Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

1ಕೊರಿಂಥ


1 : ಪ್ರಿಯ ಸಹೋದರರೇ, ದೇವರ ಆತ್ಮವನ್ನು ಪಡೆದವರೊಡನೆ ಮಾತನಾಡಿದಂತೆ ನಿಮ್ಮೊಡನೆ ನಾವು ಮಾತನಾಡಲಿಲ್ಲ. ಲೌಕಿಕರು ನೀವು; ಕ್ರಿಸ್ತಯೇಸುವಿನಲ್ಲಿ ಹಸುಗೂಸುಗಳು ನೀವು ಎಂದು ಭಾವಿಸಿ ನಿಮ್ಮೊಡನೆ ಮಾತನಾಡಬೇಕಾಯಿತು.
2 : ನಾನು ನಿಮಗೆ ಹಾಲೂಡಿಸಿದೆನು; ಗಟ್ಟಿ ಆಹಾರವನ್ನು ಕೊಡಲಿಲ್ಲ. ಏಕೆಂದರೆ, ಅದನ್ನು ಜೀರ್ಣಿಸಿಕೊಳ್ಳಲು ನಿಮಗೆ ಶಕ್ತಿ ಇರಲಿಲ್ಲ. ಇಂದಿಗೂ ನೀವು ಶಕ್ತರಲ್ಲ.
3 : ನೀವು ಇನ್ನೂ ಲೌಕಿಕರಂತೆ ಬಾಳುತ್ತಿದ್ದೀರಿ. ನಿಮ್ಮ ನಡುವೆ ದ್ವೇಷ-ಅಸೂಯೆ, ವಾದ-ವಿವಾದಗಳು ಪ್ರಬಲವಾಗಿದ್ದು ನೀವಿನ್ನೂ ಪ್ರಾಣಿಗಳಂತೆ ವರ್ತಿಸುತ್ತಿದ್ದೀರಲ್ಲವೆ?
4 : ಒಬ್ಬನು, ನಾನು ಪೌಲನ ಕಡೆಯವನು; ಇನ್ನೊಬ್ಬನು, ನಾನು ಅಪೊಲೋಸನ ಕಡೆಯವನು, ಎಂದು ನಿಮ್ಮೊಳಗೆ ಕಿತ್ತಾಡುವ ನೀವು ಕೇವಲ ನರಪ್ರಾಣಿಗಳಲ್ಲದೆ ಮತ್ತೇನು?
5 : ಅಪೊಲೋಸನು ಯಾರು? ಪೌಲನು ಯಾರು? ನಿಮ್ಮನ್ನು ವಿಶ್ವಾಸಕ್ಕೆ ಕರೆತಂದ ದಾಸರು ನಾವಲ್ಲವೇ? ನಮ್ಮಲ್ಲಿ ಪ್ರತಿಯೊಬ್ಬನು ಪ್ರಭು ನಿಯಮಿಸುವ ಕಾರ್ಯವನ್ನು ನಿರ್ವಹಿಸುತ್ತವೆ.
6 : ನಾನು ಸಸಿಯನ್ನು ನೆಟ್ಟೆನು; ಅಪೊಲೋಸನು ನೀರೆರೆದನು; ಆದರೆ ಅದನ್ನು ಬೆಳೆಸಿದವರು ದೇವರು.
7 : ಆದ್ದರಿಂದ ನೆಡುವವನಾಗಲಿ, ನೀರೆರೆಯುವವನಾಗಲಿ ಪ್ರಮುಖನಲ್ಲ; ಬೆಳವಣಿಗೆ ನೀಡುವ ದೇವರೇ ದೊಡ್ಡವರು.
8 : ನೆಡುವವನೂ ನೀರೆರೆಯುವವನೂ ಇಬ್ಬರೂ ಅಗತ್ಯವಾಗಿ ಬೇಕಾದವರೇ ಅವನವನ ದುಡಿಮೆಗೆ ತಕ್ಕ ಹಾಗೆ ಪ್ರತಿಯೊಬ್ಬನೂ ಸಂಭಾವನೆ ಪಡೆಯುತ್ತಾನೆ.
9 : ನಾವು ದೇವರ ಸಹಕಾರ್ಮಿಕರು. ನೀವು ದೇವರೆ ಸಾಗುವಳಿ ಮಾಡುವ ಹೊಲ; ಅವರೆ ನಿರ್ಮಿಸುತ್ತಿರುವ ಮಂದಿರ.
10 : ದೇವರು ನನಗಿತ್ತ ವರದಾನಗಳಿಗೆ ಅನುಸಾರವಾಗಿ ನಾನು ಚತುರ ಶಿಲ್ಪಿಯಂತೆ ಅಸ್ತಿವಾರ ಹಾಕಿದೆ. ಇನ್ನೊಬ್ಬನು ಅದರ ಮೇಲೆ ಕಟ್ಟುತ್ತಿದ್ದಾನೆ. ಆದರೆ ಕಟ್ಟುವ ಪ್ರತಿಯೊಬ್ಬನು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಲಿ.
11 : ಈಗಾಗಲೇ ಅಸ್ತಿವಾರ ಹಾಕಲಾಗಿದೆ. ಯೇಸುಕ್ರಿಸ್ತರೇ ಆ ಅಸ್ತಿವಾರ. ಇದಲ್ಲದೆ, ಬೇರೆ ಅಸ್ತಿವಾರವನ್ನು ಯಾರೂ ಹಾಕಲಾಗದು.
