಮಾಡಿ ತಾವು ಅಚಲವಾಗಿ ನಂಬಿದ್ದ ಪ್ರಭುವಿಗೆ ಅವರನ್ನು ಒಪ್ಪಿಸಿದರು.
24 : ಇದಾದ ಮೇಲೆ ಪಿಸಿದಿಯ ಪ್ರದೇಶವನ್ನು ದಾಟಿ ಪಾಂಫಿಲೀಯ ಎಂಬಲ್ಲಿಗೆ ಬಂದರು.
25 : ಪೆರ್ಗದಲ್ಲಿ ಶುಭಸಂದೇಶವನ್ನು ಸಾರಿ ಅತ್ತಾಲಿಯ ಎಂಬಲ್ಲಿಗೆ ಹೋದರು.
26 : ಅಲ್ಲಿಂದ ನೌಕಾಯಾನ ಮಾಡಿ ಅವರು ಅಂತಿಯೋಕ್ಯಕ್ಕೆ ಮರಳಿದರು. ಈವರೆಗೆ ಮಾಡಿ ಮುಗಿಸಿದ್ದ ಸೇವಾಕಾರ್ಯಕ್ಕಾಗಿ ಅವರು ದೇವರ ಕೃಪಾಶ್ರಯಕ್ಕೆ ಮೊದಲು ಸಮರ್ಪಿತರಾದದ್ದು ಇಲ್ಲಿಯೇ.
28 : ತರುವಾಯ ಭಕ್ತವಿಶ್ವಾಸಿಗಳ ಸಂಗಡ ಹೆಚ್ಚುಕಾಲ ತಂಗಿದ್ದರು.