Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

2ತಿಮೊ


1 : ನನ್ನ ಪ್ರೀತಿಯ ಪುತ್ರ ತಿಮೊಥೇಯನಿಗೆ ಪೌಲನು ಬರೆಯುವ ಪತ್ರ. ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅಮರ ಜೀವದ ವಾಗ್ದಾನವನ್ನು ಸಾರಲು ದೈವಚಿತ್ತಾನುಸಾರ ಪ್ರೇಷಿತನಾದ ನಾನು ತಿಳಿಸುವುದೇನೆಂದರೆ:
2 : ಪಿತನಾಗಿರುವ ದೇವರೂ ಒಡೆಯರಾದ ಕ್ರಿಸ್ತಯೇಸುವೂ ನಿನಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನೂ ಅನುಗ್ರಹಿಸಲಿ!
3 : ನಾನು ಹಗಲಿರುಳೂ ನನ್ನ ಪ್ರಾರ್ಥನೆಯಲ್ಲಿ ತಪ್ಪದೆ ನಿನ್ನನ್ನು ಸ್ಮರಿಸಿಕೊಳ್ಳುತ್ತೇನೆ. ನನ್ನ ಪೂರ್ವಿಕರ ಹಾಗೆ ಶುದ್ಧಮನಸ್ಸಾಕ್ಷಿಯಿಂದ ನನ್ನ ಆರಾಧ್ಯ ದೇವರಿಗೆ ನಿನ್ನ ವಿಷಯವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ.
4 : ಅಂದು ನೀನು ಸುರಿಸಿದ ಕಣ್ಣೀರನ್ನು ನಾನು ಇನ್ನೂ ಮರೆತಿಲ್ಲ. ನಿನ್ನನ್ನು ಪುನಃ ನೋಡಿ ಆನಂದ ಪಡಬೇಕೆಂದು ಹಂಬಲಿಸುತ್ತಿದ್ದೇನೆ.
5 : ನಿನ್ನ ದೃಢವಿಶ್ವಾಸವು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿ ಲೋವಿಯಳಲ್ಲೂ ತಾಯಿ ಯೂನಿಸಳಲ್ಲೂ ನೆಲೆಗೊಂಡಿದ್ದ ವಿಶ್ವಾಸ ಈಗ ನಿನ್ನಲ್ಲೂ ಪೂರ್ಣವಾಗಿ ನೆಲೆಗೊಂಡಿದೆಯೆಂದು ನಾನು ನಂಬಿದ್ದೇನೆ.
6 : ನಾನು ನಿನ್ನ ಮೇಲೆ ಹಸ್ತ ನಿಕ್ಷೇಪಮಾಡಿ ಪ್ರಾರ್ಥಿಸಿದಾಗ ನೀನು ಪಡೆದಂಥ ವರದಾನವನ್ನು ಪುನಃ ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಫಿಸುತ್ತೇನೆ.
7 : ದೇವರು ನಮಗೆ ಪ್ರದಾನಮಾಡಿರುವ ಪವಿತ್ರಾತ್ಮ ನಮ್ಮನ್ನು ಹೇಡಿಗಳನ್ನಾಗಿ ಮಾಡುವುದಿಲ್ಲ; ನಮ್ಮಲ್ಲಿ ದೈವೀಶಕ್ತಿ, ಪ್ರೀತಿ ಹಾಗೂ ಸಂಯಮಗಳು ಪ್ರವರ್ಧಿಸುವಂತೆ ಮಾಡುತ್ತಾರೆ.
8 : ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು.
9 : ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.
10 : ಈ ಕಾಲದಲ್ಲೂ ನಮ್ಮ ಉದ್ಧಾರಕ ಕ್ರಿಸ್ತಯೇಸುವಿನ ಪ್ರತ್ಯಕ್ಷದ ಮೂಲಕ ಅದನ್ನು ಬಹಿರಂಗಪಡಿಸಲಾಗಿದೆ. ಮೃತ್ಯುಶಕ್ತಿಯನ್ನು ವಿನಾಶಗೊಳಿಸಿ ಅಮರ ಜೀವವನ್ನು ಶುಭಸಂದೇಶದ ಮೂಲಕ ಬೆಳಕಿಗೆ ತಂದವರು ಯೇಸುವೇ.
11 : ಈ ಶುಭಸಂದೇಶವನ್ನು ಸಾರುವುದಕ್ಕೇ ಎಂದು ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಬೋಧಕನನ್ನಾಗಿಯೂ ಶಿಕ್ಷಕನನ್ನಾಗಿಯೂ ನೇಮಿಸಿದ್ದಾರೆ.
12 : ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.
13 : ಕ್ರಿಸ್ತಯೇಸುವಿನಲ್ಲಿ ನಮ್ಮದಾಗಿರುವ ವಿಶ್ವಾಸ ಹಾಗೂ ಪ್ರೀತಿಯಲ್ಲಿ ನೀನು ನೆಲೆಗೊಂಡಿರು. ನಾನು ಬೋಧಿಸಿದ್ದನ್ನು ಆದರ್ಶವಾಗಿಟ್ಟುಕೊಂಡು ಅನುಸರಿಸು.
14 : ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ನಮ್ಮಲ್ಲಿ ವಾಸಿಸುವ ಪವಿತ್ರಾತ್ಮರ ಸಹಾಯದಿಂದ ಸುರಕ್ಷಿತವಾಗಿಡು.
15 : ಏಷ್ಯಾ ಪ್ರಾಂತ್ಯದವರೆಲ್ಲ ನನ್ನನ್ನು ಕೈಬಿಟ್ಟುಹೋದರೆಂದು ನೀನು ಬಲ್ಲೆ. ಅವರೊಡನೆ ಫುಗೇಲನೂ ಹೆರ್ಮೊಗೇನನೂ ಸಹ ಹೊರಟುಹೋದರು.
16 : ಏಷ್ಯಾ ಪ್ರಾಂತ್ಯದವರೆಲ್ಲ ನನ್ನನ್ನು ಕೈಬಿಟ್ಟುಹೋದರೆಂದು ನೀನು ಬಲ್ಲೆ. ಅವರೊಡನೆ ಫುಗೇಲನೂ ಹೆರ್ಮೊಗೇನನೂ ಸಹ ಹೊರಟುಹೋದರು.
17 : ನಾನು ಸೆರೆಯಾಳಾಗಿದ್ದರೂ ನಾಚಿಕೆಪಡದೆ ತಾನು ರೋಮ್ ನಗರಕ್ಕೆ ಬಂದ ಕೂಡಲೇ ನನ್ನನ್ನು ಎಲ್ಲೆಡೆಗಳಲ್ಲೂ ಹುಡುಕಿ ಕಂಡುಹಿಡಿದನು.
18 : ಅಂತಿಮ ದಿನದಂದು ಪ್ರಭು ಯೇಸು ಆತನಿಗೆ ಕರುಣೆತೋರಲಿ. ನಾನು ಏಷ್ಯಾದಲ್ಲಿದ್ದಾಗ ಆತನು ನನಗೆ ಎಷ್ಟೊಂದು ನೆರವು ನೀಡಿದನೆಂದು ನಿನಗೆ ಚೆನ್ನಾಗಿ ತಿಳಿದಿದೆ.

· © 2017 kannadacatholicbible.org Privacy Policy