Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

ವಿಮೋಚನಕಾಂಡ


1 : “ಬೆಚಲೇಲನು ಮತ್ತು ಒಹೋಲೀಯಾಬನು ಎಲ್ಲವನ್ನು ಸರ್ವೇಶ್ವರಸ್ವಾಮಿ ಆಜ್ಞಾಪಿಸಿದ ಪ್ರಕಾರವೇ ಮಾಡುವರು. ಬೇರೆ ಕಲೆಗಾರರು, ಅಂದರೆ ಸರ್ವೇಶ್ವರನಿಂದ ಜ್ಞಾನವಿವೇಕಗಳನ್ನು ಹೊಂದಿ, ದೇವ ಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಬೇಕಾದ ಸಕಲವಿಧ ವಸ್ತುಗಳನ್ನು ಮಾಡುವ ಕ್ರಮ ತಿಳಿದಿರುವವರು, ಅವರೊಂದಿಗೆ ಕೆಲಸಮಾಡುವರು,” ಎಂದನು.
2 : ಬೆಚಲೇಲನನ್ನು, ಒಹೋಲೀಯಾಬನನ್ನು ಮತ್ತು ಸರ್ವೇಶ್ವರನಿಂದ ಜ್ಞಾನಪಡೆದು ಕೆಲಸ ಕೈಗೊಳ್ಳಲು ಉತ್ಸುಕರಾಗಿದ್ದ ಕಲೆಗಾರರೆಲ್ಲರನ್ನು ಮೋಶೆ ತನ್ನ ಬಳಿಗೆ ಕರೆಸಿದನು.
3 : ಅವರು ದೇವ ಮಂದಿರದ ನಿರ್ಮಾಣಕ್ಕಾಗಿ ಜನರು ಕೊಟ್ಟಿದ್ದ ಕಾಣಿಕೆಗಳನ್ನು ಮೋಶೆಯ ಕೈಯಿಂದ ತೆಗೆದುಕೊಂಡರು. ಇಸ್ರಯೇಲರು ಪ್ರತಿದಿನ ಬೆಳಿಗ್ಗೆ ಮೋಶೆಯ ಬಳಿಗೆ ಬಂದು ಹೆಚ್ಚೆಚ್ಚು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು.
4 : ದೇವಮಂದಿರದ ನಿರ್ಮಾಣದಲ್ಲಿ ಮಗ್ನರಾಗಿದ್ದ ಆ ಶಿಲ್ಪಿಗಳೆಲ್ಲರು ತಮ್ಮ ತಮ್ಮ ಕೆಲಸವನ್ನು ಬಿಟ್ಟು ಮೋಶೆಯ ಬಳಿಗೆ ಬಂದು,
5 : “ಸರ್ವೇಶ್ವರ ಆಜ್ಞಾಪಿಸಿದ ಕೆಲಸಕ್ಕೆ ಬೇಕಾದುದಕ್ಕಿಂತಲೂ ಬಹಳ ಹೆಚ್ಚಾಗಿ ಜನರು ಕಾಣಿಕೆಗಳನ್ನು ತರುತ್ತಿದ್ದಾರೆ,” ಎಂದು ಹೇಳಿದರು.
6 : ಆಗ ಮೋಶೆ, “ದೇವಮಂದಿರದ ನಿರ್ಮಾಣಕ್ಕಾಗಿ ಯಾವ ಸ್ತ್ರೀ ಪುರುಷನು ಇನ್ನು ಮುಂದೆ ಏನನ್ನೂ ತರಬಾರದೆಂದು ಅಪ್ಪಣೆ ಮಾಡಿ, ಪಾಳೆಯದಲ್ಲಿ ಪ್ರಕಟಿಸಿ, ಜನರ ಕಾಣಿಕೆಗಳನ್ನು ನಿಲ್ಲಿಸಿಬಿಟ್ಟನು.
7 : ನಿರ್ಮಾಣ ಕೆಲಸ ಮುಗಿಸುವುದಕ್ಕೆ ಬೇಕಾಗುವುದಕ್ಕಿಂತಲೂ ಹೆಚ್ಚಾಗಿ ಸರಕುಸಾಮಾಗ್ರಿಗಳನ್ನು ಶೇಖರಿಸಲಾಗಿತ್ತು.
