1 : ಇತ್ತ ಭಕ್ತವಿಶ್ವಾಸಿಗಳ ಸಂಖ್ಯೆ ಹೆಚ್ಚುತ್ತಾ ಬಂದಿತು. ಆಗ ಗ್ರೀಕ್ ಮಾತನಾಡುತ್ತಾ ಇದ್ದವರ ಹಾಗೂ ಸ್ಥಳೀಯ ಭಾಷೆ ಮಾತನಾಡುತ್ತಿದ್ದವರ ನಡುವೆ ಭಿನ್ನಾಭಿಪ್ರಾಯ ಉಂಟಾಯಿತು. ದಿನನಿತ್ಯ ಮಾಡುವ ದೀನದಲಿತರ ಸೇವೆಯಲ್ಲಿ ತಮ್ಮ ಕಡೆಯ ವಿಧವೆಯರನ್ನು ಅಲಕ್ಷ್ಯಮಾಡಲಾಗುತ್ತಿದೆ ಎಂದು ಗ್ರೀಕರು ಗೊಣಗುಟ್ಟಿದರು.
2 : ಆಗ ಹನ್ನೆರಡು ಮಂದಿ ಪ್ರೇಷಿತರು ಭಕ್ತವಿಶ್ವಾಸಿಗಳ ಸಭೆಯನ್ನು ಕರೆದು, “ನಾವು ದೇವರ ವಾಕ್ಯದ ಬೋಧನೆಯನ್ನು ಅವಗಣಿಸಿ ಊಟೋಪಚಾರಗಳ ಸೇವೆಯಲ್ಲಿ ಮಗ್ನರಾಗಿ ಇರುವುದು ಸರಿಯಲ್ಲ.
3 : ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಸನ್ಮಾನಿತರೂ ಆಗಿರುವ ಏಳು ವ್ಯಕ್ತಿಗಳನ್ನು ನಿಮ್ಮಿಂದ ಆರಿಸಿಕೊಳ್ಳಿ. ನಾವು ಅವರಿಗೆ ಈ ಜವಾಬ್ದಾರಿಯನ್ನು ವಹಿಸುತ್ತೇವೆ.
4 : ನಾವಾದರೋ ಪ್ರಾರ್ಥನೆಯಲ್ಲೂ ವಾಕ್ಯೋಪದೇಶದಲ್ಲೂ ನಿರತರಾಗುತ್ತೇವೆ,” ಎಂದರು.
5 : ಪ್ರೇಷಿತರ ಈ ಸಲಹೆಯನ್ನು ಇಡೀ ಸಭೆ ಅನುಮೋದಿಸಿತು. ಅಂತೆಯೇ ಅಗಾಧ ವಿಶ್ವಾಸ ಉಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೇಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬ ಏಳು ಮಂದಿಯನ್ನು ಆರಿಸಿಕೊಂಡರು.
6 : ಪ್ರೇಷಿತರ ಮುಂದೆ ಅವರನ್ನು ನಿಲ್ಲಿಸಿದರು. ಪ್ರೇಷಿತರು ಪ್ರಾರ್ಥನೆಮಾಡಿ ಅವರ ಮೇಲೆ ಹಸ್ತನಿಕ್ಷೇಪ ಮಾಡಿದರು.
7 : ದೇವರ ವಾಕ್ಯವು ಪ್ರವರ್ಧಿಸತೊಡಗಿತು. ವಿಶ್ವಾಸಿಗಳ ಸಂಖ್ಯೆ ಜೆರುಸಲೇಮಿನಲ್ಲಿ ಬಹಳವಾಗಿ ಹೆಚ್ಚಿತು. ಬಹುಮಂದಿ ಯಾಜಕರೂ ಆ ವಿಶ್ವಾಸಕ್ಕೆ ಶರಣಾದರು.
8 : ಸ್ತೇಫನನ ಬಂಧನ
ಸ್ತೇಫನನು ದೈವಾನುಗ್ರಹದಿಂದಲೂ ಶಕ್ತಿಯಿಂದಲೂ ತುಂಬಿದ್ದನು. ಜನರ ಮಧ್ಯೆ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಿದ್ದನು.
9 : ಆದರೆ ಕೆಲವರು ಸ್ತೇಫನನ ವಿರೋಧಿಗಳಾಗಿದ್ದರು. ಇವರು ‘ಬಿಡುಗಡೆ ಹೊಂದಿದವರು’ ಎಂಬವರ ಪ್ರಾರ್ಥನಾ ಮಂದಿರಕ್ಕೆ ಸೇರಿದವರು. ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರೂ ಇದರ ಸದಸ್ಯರಾಗಿದ್ದರು. ಇವರೊಡನೆ ಸಿಲಿಸಿಯ ಹಾಗೂ ಏಷ್ಯಾದ ಯೆಹೂದ್ಯರೂ ಸೇರಿ ಸ್ತೇಫನನೊಂದಿಗೆ ತರ್ಕ ಮಾಡತೊಡಗಿದರು.
10 : ಆದರೆ ಸ್ತೇಫನನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲು ಅವರಿಂದಾಗಲಿಲ್ಲ.
11 : ಆದುದರಿಂದ ಕೆಲವರಿಗೆ ಲಂಚಕೊಟ್ಟು ‘ಸ್ತೇಫನನು ಮೋಶೆಯನ್ನೂ ದೇವರನ್ನೂ ದೂಷಿಸುತ್ತಾನೆ; ಇದನ್ನು ನಾವು ಕೇಳಿದ್ದೇವೆ’ ಎಂದು ಹೇಳಿಸಿದರು.
12 : ಹೀಗೆ ಜನರನ್ನೂ ಪ್ರಮುಖರನ್ನೂ ನ್ಯಾಯಶಾಸ್ತ್ರಜ್ಞರನ್ನೂ ಪ್ರಚೋದಿಸಿದರು. ಸ್ತೇಫನನನ್ನು ಬಂಧಿಸಿ ನ್ಯಾಯಸಭೆಯ ಮುಂದೆ ಎಳೆದು ತರುವಂತೆ ಮಾಡಿದರು.
13 : ಕೆಲವು ಸುಳ್ಳುಸಾಕ್ಷಿಗಳನ್ನು ನೇಮಿಸಿಕೊಂಡು ಅವರಿಂದ, ‘ಇವನು ಯಾವಾಗಲೂ ನಮ್ಮ ಪವಿತ್ರ ದೇವಾಲಯದ ವಿರುದ್ಧ ಹಾಗೂ ಮೋಶೆಯ ಧರ್ಮಶಾಸ್ತ್ರದ ವಿರುದ್ಧ ಮಾತನಾಡುತ್ತಾನೆ.
14 : ನಜರೇತಿನ ಆ ಯೇಸು ಈ ಮಹಾದೇವಾಲಯವನ್ನು ನಾಶಗೊಳಿಸುವನೆಂದೂ ಮೋಶೆ ನಮಗೆ ವಿಧಿಸಿದ ಸಂಪ್ರದಾಯಗಳನ್ನು ಬದಲಿಸುವನೆಂದೂ ಇವನು ಹೇಳಿರುತ್ತಾನೆ. ಇದನ್ನು ನಾವು ಕೇಳಿದ್ದೇವೆ,’ ಎಂದು ಹೇಳಿಸಿದರು.
15 : ನ್ಯಾಯಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನ ಮುಖವನ್ನೇ ದಿಟ್ಟಿಸಿ ನೋಡಿದರು. ಅದು ದೇವದೂತನ ಮುಖದಂತೆ ಕಂಗೊಳಿಸಿತು.