Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

ರೋಮ


1 : ಹೀಗಿರಲಾಗಿ, ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧದಲ್ಲಿರುವ ನಾವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರೊಡನೆ ಶಾಂತಿಸಮಾಧಾನದಿಂದಿರುತ್ತೇವೆ.
2 : ವಿಶ್ವಾಸದ ಮೂಲಕ ನಾವು ದೈವಾನುಗ್ರಹವನ್ನು ಸವಿಯುವಂತೆ ಯೇಸುಕ್ರಿಸ್ತರು ದಾರಿ ತೋರಿಸಿದರು. ನಾವೀಗ ನೆಲೆಗೊಂಡಿರುವುದು ಆ ಅನುಗ್ರಹದಲ್ಲಿಯೇ. ಆದ್ದರಿಂದಲೇ, ದೇವರ ಮಹಿಮೆಯಲ್ಲಿ ನಾವೂ ಪಾಳುಗೊಳ್ಳುತ್ತೇವೆಂಬ ಭರವಸೆಯಿಂದ ಹೆಮ್ಮೆಪಡುತ್ತೇವೆ.
3 : ಅಷ್ಟೇ ಅಲ್ಲ, ನಮಗೆ ಬಂದೊದಗುವ ಕಷ್ಟಸಂಕಟಗಳಲ್ಲೂ ಹೆಮ್ಮೆಪಡುತ್ತೇವೆ. ಏಕೆಂದರೆ, ಕಷ್ಟಸಂಕಟಗಳು ಸಹನೆಯನ್ನು,
4 : ಸಹನೆಯು ಸದ್ಗುಣವನ್ನು, ಸದ್ಗುಣವು ನಂಬಿಕೆನಿರೀಕ್ಷೆಯನ್ನು ಬೆಳೆಸುತ್ತವೆಂದು ನಾವು ಬಲ್ಲೆವು. 5ಈ ನಂಬಿಕೆ
5 : ಈ ನಂಬಿಕೆ ನಿರೀಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲ. ಏಕೆಂದರೆ, ನಮಗೆ ದಾನವಾಗಿ ದಯಪಾಲಿಸಿರುವ ಪವಿತ್ರಾತ್ಮ ಅವರ ಮುಖಾಂತರ ದೇವರು ತಮ್ಮ ಪ್ರೀತಿಯನ್ನು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿಸಿದ್ದಾರೆ.
6 : ನಾವು ಪಾಪದಿಂದ ದುರ್ಬಲರಾಗಿದ್ದಾಗಲೇ ನಿಯಮಿತ ಕಾಲದಲ್ಲಿ ಕ್ರಿಸ್ತಯೇಸು ಪಾಪಿಗಳಿಗೋಸ್ಕರ ಪ್ರಾಣತ್ಯಾಗಮಾಡಿದರು.
7 : ನೀತಿವಂತನಿಗಾಗಿ ಒಬ್ಬನು ತನ್ನ ಪ್ರಾಣಕೊಡುವುದು ವಿರಳ. ಸತ್ಪುರುಷನಿಗಾಗಿ ಒಬ್ಬನು ತನ್ನ ಪ್ರಾಣವನ್ನು ಕೊಟ್ಟರೂ ಕೊಟ್ಟಾನು.
8 : ಆದರೆ ನಾವಿನ್ನೂ ಪಾಪಿಗಳಾಗಿರುವಾಗಲೇ ಕ್ರಿಸ್ತಯೇಸು ನಮಗೋಸ್ಕರ ಪ್ರಾಣತ್ಯಾಗ ಮಾಡಿದರು. ಇದರಿಂದ ನಮ್ಮ ಮೇಲೆ ದೇವರಿಗಿರುವ ಪ್ರೀತಿ ಎಷ್ಟೆಂದು ವ್ಯಕ್ತವಾಗುತ್ತದೆ.
9 : ಕ್ರಿಸ್ತಯೇಸುವಿನ ರಕ್ತಧಾರೆಯಿಂದ ನಾವೀಗ ದೇವರೊಡನೆ ಸತ್ಸಂಬಂಧದಲ್ಲಿದ್ದೇವೆ. ಹೀಗಿರಲಾಗಿ, ಬರಲಿರುವ ದೈವಕೋಪಾಗ್ನಿಯಿಂದ ಯೇಸುಕ್ರಿಸ್ತರ ಮುಖಾಂತರವೇ ಪಾರಾಗುತ್ತೇವೆ ಎಂಬುದು ಮತ್ತಷ್ಟು ನಿಶ್ಚಯವಲ್ಲವೆ?
