1 : ನೀವು ಯೇಸುಕ್ರಿಸ್ತರೊಂದಿಗೆ ಪುನರುತ್ಥಾನ ಹೊಂದಿರುವುದಾದರೆ ಸ್ವರ್ಗೀಯ ವಿಷಯಗಳ ಕಡೆಗೆ ಗಮನಕೊಡಿ. ಕ್ರಿಸ್ತಯೇಸು ಸ್ವರ್ಗದಲ್ಲಿ ದೇವರ ಬಲಗಡೆಯಲ್ಲಿ ಆಸೀನರಾಗಿದ್ದಾರೆ.
2 : ನೀವು ಕ್ರಿಸ್ತಯೇಸುವಿನೊಂದಿಗೆ ಮರಣ ಹೊಂದಿರುವುದರಿಂದ ಅವರೊಂದಿಗೆ ನಿಮ್ಮ ಜೀವ ದೇವರಲ್ಲಿ ಮರೆಯಾಗಿದೆ.
3 : ನಿಮ್ಮ ಮನಸ್ಸು ಪ್ರಾಪಂಚಿಕ ವಿಷಯಗಳ ಮೇಲೆ ಅಲ್ಲ, ಸ್ವರ್ಗೀಯ ವಿಷಯಗಳ ಮೇಲೆ ಕೇಂದ್ರೀಕೃತವಾಗಿರಲಿ.
4 : ಕ್ರಿಸ್ತಯೇಸುವೇ ನಿಮ್ಮ ನೈಜ ಜೀವವಾಗಿದ್ದಾರೆ. ಅವರು ಪುನರಾಗಮಿಸುವಾಗ ನೀವೂ ಸಹ ಅವರ ಮಹಿಮೆಯಲ್ಲಿ ಪಾಲುಗಾರರಾಗಿ ಅವರೊಂದಿಗೆ ಪ್ರತ್ಯಕ್ಷರಾಗುವಿರಿ.
5 : ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ.
6 : ಇಂಥವುಗಳಿಗೆ ಈಡಾಗುವ ದುಷ್ಕರ್ಮಿಗಳು ದೇವರ ಕೋಪಾಗ್ನಿಗೆ ಗುರಿಯಾಗುತ್ತಾರೆ.
7 : ಒಮ್ಮೆ ಇವೆಲ್ಲ ನಿಮ್ಮ ಜೀವನದ ರೀತಿನೀತಿಗಳಾಗಿದ್ದು ಇವುಗಳಲ್ಲೇ ಮಗ್ನರಾಗಿದ್ದಿರಿ
8 : ಈಗಲಾದರೋ ಕೋಪ, ರೋಷ, ಮತ್ಸರ - ಇವುಗಳನ್ನು ತ್ಯಜಿಸಿರಿ; ದೂಷಣೆ ಮತ್ತು ಹೊಲಸು ಮಾತುಗಳು ನಿಮ್ಮ ಬಾಯಿಂದ ಬರಕೂಡದು.
9 : ಒಬ್ಬರಿಗೊಬ್ಬರು ಸುಳ್ಳುಹೇಳಬೇಡಿ. ಏಕೆಂದರೆ, ನಿಮ್ಮಲ್ಲಿದ್ದ ಹಳೆಯ ಸ್ವಭಾವವನ್ನೂ ಅದಕ್ಕೆ ಸಂಬಂಧಿಸಿದ ದುರಭ್ಯಾಸಗಳನ್ನೂ ತೊರೆದು ಬಿಟ್ಟಿದ್ದೀರಿ.
10 : ಮಾತ್ರವಲ್ಲ, ನೂತನ ಸ್ವಭಾವವನ್ನು ಧರಿಸಿಕೊಂಡಿದ್ದೀರಿ. ನೀವು ಸೃಷ್ಟಿಕರ್ತನನ್ನು ಸಂಪೂರ್ಣವಾಗಿ ಅರಿತುಕೊಳ್ಳಬೇಕು ಎಂಬ ಉದ್ದೇಶದಿಂದ ಈ ಸ್ವಭಾವವನ್ನು ಅನುದಿನವೂ ನವೀಕರಿಸಲಾಗುತ್ತಿದೆ.
11 : ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ. ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.
12 : ನೀವು ದೇವರಿಂದ ಆಯ್ಕೆಯಾದವರು. ದೇವರಿಗೆ ಪ್ರಿಯವಾದವರು. ದೇವರ ಸ್ವಂತ ಜನರು. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳೇ ನಿಮ್ಮ ಆಭರಣಗಳಾಗಿರಲಿ.