12 : ಈ ಅಸ್ತಿವಾರದ ಮೇಲೆ ಕೆಲವರು ಚಿನ್ನ, ಬೆಳ್ಳಿ, ರತ್ನ - ಇವುಗಳನ್ನು ಉಪಯೋಗಿಸಿ ಕಟ್ಟುತ್ತಾರೆ. ಮತ್ತೆ ಕೆಲವರು ಹುಲ್ಲು, ಕಟ್ಟಿಗೆ, ಜೊಂಡು - ಇವುಗಳನ್ನು ಬಳಸುತ್ತಾರೆ.
13 : ಅವನವನ ಕೆಲಸದ ಗುಣವು ಕಡೆಯ ದಿನ ಬಟ್ಟಬಯಲಾಗುವುದು. ಯೇಸುಕ್ರಿಸ್ತರ ಆ ದಿನವು ಬೆಂಕಿಯ ದಿನವಾಗಿ ಪ್ರಜ್ವಲಿಸುವುದು. ಪ್ರತಿಯೊಬ್ಬನ ಕೆಲಸವನ್ನು ಆ ಬೆಂಕಿ ಪರೀಕ್ಷಿಸುವುದು.
14 : ಕಟ್ಟಡವು ಸುಟ್ಟು ಹೋಗದೆ ಅಸ್ತಿವಾರದ ಮೇಲೆ ನೆಲೆಯಾಗಿ ನಿಂತರೆ ಕಟ್ಟಿದವನಿಗೆ ಸಂಭಾವನೆ ದೊರಕುತ್ತದೆ.
15 : ಸುಟ್ಟು ಹೋದರೆ ಅವನಿಗೇ ನಷ್ಟವಾಗುತ್ತದೆ. ಅವನಾದರೋ ಬೆಂಕಿಯಿಂದ ತಪ್ಪಿಸಿಕೊಂಡವನ ಹಾಗೆ ರಕ್ಷಣೆಯನ್ನು ಹೊಂದುತ್ತಾನೆ.
16 : ನೀವು ದೇವರ ಆಲಯವಾಗಿದ್ದೀರಿ. ದೇವರ ಆತ್ಮವು ನಿಮ್ಮಲ್ಲಿ ವಾಸಿಸುತ್ತದೆಂದು ನಿಮಗೆ ಚೆನ್ನಾಗಿ ತಿಳಿದಿದೆ.
17 : ಯಾವನಾದರೂ ದೇವಾಲಯವನ್ನು ನಾಶಮಾಡಿದರೆ ದೇವರು ಅವನನ್ನು ನಾಶಮಾಡುತ್ತಾರೆ. ದೇವರ ಆಲಯವು ಪವಿತ್ರವಾದುದು. ನೀವೇ ಆ ಆಲಯ.
18 : ಯಾರೂ ತನ್ನನ್ನು ತಾನೇ ವಂಚಿಸಿಕೊಳ್ಳದಿರಲಿ. ನಿಮ್ಮಲ್ಲಿ ಯಾರಾದರೂ ಈ ಲೋಕದ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸುವುದಾದರೆ ಅಂಥವನು ಮೊದಲು ಹುಚ್ಚನಂತಿರಲು ಕಲಿಯಲಿ. ಆಗ ಅವನು ನಿಜವಾಗಿಯೂ ಜಾಣನಾಗುತ್ತಾನೆ.
19 : ಇಹಲೋಕದ ಜಾಣತನವು ದೇವರ ದೃಷ್ಟಿಯಲ್ಲಿ ಹುಚ್ಚುತನವೇ ಸರಿ. “ದೇವರು ಜ್ಞಾನಿಗಳನ್ನು ಅವರ ಜಾಲವುದಲ್ಲಿಯೇ ಸಿಕ್ಕಿಸುವರು” ಎಂದೂ
20 : “ಜ್ಞಾನಿಗಳ ಯೋಜನೆಗಳು ನಿಷ್ಫಲವೆಂಬುದು ಪ್ರಭುವಿಗೆ ತಿಳಿದಿದೆ” ಎಂದೂ ಲಿಖಿತವಾಗಿದೆಯಲ್ಲವೆ?
21 : ಆದ್ದರಿಂದ ಕೇವಲ ನರಮಾನವರನ್ನೇ ನೆಚ್ಚಿಕೊಂಡು ಯಾರೂ ಹೆಚ್ಚಳಪಡದಿರಲಿ.
22 : ವಾಸ್ತವವಾಗಿ ಸಮಸ್ತವೂ ನಿಮ್ಮದೇ. ಪೌಲ, ಅಪೊಲೋಸ್, ಕೇಫ - ಇವರಾಗಲಿ; ಜಗತ್ತು, ಜೀವ, ಮರಣ – ಇವುಗಳಾಗಲಿ, ಅಥವಾ ವರ್ತಮಾನ, ಭವಿಷ್ಯತ್ಕಾಲಗಳಾಗಲಿ, ಇವೆಲ್ಲವೂ ನಿಮ್ಮವೇ.
23 : ಆದರೆ ನೀವು ಕ್ರಿಸ್ತ ಯೇಸುವಿಗೆ ಸೇರಿದವರು; ಕ್ರಿಸ್ತಯೇಸು ದೇವರಿಗೆ ಸೇರಿದವರು.

· © 2017 kannadacatholicbible.org Privacy Policy