8 : ನಿಪುಣ ಶಿಲ್ಪಗಾರರೆಲ್ಲರು ಸೇರಿ ಹತ್ತು ತಾನು ನಯವಾದ ನಾರುಬಟ್ಟೆಯಿಂದ ಗುಡಾರವನ್ನು ನಿರ್ಮಿಸಿದರು. ಆ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳ ಚಿತ್ರವನ್ನು ಚಮತ್ಕಾರವಾಗಿ ಕಸೂತಿ ಹಾಕಿ ಮಾಡಿದರು.
9 : ಪ್ರತಿಯೊಂದು ಬಟ್ಟೆ ಇಪ್ಪತ್ತೆಂಟು ಮೊಳ ಉದ್ದ ಹಾಗು ನಾಲ್ಕು ಮೊಳ ಅಗಲವಾಗಿತ್ತು. ಎಲ್ಲ ಬಟ್ಟೆಗಳು ಒಂದೇ ಅಳತೆಯಾಗಿದ್ದವು.
10 : ಐದೈದು ಬಟ್ಟೆಗಳನ್ನು ಒಂದೊಂದಾಗಿ ಜೋಡಿಸಿದರು.
11 : ಈ ಎರಡು ಜೋಡನೆಗಳಲ್ಲಿ ಒಂದೊಂದರ ಕೊನೇ ಬಟ್ಟೆಯ ಅಂಚಿನಲ್ಲಿ ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿದರು.
12 : ಆ ಕುಣಿಕೆಗಳನ್ನು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರಾಗಿ ಇರಿಸಿದರು.
13 : ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿ ಆ ಬಟ್ಟೆಗಳನ್ನು ಒಂದಕ್ಕೊಂದು ಕೂಡಿಸಿದರು. ಹೀಗೆ ಒಂದೇ ಗುಡಾರ ಆಯಿತು.
14 : ಈ ಗುಡಾರದ ಮೇಲೆ ಹೊದಿಸುವುದಕ್ಕಾಗಿ ಆಡುಕೂದಲಿನ ಹನ್ನೊಂದು ತಾನು ಬಟ್ಟೆಗಳಿಂದ ಆ ಗುಡಾರಕ್ಕೆ ಮೇಲಣ ಡೇರೆಯನ್ನು ಮಾಡಿದರು.
15 : ಒಂದೊಂದು ಬಟ್ಟೆಯೂ ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇತ್ತು; ಎಲ್ಲಾ ಬಟ್ಟೆಗಳೂ ಒಂದೇ ಅಳತೆಯಾಗಿದ್ದವು.
16 : ಐದು ಬಟ್ಟೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಬಟ್ಟೆಗಳನ್ನು ಒಂದಾಗಿ ಜೋಡಿಸಿದರು.
17 : ಒಂದೊಂದರ ಕೊನೇ ಬಟ್ಟೆಯ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿಸಿದರು.
18 : ಒಂದೇ ಡೇರೆಯಾಗುವಂತೆ ಸಮಸ್ತವನ್ನು ಕೂಡಿಸುವುದಕ್ಕಾಗಿ ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿದರು.
19 : ಅದಲ್ಲದೆ ಹದಮಾಡಿರುವ ಕುರಿದೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನೂ ಕಡಲುಹಂದಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನೂ ಮಾಡಿದರು.
20 : ಗುಡಾರಕ್ಕೆ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿದರು.
21 : ಪ್ರತಿಯೊಂದು ಚೌಕಟ್ಟು ಹತ್ತು ಮೊಳ ಉದ್ದವಾಗಿಯೂ ಒಂದುವರೆ ಮೊಳ ಅಗಲವಾಗಿಯೂ ಇತ್ತು:
22 : ಪ್ರತಿಯೊಂದು ಚೌಕಟ್ಟೂ ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವು ಪಟ್ಟಿಗಳುಳ್ಳದ್ದಾಗಿತ್ತು: ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆ ಮಾಡಿದರು.
23 : ಗುಡಾರದ ದಕ್ಷಿಣ ದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಿದರು.