13 : ಒಬ್ಬರನ್ನೊಬ್ಬರು ಸೈರಿಸಿಕೊಳ್ಳಿ. ಒಬ್ಬನ ಮೇಲೆ ತಪ್ಪು ಹೊರಿಸಲು ಕಾರಣವಿದ್ದರೂ ಕ್ಷಮಿಸಿಬಿಡಿ. ಪ್ರಭು ಯೇಸು ನಿಮ್ಮನ್ನು ಕ್ಷಮಿಸಿದಂತೆ ನೀವೂ ಇತರರನ್ನು ಕ್ಷಮಿಸಿರಿ.
14 : ಎಲ್ಲಕ್ಕಿಂತ ಮಿಗಿಲಾಗಿ ನಿಮ್ಮಲ್ಲಿ ಪ್ರೀತಿಯಿರಲಿ. ಪ್ರೀತಿಯೇ ಸಮಸ್ತವನ್ನು ಸಂಪೂರ್ಣಗೊಳಿಸುವ ಬಂಧನ.
15 : ನಿಮ್ಮ ಹೃನ್ಮನಗಳು ಕ್ರಿಸ್ತಯೇಸುವಿನ ಶಾಂತಿ ಸಮಾಧಾನದಿಂದ ತುಂಬಿರಲಿ. ನೀವು ಒಂದೇ ಶರೀರವಾಗಿ ಬಾಳಲು ಕರೆಯಲ್ಪಟ್ಟಿದ್ದೀರಿ; ಕೃತಜ್ಞತೆ ಉಳ್ಳವರಾಗಿ ಜೀವಿಸಿರಿ.
16 : ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.
17 : ನುಡಿಯಲ್ಲಾಗಲೀ ನಡೆಯಲ್ಲಾಗಲೀ ನೀವು ಏನು ಮಾಡಿದರೂ ಯೇಸುಸ್ವಾಮಿಯ ಹೆಸರಿನಲ್ಲಿಯೇ ಮಾಡಿರಿ. ಅವರ ಮುಖಾಂತರವೇ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.
18 : ಮಹಿಳೆಯರೇ, ನಿಮ್ಮ ನಿಮ್ಮ ಪತಿಯರಿಗೆ ಪ್ರಭು ಮೆಚ್ಚುವಂತೆ ತಗ್ಗಿ ನಡೆದುಕೊಳ್ಳಿರಿ.
19 : ಪುರುಷರೇ, ನಿಮ್ಮ ನಿಮ್ಮ ಪತ್ನಿಯರನ್ನು ಪ್ರೀತಿಸಿರಿ. ಅವರೊಡನೆ ಕಠಿಣವಾಗಿ ವರ್ತಿಸದಿರಿ
20 : ಮಕ್ಕಳೇ, ಎಲ್ಲದರಲ್ಲೂ ನಿಮ್ಮ ತಂದೆತಾಯಿಗಳ ಮಾತು ಕೇಳಿರಿ. ಹೀಗೆ ಮಾಡಿದರೆ ಪ್ರಭುವಿಗೆ ಮೆಚ್ಚುಗೆಯಾಗುತ್ತದೆ.
21 : ತಾಯಿತಂದೆಯರೇ, ನಿಮ್ಮ ಮಕ್ಕಳನ್ನು ಕೆರಳಿಸಿ ಮನಕುಗ್ಗಿಸದಿರಿ.
22 : ದಾಸ್ಯದಲ್ಲಿರುವವರೇ, ಎಲ್ಲಾ ವಿಷಯಗಳಲ್ಲೂ ನಿಮ್ಮ ನಿಮ್ಮ ಧಣಿಗಳಿಗೆ ವಿಧೇಯರಾಗಿರಿ. ಧಣಿಗಳನ್ನು ಮೆಚ್ಚಿಸುವ ಸಲುವಾಗಿ ಮುಖದಾಕ್ಷಿಣ್ಯದ ಸೇವೆಮಾಡಬೇಡಿ. ಪ್ರಭುವಿಗೆ ಭಯಪಟ್ಟು ಪ್ರಾಮಾಣಿಕತೆಯಿಂದ ದುಡಿಯಿರಿ.
23 : ನೀವು ಏನನ್ನು ಮಾಡಿದರೂ ಪೂರ್ಣ ಮನಸ್ಸಿನಿಂದ ಮಾಡಿ; ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ಅಲ್ಲ, ಪ್ರಭುವನ್ನು ಮೆಚ್ಚಿಸುವುದಕ್ಕಾಗಿ ಮಾಡಿ.
24 : ಅದಕ್ಕೆ ಪ್ರತಿಫಲವಾಗಿ ಪ್ರಭುವಿನಿಂದ ನೀವು ಸ್ವರ್ಗೀಯ ಬಾಧ್ಯತೆಯನ್ನು ಪಡೆಯುವಿರೆಂದು ನಿಮಗೆ ತಿಳಿದೇ ಇದೆ.
25 : ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ಶಿಕ್ಷೆಯನ್ನು ಪಡೆಯುವನು. ದೇವರು ಪಕ್ಷಪಾತಿಯಲ್ಲ.