Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

ಕೀರ್ತನೆ


1 : ಸುಪ್ರಸಿದ್ಧನು ದೇವನು ಜುದೇಯನಾಡಿನಲಿ / ಸುಪ್ರಖ್ಯಾತ ಆತನ ನಾಮ ಇಸ್ರಯೇಲಿನಲಿ //
2 : ಆತನ ಬಿಡಾರ ಸಾಲೇಮಿನಲಿ / ಆತನ ನಿವಾಸ ಸಿಯೋನಿನಲಿ //
3 : ಚೂರು ಚೂರು ಮಾಡಿಹನಲ್ಲಿ ಥಳಥಳಿಸುವ ಬಾಣಗಳನು / ಖಡ್ಗ, ಗುರಾಣಿ ಎಂಬೆಲ್ಲ ಯುದ್ಧಾಯುಧಗಳನು //
4 : ಹೇ ದೇವಾ, ನೀ ತೇಜೋಮಯನು / ಸ್ಥಿರಗಿರಿಗಳಿಗಿಂತ ಗಂಭೀರನು //
5 : ಕೆಚ್ಚೆದೆಯ ವೀರರು ಸುಲಿಗೆಯಾಗಿ ಚಿರನಿದ್ರೆಯಲಿಹರು / ಕೈಕತ್ತರಿಸಿದಂತಿರುವರು ಆ ರಣಧೀರರೆಲ್ಲರು //
6 : ನಿನ್ನ ಒಂದು ಗದರಿಕೆಗೆ, ಯಕೋಬನ ದೇವನೆ / ರಥಾಶ್ವಬಲಗಳೆಲ್ಲಾ ಬಿದ್ದಿವೆ ಬಿಮ್ಮನೆ //
7 : ನೀನಾದರೋ ದೇವಾ, ಮಹಾಭಯಂಕರನು / ಸಿಟ್ಟೇರಿದ ನಿನ್ನ ಮುಂದೆ ಯಾವನು ನಿಂತಾನು? //
8 : ನಿನ್ನ ನಿರ್ಣಯ ಸಗ್ಗದಿಂದ ಕೇಳಿಸಿದಾಗ / ಭಯಭೀತಿಯಿಂದ ತೆಪ್ಪಗಾಯ್ತು ಸಮಸ್ತ ಜಗ //
9 : ನ್ಯಾಯಸ್ಥಾಪನೆಗೆ ದೇವನೆದ್ದು ನಿಂತಾಗ / ಧರೆಯ ದೀನರನುದ್ಧರಿಸಲು ಅನುವಾದಾಗ / ಭಯಭೀತಿಯಿಂದ ತೆಪ್ಪಗಾಯ್ತು ಸಮಸ್ತ ಜಗ //
10 : ನರರ ಕೋಪ, ದೇವಾ ನಿನ್ನ ಘನತೆಗೆ ಸಾಧಕ / ಅಳಿದುಳಿದಾ ಕೋಪ ನಿನ್ನ ನಡುಕಟ್ಟಿಗೆ ಲಾಯಕ //
11 : ನಿಮ್ಮ ದೇವನಾದ ಸ್ವಾಮಿಗೆ ಸಲ್ಲಿಸಿರಿ ಹೊತ್ತ ಹರಕೆ / ಸುತ್ತಣರೆಲ್ಲರು ಸಮರ್ಪಿಸಲಿ ಭಯಂಕರನಿಗೆ ಕಾಣಿಕೆ //
12 : ಅರಸರ ದರ್ಪವನಡಗಿಸಿಬಿಡುವನು / ಭೂಪತಿಗಳಿಗೋ ಕಂಪನ ಕೊಡುವನು //

· © 2017 kannadacatholicbible.org Privacy Policy