10 : ನಾವು ದೇವರಿಗೆ ಶತ್ರುಗಳಾಗಿದ್ದರೂ ಅವರು ತಮ್ಮ ಮಗನ ಮರಣದ ಮೂಲಕ ನಮ್ಮನ್ನು ತಮ್ಮೊಡನೆ ಸಂಧಾನಗೊಳಿಸಿ ಮಿತ್ರರನ್ನಾಗಿ ಮಾಡಿಕೊಂಡರು. ನಾವೀಗ ದೇವರ ಮಿತ್ರರಾಗಿರುವುದರಿಂದ, ಕ್ರಿಸ್ತಯೇಸುವಿನ ಜೀವದ ಮೂಲಕ ಉದ್ಧಾರ ಹೊಂದುತ್ತೇವೆ ಎಂಬುದು ಮತ್ತಷ್ಟು ಖಚಿತವಲ್ಲವೆ?
11 : ಅಷ್ಟೇ ಅಲ್ಲದೆ, ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರು ನಮ್ಮನ್ನು ಮಿತ್ರರನ್ನಾಗಿಸಿರುವುದರಿಂದ ಅವರ ಮೂಲಕವೇ ನಾವು ದೇವರಲ್ಲಿ ಹೆಮ್ಮೆ ಪಡುತ್ತೇವೆ.
12 : ಒಬ್ಬ ಮನುಷ್ಯನಿಂದಲೇ ಪಾಪ, ಪಾಪದಿಂದ ಮರಣ, ಈ ಲೋಕವನ್ನು ಪ್ರವೇಶಿಸಿದವು. ಎಲ್ಲರೂ ಪಾಪ ಮಾಡಿದ್ದರಿಂದ ಮರಣವು ಎಲ್ಲರಿಗೂ ಪ್ರಾಪ್ತಿಯಾಯಿತು.
13 : ಧರ್ಮಶಾಸ್ತ್ರವನ್ನು ಕೊಡುವುದಕ್ಕೆ ಮೊದಲೇ ಪಾಪವು ಲೋಕದಲ್ಲಿತ್ತು. ಆದರೆ ಧರ್ಮಶಾಸ್ತ್ರ ಇಲ್ಲದೆ ಇದ್ದುದರಿಂದ ಪಾಪವನ್ನು ಗಣನೆಗೆ ತಂದುಕೊಳ್ಳಲಾಗಲಿಲ್ಲ.
14 : ಆದರೂ, ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣವು ದಬ್ಬಾಳಿಕೆ ನಡೆಸುತ್ತಿತ್ತು. ದೇವರ ಆಜ್ಞಾವಿಧಿಗಳನ್ನು ವಿೂರಿ ಆದಾಮನು ಮಾಡಿದ ಪಾಪಕ್ಕೆ ಸಮನಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ, ಮರಣದ ಆಳ್ವಿಕೆ ನಡೆಯುತ್ತಿತ್ತು. ಆದಾಮನು ಮುಂಬರಲಿದ್ದ ಮಹಾತ್ಮನ ಮುನ್ಸೂಚನೆಯಾಗಿದ್ದಾನೆ.
15 : ಆದರೆ ಆದಾಮನ ಪಾಪಕ್ಕೂ ದೇವರ ಅನುಗ್ರಹಕ್ಕೂ ವ್ಯತ್ಯಾಸವಿದೆ. ಒಬ್ಬ ಮನುಷ್ಯನ ಅಪರಾಧದಿಂದ ಎಲ್ಲರೂ ಮರಣಕ್ಕೊಳಗಾದರು ಎಂಬುದೇನೋ ನಿಜ. ಆದರೆ ದೇವರ ಅನುಗ್ರಹವು ಅದಕ್ಕಿಂತಲೂ ಅತ್ಯಧಿಕವಾದುದು. ಅಂತೆಯೇ, ಯೇಸುಕ್ರಿಸ್ತ ಎಂಬ ಒಬ್ಬ ಮಹಾತ್ಮನ ಅನುಗ್ರಹದಿಂದ ಲಭಿಸುವ ಉಚಿತಾರ್ಥ ವರಗಳು ಇನ್ನೂ ಅಧಿಕಾಧಿಕವಾದುವು ಎಂಬುದೂ ನಿಜ.