24 : ನಾಲ್ವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನು ಮಾಡಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಟ್ಟರು; ಒಂದೊಂದು ಚೌಕಟ್ಟಿನಲ್ಲಿರುವ ಎರಡು ನಿಲುವುಪಟ್ಟಿಗಳ ಕೆಳಗೆ ಒಂದೊಂದು ಗದ್ದಿಗೇಕಲ್ಲನ್ನು ಇಟ್ಟರು.
25 : ಹಾಗೆಯೇ ಗುಡಾರದ ಉತ್ತರದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮತ್ತು
26 : ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಗದ್ದಿಗೇಕಲ್ಲುಗಳ ಮೇರೆಗೆ ನಾಲ್ವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿದರು.
27 : ಗುಡಾರದ ಹಿಂಭಾಗಕ್ಕೆ, ಅಂದರೆ ಪಶ್ಚಿಮದಿಕ್ಕಿನಲ್ಲಿ ಆರು ಚೌಕಟ್ಟುಗಳನ್ನು ಮಾಡಿದರು.
28 : ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಿದರು
29 : ಅವು ಬುಡದಿಂದ ತುದಿಯವರೆಗೂ ಅಂದರೆ ಮೊದಲನೆಯ ಬಳೆಯ ತನಕ ಜೋಡಿಸಿದ್ದವು; ಹಾಗೆ ಎರಡು ಮೂಲೆಗಳಿಗೂ ಮಾಡಿದರು.
30 : ಹೀಗೆ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡು ಎರಡು ಬೆಳ್ಳಿಯ ಗದ್ದಿಗೇಕಲ್ಲುಗಳೂ, ಅಂತೂ ಹದಿನಾರು ಗದ್ದಿಗೇಕಲ್ಲುಗಳೂ ಇದ್ದವು.
31 : ಜಾಲೀಮರದಿಂದ ಅಗುಳಿಗಳನ್ನು ಮಾಡಿದರು
32 : ಹಿಂದುಗಡೆಯ ಅಂದರೆ ಪಶ್ಚಿಮ ಕಡೆಯ ಚೌಕಟ್ಟುಗಳಿಗೂ ಐದೈದು ಅಗುಳಿಗಳನ್ನು ಮಾಡಿದರು.
33 : ಚೌಕಟ್ಟುಗಳ ನಟ್ಟನಡುವೆಯಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ಮುಟ್ಟುವಂತೆ ಮಾಡಿದರು.
34 : ಆ ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿದರು. ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಿದರು
35 : ಹುರಿನಾರಿನ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರದಿಂದ ಕೆರೂಬಿಗಳ ಚಿತ್ರವನ್ನು ಚಮತ್ಕಾರವಾಗಿ ಕಸೂತಿ ಹಾಕಿ ಒಂದು ತೆರೆಯನ್ನು ಮಾಡಿದರು.
36 : ಅದಕ್ಕೆ ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿ ಚಿನ್ನದ ತಗಡುಗಳನ್ನು ಹೊದಿಸಿದರು; ಅವುಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿ, ನಾಲ್ಕು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಎರಕಹೊಯಿಸಿದರು.
37 : ಡೇರೆಯ ಬಾಗಿಲಿಗೆ ಹುರಿನಾರಿನ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದ ವಿಚಿತ್ರವಾಗಿ ಕಸೂತಿಹಾಕಿ ಪರದೆಯನ್ನು ಮಾಡಿದರು.
38 : ಆ ಪರದೆ ತೂಗಿಸುವುದಕ್ಕಾಗಿ ಐದು ಕಂಬಗಳನ್ನೂ ಅವುಗಳ ಕೊಂಡಿಗಳನ್ನೂ ಮಾಡಿ, ಅವುಗಳ ಬೋದಿಗೆಗಳಿಗೂ ಕಟ್ಟುಗಳಿಗೂ ಚಿನ್ನದ ತಗಡುಗಳನ್ನು ಹೊದಿಸಿದರು. ಅವುಗಳ ಐದು ಗದ್ದಿಗೇಕಲ್ಲುಗಳನ್ನು ತಾಮ್ರದಿಂದ ಮಾಡಿದರು.

· © 2017 kannadacatholicbible.org Privacy Policy