16 : ದೇವರ ಉಚಿತಾರ್ಥ ವರಕ್ಕೂ ಒಬ್ಬ ಮನುಷ್ಯನ ಪಾಪದ ಪರಿಣಾಮಕ್ಕೂ ಎಷ್ಟೋ ವ್ಯತ್ಯಾಸವಿದೆ. ಆ ಒಂದು ಪಾಪದ ಪರಿಣಾಮವಾಗಿ ಮನುಷ್ಯನು ಅಪರಾಧಿಯೆಂದು ನಿರ್ಣಯಿಸಲ್ಪಟ್ಟನು. ಆದರೆ ಅನೇಕರು ಅಪರಾಧಿಗಳಾದ ಮೇಲೂ ಕೊಡಲಾಗುವ ಉಚಿತಾರ್ಥ ವರವು ದೇವರೊಡನೆ ಸತ್ಸಂಬಂಧವನ್ನು ಉಂಟುಮಾಡುತ್ತದೆ.
17 : ಒಬ್ಬ ಮನುಷ್ಯನ ಅಪರಾಧದ ಕಾರಣ, ಒಬ್ಬ ವ್ಯಕ್ತಿಯ ಮುಖಾಂತರ ಮರಣವು ಎಲ್ಲಾ ಮಾನವರ ಮೇಲೆ ದಬ್ಬಾಳಿಕೆ ನಡೆಸಿತು. ಆದರೆ, ಹೇರಳವಾದ ದೈವಾನುಗ್ರಹವನ್ನೂ ದೇವರೊಡನೆ ಸತ್ಸಂಬಂಧವೆಂಬ ಉಚಿತಾರ್ಥ ವರವನ್ನೂ ಪಡೆದವರಾದರೋ ಯೇಸುಕ್ರಿಸ್ತ ಎಂಬ ಮಹಾತ್ಮನ ಮುಖಾಂತರ ಮತ್ತಷ್ಟು ವಿಪುಲವಾಗಿ ಸಜ್ಜೀವವನ್ನು ಪಡೆದು ರಾಜ್ಯವಾಳುತ್ತಾರೆ.
18 : ಒಬ್ಬನ ಅಪರಾಧದಿಂದ ಎಲ್ಲಾ ಮಾನವರು ದಂಡನೆಯ ತೀರ್ಪಿಗೆ ಗುರಿಯಾಗುತ್ತಾರೆ. ಹಾಗೆಯೇ ಒಬ್ಬನ ಸತ್ಕಾರ್ಯದಿಂದ ಎಲ್ಲಾ ಮಾನವರು ವಿಮೋಚನೆಯನ್ನೂ ಸಜ್ಜೀವವನ್ನೂ ಪಡೆಯುತ್ತಾರೆ.
19 : ಹೇಗೆ ಒಬ್ಬ ಮನುಷ್ಯನ ಅವಿಧೇಯತೆಯಿಂದ ಎಲ್ಲರೂ ಪಾಪಿಗಳಾದರೋ, ಹಾಗೆಯೇ ಒಬ್ಬ ಮನುಷ್ಯನ ವಿಧೇಯತೆಯಿಂದ ಎಲ್ಲರೂ ದೇವರೊಡನೆ ಸತ್ಸಂಬಂಧವನ್ನು ಹೊಂದುತ್ತಾರೆ.
20 : ಧರ್ಮಶಾಸ್ತ್ರದ ಪ್ರವೇಶ ಆದಂತೆ, ಅಪರಾಧಗಳು ಹೆಚ್ಚಿದವು. ಅಪರಾಧಗಳು ಹೆಚ್ಚಿದಂತೆ ದೇವರ ಅನುಗ್ರಹವು ಹೆಚ್ಚುಹೆಚ್ಚು ಆಯಿತು.
21 : ಹೀಗೆ ಪಾಪವು ಮರಣದ ಮೂಲಕ ಆಳ್ವಿಕೆ ನಡೆಸಿದಂತೆ, ದೈವಾನುಗ್ರಹವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿರಿಸಿ, ಅಮರಜೀವದತ್ತ ಒಯ್ದು, ಆಳ್ವಿಕೆ ನಡೆಸುತ್ತದೆ.

· © 2017 kannadacatholicbible.org Privacy Policy